ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ರಾಯಚೂರು ಡಿಸಿ, ಎಸ್‌ಪಿ ವಿರುದ್ಧ ಕ್ರಮಕ್ಕೆ ಆಗ್ರಹ
ಹತ್ಯೆ, ಅತ್ಯಾಚಾರ ಪ್ರಕರಣಗಳ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ಕಲಬುರಗಿ, ಸೆ.1: ರಾಯಚೂರು ಜಿಲ್ಲೆಯಲ್ಲಿ ದಲಿತರ ಮೇಲೆ ನಡೆಯುತ್ತಿರುವ ಹತ್ಯೆ, ಅತ್ಯಾಚಾರ ಹಾಗೂ ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ, ಜಿಲ್ಲಾ ಪೊಲೀಸ್ ಮತ್ತು ಆಡಳಿತದ ವೈಫಲ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಬಿ. ಕೃಷ್ಣಪ್ಪ) ಬಣದ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಸಮಿತಿಯ ಜಿಲ್ಲಾ ಸಂಚಾಲಕ ಭೀಮಶ್ಯಾ ಖನ್ನಾ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ದೌರ್ಜನ್ಯಕ್ಕೊಳಗಾದ ಸಂತ್ರಸ್ತರಿಗೆ ಸೂಕ್ತ ಪರಿಹಾರ ಹಾಗೂ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಲಾಯಿತು.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ದಲಿತರ ಮೇಲಿನ ದೌರ್ಜನ್ಯ ತಡೆಗೆ ವಿಫಲ: ಆರೋಪ
ಪ್ರತಿಭಟನಾಕಾರರು ಮಾತನಾಡಿ, ರಾಯಚೂರು ಜಿಲ್ಲೆಯಲ್ಲಿ ದಲಿತ ಸಮುದಾಯದ ಯುವಕರು ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಹತ್ಯೆ, ಅತ್ಯಾಚಾರ, ಜಾತಿನಿಂದನೆ ಮತ್ತು ಇತರ ದೌರ್ಜನ್ಯ ಪ್ರಕರಣಗಳನ್ನು ತಡೆಯುವಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿದರು.
ವಿಶೇಷವಾಗಿ ಇತ್ತೀಚೆಗೆ ರಾಯಚೂರು ಜಿಲ್ಲೆಯಲ್ಲಿ ನಡೆದಿರುವ ಅಮಾನವೀಯ ಘಟನೆಗಳು ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಪ್ರಕರಣಗಳ ತನಿಖೆಯನ್ನು ನಿಷ್ಪಕ್ಷಪಾತವಾಗಿ ಹಾಗೂ ತ್ವರಿತವಾಗಿ ನಡೆಸಿ ತಪ್ಪಿತಸ್ಥ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಂತ್ರಸ್ತ ಕುಟುಂಬಗಳಿಗೆ ₹1 ಕೋಟಿ ಪರಿಹಾರಕ್ಕೆ ಆಗ್ರಹ
ದೇವದುರ್ಗ ತಾಲೂಕಿನ ಹದಿನಾಳ ಗ್ರಾಮದಲ್ಲಿ ಹಾಡಹಗಲೇ ನಡೆದ ಭೀಕರ ಹತ್ಯೆ ಪ್ರಕರಣದಲ್ಲಿ ಮೃತಪಟ್ಟ ಭೂಮಾನಂದ ಅವರ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಬೇಕು. ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಶಿರವಾರ ತಾಲೂಕಿನ ವಕಾನಿ ಗ್ರಾಮದ ಕು. ಅಶ್ವಿನಿ ಛಲವಾದಿ ಅವರ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಮೃತರ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡುವುದರ ಜೊತೆಗೆ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದರು.
ಲಿಂಗಸುಗೂರು ತಾಲೂಕಿನ ಕರಡಕಲ್ ಗ್ರಾಮದ ಶ್ರೀಮತಿ ರಾಣೆಮ್ಮ ಅವರ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿಯೂ ಆರೋಪಿಗಳಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಿ, ಮೃತರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಜಿಲ್ಲಾಧಿಕಾರಿ, ಎಸ್‌ಪಿ ವರ್ಗಾವಣೆಗೆ ಒತ್ತಾಯ
ದಲಿತ ಸಮುದಾಯದ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದ್ದರೂ ಅವುಗಳನ್ನು ತಡೆಯುವಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ವಿಫಲವಾಗಿವೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ರಾಯಚೂರು ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.
ಪ್ರಕರಣಗಳ ತನಿಖೆಯನ್ನು ಯಾವುದೇ ರಾಜಕೀಯ ಅಥವಾ ಅಧಿಕಾರದ ಒತ್ತಡಕ್ಕೆ ಒಳಗಾಗದೆ ನಿಷ್ಪಕ್ಷಪಾತವಾಗಿ ನಡೆಸಬೇಕು. ಆರೋಪಿಗಳು ಪ್ರಭಾವ ಅಥವಾ ರಾಜಕೀಯ ಒತ್ತಡದಿಂದ ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ದೌರ್ಜನ್ಯ ತಡೆಗೆ ಪರಿಣಾಮಕಾರಿ ಕ್ರಮ ಅಗತ್ಯ
ದಲಿತ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಪರಿಣಾಮಕಾರಿಯಾಗಿ ತಡೆಯಲು ಈಗಾಗಲೇ ಜಾರಿಯಲ್ಲಿರುವ ಕಾನೂನುಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಜಾತಿ ತಾರತಮ್ಯ, ಅಸ್ಪೃಶ್ಯತೆ, ಜಾತಿನಿಂದನೆ ಹಾಗೂ ದೌರ್ಜನ್ಯದ ವಿರುದ್ಧ ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪತ್ರಿಕೆ, ದೂರದರ್ಶನ ಹಾಗೂ ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ಮಾಧ್ಯಮಗಳ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ದಲಿತರ ಹಕ್ಕುಗಳು ಮತ್ತು ಅವರ ಮೇಲಿನ ದೌರ್ಜನ್ಯ ತಡೆಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಮನವಿ ಮಾಡಿದರು.
ಕೊಲೆ ಮತ್ತು ಅತ್ಯಾಚಾರದಂತಹ ಗಂಭೀರ ಅಪರಾಧ ಪ್ರಕರಣಗಳಲ್ಲಿ ಕಾನೂನು ಪ್ರಕಾರ ಅತ್ಯಂತ ಕಠಿಣ ಶಿಕ್ಷೆಯಾಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕಾನೂನು ಕ್ರಮಗಳನ್ನು ಮತ್ತಷ್ಟು ಬಲಪಡಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಸಂಚಾಲಕ ಸುರೇಶ್ ಮೆಂಗನ್, ಧರ್ಮಣ್ಣ ಕೋಣೆಕರ್, ದೇವೇಂದ್ರ ಶೆಳ್ಳಗಿ, ಪುಂಡಲೀಕ ಗಾಯಕ್ವಾಡ್, ಶಿವಕುಮಾರ್ ಆಜಾದ್‌ಪುರ, ದವಳಪ್ಪ ಮದನ್, ಭರತ್ ಖನ್ನಾ, ಬಸವರಾಜ ಮಯೂರ್, ಶಿವಪುತ್ರ ಹಗರಗಿ, ವಿಜಯಕುಮಾರ್ ಟೈಗರ್, ವಿಜಯಕುಮಾರ್ ಜೋಗೂರ್, ಶ್ಯಾಮರಾಯ ಸಿಂಧೆ, ಬಸವರಾಜ ಅಷ್ಟಗಿ, ಮಡಿವಾಳಪ್ಪ ಕಟ್ಟಿಮನಿ, ಭಾಗಣ್ಣ ಕಟ್ಟಿ, ಸವಿತಾ ಸೇರಿದಂತೆ ಹಲವರು ಭಾಗವಹಿಸಿದ್ದರು.



