ಜಿಲ್ಲಾಸುದ್ದಿ

ವಿದ್ಯಾರ್ಥಿಗಳು ದೊಡ್ಡ ಕನಸಿನೊಂದಿಗೆ ಗುರಿ ಸಾಧಿಸಲು ಕಠಿಣ ಪರಿಶ್ರಮಪಡಬೇಕು: ಪ್ರೊ. ಬಟ್ಟು ಸತ್ಯನಾರಾಯಣ

ಕಲಬುರಗಿ, ಸೆ.2- ವಿದ್ಯಾರ್ಥಿಗಳು ದೊಡ್ಡ ಕನಸುಗಳನ್ನು ಹೊಂದುವುದರ ಜೊತೆಗೆ ಕಠಿಣ ಪರಿಶ್ರಮದ ಮೂಲಕ ತಮ್ಮ ಗುರಿಗಳನ್ನು ಸಾಧಿಸುವ ಸಂಕಲ್ಪ ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಕರೆ ನೀಡಿದರು.

ಅಫಿನಿಟಿ ಗ್ರೂಪ್ ಹಾಗೂ ಉನ್ನತ ಭಾರತ ಅಭಿಯಾನದ ಸಹಯೋಗದೊಂದಿಗೆ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ವಿದ್ಯಾವರ್ಧಕ ಸಂಘದ ಸಂಯುಕ್ತ ಪ್ರೌಢಶಾಲೆ ಮತ್ತು ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಮೂರು ದಿನಗಳ ‘ಪ್ರವರ್ತನ ವಿಸ್ತರಣಾ ಕಾರ್ಯಕ್ರಮ’ದಲ್ಲಿ ಮಾತನಾಡಿದ ಅವರು, ದೇಶದ ಪ್ರಧಾನಿಗಳು, ರಾಷ್ಟ್ರಪತಿಗಳು ಹಾಗೂ ಮಾಜಿ ರಾಷ್ಟ್ರಪತಿ ಮತ್ತು ಖ್ಯಾತ ವಿಜ್ಞಾನಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜೀವನ ಸಾಧನೆಗಳನ್ನು ವಿದ್ಯಾರ್ಥಿಗಳಿಗೆ ಉದಾಹರಣೆಯಾಗಿ ನೀಡಿದರು.

ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜೀವನ ಪಯಣದಿಂದ ಸ್ಫೂರ್ತಿ ಪಡೆದು ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯ, ದೃಢನಿಶ್ಚಯ ಹಾಗೂ ಆಕಾಂಕ್ಷೆಗಳ ಮೇಲೆ ಗಮನ ಕೇಂದ್ರೀಕರಿಸಬೇಕು. ಜೀವನದಲ್ಲಿ ಎಷ್ಟೇ ಸವಾಲುಗಳು ಎದುರಾದರೂ ಆತ್ಮವಿಶ್ವಾಸದಿಂದ ಮುನ್ನಡೆದು ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕ ಸ್ವಯಂಸೇವಕರ ನೇತೃತ್ವದಲ್ಲಿ ನಡೆದ ತರಬೇತಿ ಕಾರ್ಯಕ್ರಮದಲ್ಲಿ 10ನೇ ತರಗತಿಯ 65ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಂವಾದಾತ್ಮಕ ಅವಧಿಗಳು ಹಾಗೂ ಪ್ರಾಯೋಗಿಕ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ತಂಡದ ಮನೋಭಾವ, ವೈಜ್ಞಾನಿಕ ಕುತೂಹಲ ಹಾಗೂ ತಾಂತ್ರಿಕ ಅರಿವು ಬೆಳೆಸುವ ಉದ್ದೇಶದಿಂದ ತರಬೇತಿ ನೀಡಲಾಯಿತು.

ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರು ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನಗಳು ಮತ್ತು ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಇಂತಹ ತರಬೇತಿ ಹಾಗೂ ಪ್ರಾಯೋಗಿಕ ಚಟುವಟಿಕೆಗಳು ಸಹಕಾರಿಯಾಗಲಿವೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಶಾಲೆಯ ಪ್ರಾಂಶುಪಾಲ ಲಿಂಗರಾಜ್ ಎಸ್. ಪಾಟೀಲ ಅವರು ವಂದಿಸಿದರು.

Related Articles

Leave a Reply

Your email address will not be published. Required fields are marked *

Back to top button