ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಲು ಆಗ್ರಹ: ಕೆಕೆಆರ್‌ಡಿಬಿ ಕಚೇರಿ ಮುಂದೆ ಧರಣಿ

ಕಲಬುರಗಿ, ಸೆ.9: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೂ ಅಗತ್ಯ ಸೌಲಭ್ಯ ಹಾಗೂ ಅನುದಾನ ಒದಗಿಸಬೇಕು ಎಂದು ಆಗ್ರಹಿಸಿ ಕಲ್ಯಾಣ ಕರ್ನಾಟಕ ವಿಭಾಗೀಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಸಂಘದ ನೇತೃತ್ವದಲ್ಲಿ ಬುಧವಾರ ಮಂಡಳಿ ಕಚೇರಿ ಎದುರು ಧರಣಿ ನಡೆಯಿತು.
ಸಂಘದ ಅಧ್ಯಕ್ಷ ಸುನೀಲಕುಮಾರ್ ಆರ್. ಹುಡಗಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ರೇವಣಸಿದ್ದಪ್ಪ ಸೇರಿದಂತೆ ವಿವಿಧ ಜಿಲ್ಲೆಗಳ ಪದಾಧಿಕಾರಿಗಳು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಪ್ರತಿನಿಧಿಗಳು ಭಾಗವಹಿಸಿದ್ದರು.
ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು ಸ್ವಾತಂತ್ರ್ಯ ಪೂರ್ವದಿಂದಲೂ ಸಮಾಜಕ್ಕೆ ಶಿಕ್ಷಣ ಸೇವೆ ಸಲ್ಲಿಸುತ್ತಿವೆ. ಆದರೆ ಈ ಭಾಗ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಹಿನ್ನೆಲೆಯಲ್ಲಿ 371(ಜೆ) ಅಡಿಯಲ್ಲಿ ವಿಶೇಷ ಸೌಲಭ್ಯಗಳು ದೊರೆಯುತ್ತಿದ್ದರೂ, ಅವುಗಳ ಪ್ರಯೋಜನ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ಸರ್ಕಾರಿ ಶಾಲೆಗಳಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ನೀಡುತ್ತಿರುವ ವಿವಿಧ ಸೌಲಭ್ಯಗಳನ್ನು ಖಾಸಗಿ ಅನುದಾನ ರಹಿತ ಶಾಲೆಗಳಿಗೂ ವಿಸ್ತರಿಸಬೇಕು ಎಂದು ಅವರು ಒತ್ತಾಯಿಸಿದರು.
ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹ
2012ರಲ್ಲಿ ಮಂಡಳಿಯಿಂದ ಜಾರಿಗೊಳಿಸಲಾಗಿದ್ದ ಮಾದರಿಯಂತೆ ಆರ್‌ಟಿಇ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಪ್ರವೇಶ ಪಡೆಯುವ ಮಕ್ಕಳಿಗೆ ಸಂಬಂಧಿಸಿದ ಅನುದಾನವನ್ನು ನೀಡಬೇಕು. 1995ರ ನಂತರ ಆರಂಭವಾದ ಖಾಸಗಿ ಅನುದಾನ ರಹಿತ ಶಾಲೆಗಳನ್ನು ವೇತನ ಅನುದಾನದ ವ್ಯಾಪ್ತಿಗೆ ತರಬೇಕು ಎಂದು ಮನವಿ ಮಾಡಿದರು.
ಇದಲ್ಲದೆ, ಖಾಸಗಿ ಶಾಲೆಗಳಿಗೆ ವಿವಿಧ ಮೂಲಸೌಕರ್ಯಗಳ ಅಭಿವೃದ್ಧಿಗೆ ಮಂಡಳಿಯಿಂದ ಅನುದಾನ ನೀಡಬೇಕು, ಶಾಲೆಗಳ ನವೀಕರಣ ಪ್ರಕ್ರಿಯೆಯನ್ನು ಸರಳಗೊಳಿಸಬೇಕು ಹಾಗೂ ಸರ್ಕಾರಿ ಶಾಲೆಗಳಿಗೆ ನೀಡುವಂತೆ ಖಾಸಗಿ ಅನುದಾನ ರಹಿತ ಶಾಲೆಗಳಿಗೂ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ನಗರ ಪಾಲಿಕೆ ಮತ್ತು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಶಾಲೆಗಳ ಆಸ್ತಿಗಳಿಗೆ ತೆರಿಗೆ ವಿನಾಯಿತಿ ನೀಡಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಖಾಸಗಿ ಶಾಲೆಗಳಿಗೂ ತೆರಿಗೆ ವಿನಾಯಿತಿ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕಲಬುರಗಿ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಗೆ ಹೆಚ್ಚಿನ ಸ್ವಾಯತ್ತತೆ ನೀಡಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಮೀಸಲಾತಿ ನೀಡುವ ಕುರಿತು ಮುಖ್ಯಮಂತ್ರಿ ನೀಡಿರುವ ಹೇಳಿಕೆಯಿಂದ ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಅನ್ಯಾಯವಾಗಲಿದೆ. ಗ್ರಾಮೀಣ ಪ್ರದೇಶದ ಖಾಸಗಿ ಶಾಲೆಗಳ ಮೇಲೂ ಇದರಿಂದ ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ಈ ನೀತಿಯನ್ನು ಮರುಪರಿಶೀಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ನಂತರ ಸಂಘದ ಪದಾಧಿಕಾರಿಗಳು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಘುನಾಥರೆಡ್ಡಿ ಚಿಂತಕಿ, ರಾಜೇಂದ್ರಕುಮಾರ್, ಗುರುನಾಥ ದೇಶಮುಖ್, ಜಯವಂತ ಉಜನಿಕರ್, ನಾರಾಯಣ ರಾಮಪುರ, ಸುಭಾಷ್ ಹುಲಸೂರೆ, ಹಣಮಂತ ಹುಲಪ್ಪನವರ್ ಸೇರಿದಂತೆ ವಿವಿಧ ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.



