ಕೆಪಿಎಸ್‌ಸಿ ನೇಮಕಾತಿ ಅಕ್ರಮ: ಕಲಬುರಗಿ ಅಭ್ಯರ್ಥಿ ಮಮಿತಾ ಮನೆ ಮೇಲೆ ಸಿಐಡಿ ದಾಳಿ

ಕಲಬುರಗಿ, ಸೆ. 9: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮದ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ತೀವ್ರಗೊಂಡಿದ್ದು, ಬುಧವಾರ ಕಲಬುರಗಿ ನಗರದ ರಾಮಮಂದಿರದ ಬಳಿಯ ಓಜಾ ಲೇಔಟ್‌ನಲ್ಲಿರುವ ಅಭ್ಯರ್ಥಿ ಮಮಿತಾ ಅವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ಪಶು ವೈದ್ಯಾಧಿಕಾರಿಗಳ ನೇಮಕಾತಿಗೆ ಮಮಿತಾ ಅವರು ಅಭ್ಯರ್ಥಿಯಾಗಿದ್ದು, ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಅವರ ಮೂಲಕ ವ್ಯವಹಾರ ನಡೆಸಿ ನೇಮಕಾತಿ ಪಡೆದಿದ್ದಾರೆ ಎಂಬ ಆರೋಪ ಪ್ರಕರಣದ ತನಿಖೆಯಲ್ಲಿ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಅವರ ನಿವಾಸದಲ್ಲಿ ಸಂಬಂಧಿತ ದಾಖಲೆಗಳು ಹಾಗೂ ಇತರ ಮಾಹಿತಿಯನ್ನು ಪರಿಶೀಲಿಸಿದ್ದಾರೆ ಎಂದು ತಿಳಿದುಬಂದಿದೆ.
20ಕ್ಕೂ ಹೆಚ್ಚು ಅಧಿಕಾರಿಗಳಿಂದ ಕಾರ್ಯಾಚರಣೆ
ಬೆಂಗಳೂರು ಸಿಐಡಿಯ ಡಿವೈಎಸ್‌ಪಿ ಹಾಗೂ ಕಲಬುರಗಿ ಡಿವೈಎಸ್‌ಪಿ ಅಸ್ಲಂ ಪಾಷಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಸುಮಾರು 20ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಅಧಿಕಾರಿಗಳು ಕೆಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತನಿಖಾ ಮೂಲಗಳು ತಿಳಿಸಿವೆ. ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಈ ದಾಖಲೆಗಳು ತನಿಖೆಗೆ ನೆರವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಕಲಬುರಗಿ ಮೂಲದ ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಅವರು ಕಳೆದ ಮೂರು ವಾರಗಳಿಂದ ನಾಪತ್ತೆಯಾಗಿದ್ದು, ಇದುವರೆಗೆ ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಶಿವಶಂಕರಪ್ಪ ಮನೆ ಮೇಲೂ ದಾಳಿ
ಇದಕ್ಕೂ ಮುನ್ನ ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್ ಅವರ ಕಲಬುರಗಿ ನಗರದ ನಿವಾಸದ ಮೇಲೂ ಸಿಐಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳು ಹಾಗೂ ಕೆಲವು ಮಾಹಿತಿಯನ್ನು ಸಂಗ್ರಹಿಸಿದ್ದರು.
ನೇಮಕಾತಿ ಅಕ್ರಮದ ತನಿಖೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಇನ್ನಷ್ಟು ಮಂದಿಯ ಹೆಸರುಗಳು ಹಾಗೂ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿಗಳು ಹೊರಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಬೀದರ್‌ನಲ್ಲೂ ವಿಚಾರಣೆ
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬೀದರ್‌ನಲ್ಲಿ ಬಸವರಾಜ್ ಕನಾಳೆ ಅವರ ವಿಚಾರಣೆಯೂ ಮುಂದುವರಿದಿದೆ. ಕೆಪಿಎಸ್‌ಸಿ ನೇಮಕಾತಿ ಅಕ್ರಮದ ತನಿಖೆ ರಾಜ್ಯದ ವಿವಿಧೆಡೆ ವಿಸ್ತರಿಸಿರುವ ಹಿನ್ನೆಲೆಯಲ್ಲಿ ಪ್ರಕರಣದ ಮುಂದಿನ ಬೆಳವಣಿಗೆಗಳ ಬಗ್ಗೆ ಕುತೂಹಲ ಮೂಡಿದೆ.
ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪದ ಕುರಿತು ಸಿಐಡಿ ತನಿಖೆ ನಡೆಸುತ್ತಿದ್ದು, ದಾಖಲೆಗಳ ಪರಿಶೀಲನೆ ಹಾಗೂ ಸಂಬಂಧಪಟ್ಟವರ ವಿಚಾರಣೆ ಮುಂದುವರಿದಿದೆ.



