27 ಎಕರೆ ಭೂಮಿ ಅಕ್ರಮ ಕಬಳಿಕೆ ಆರೋಪ: ಮಾಜಿ KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ದೂರು

ಕಲಬುರಗಿ, ಸೆ.9: ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಬಂಧನದ ಭೀತಿ ಎದುರಾಗಿರುವ ಬೆನ್ನಲ್ಲೇ, ಅವರ ವಿರುದ್ಧ 27 ಎಕರೆ ಭೂಮಿ ಕಬಳಿಕೆ ಆರೋಪವೂ ಕೇಳಿಬಂದಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಅಣಬಿ ಗ್ರಾಮದ ಸರ್ವೆ ನಂ. 242 ಮತ್ತು 245ರಲ್ಲಿ ಇರುವ 27 ಎಕರೆ ಜಮೀನಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಮಿ ಕಬಳಿಸಲಾಗಿದೆ ಎಂದು ಭೂಮಾಲಕಿ ಬಸಮ್ಮ ಅವರ ಕುಟುಂಬದವರು ಆರೋಪಿಸಿದ್ದಾರೆ.
ಅಣಬಿ ಗ್ರಾಮದ ಶಂಕರಗೌಡ ಎಂಬವರ ಮೂಲಕ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಮೊದಲು ಭೂಮಿಯನ್ನು ಅಳಿಯನ ಹೆಸರಿಗೆ ನೋಂದಾಯಿಸಿ, ನಂತರ ಶಿವಶಂಕರಪ್ಪ ಸಾಹುಕಾರ್ ಅವರ ಹೆಸರಿಗೆ ವರ್ಗಾಯಿಸಲಾಗಿದೆ ಎಂಬ ಆರೋಪ ಮಾಡಲಾಗಿದೆ.
ಈ ಸಂಬಂಧ ಬಸಮ್ಮ ಕುಟುಂಬದವರು ಶಹಾಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಇನ್ನೊಂದೆಡೆ, ಪಶು ವೈದ್ಯಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದ ಅಕ್ರಮ ಪ್ರಕರಣದಲ್ಲಿ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿರುವ ಹಿನ್ನೆಲೆಯಲ್ಲಿ ಬಂಧನದ ಆತಂಕ ಎದುರಾಗಿದೆ. ಸಿಐಡಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅಧಿಕಾರಿಗಳು ಅವರ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿದರೂ ಅವರು ಮನೆಯಲ್ಲಿ ಇರಲಿಲ್ಲ ಎಂದು ವರದಿಯಾಗಿದೆ.
ನೀಟ್ ಪರೀಕ್ಷೆ ಅಕ್ರಮದ ಕುರಿತು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಸೇರಿದಂತೆ ವಿವಿಧ ನೇಮಕಾತಿ ಅಕ್ರಮಗಳ ಬಗ್ಗೆ ಜನರಲ್ಲಿ ಆಕ್ರೋಶ ಹೆಚ್ಚುತ್ತಿರುವ ಸಂದರ್ಭದಲ್ಲಿ, KPSC ಮೇಲಿನ ವಿಶ್ವಾಸ ಕಾಪಾಡಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವೂ ಕೇಳಿಬರುತ್ತಿದೆ.



