ಜಿಲ್ಲಾಸುದ್ದಿ

ವಿಕಸಿತ ಭಾರತ 2047 ಗುರಿ ಸಾಧನೆಗೆ ಯುವಜನರ ಜ್ಞಾನ, ಕೌಶಲ್ಯ ಬಳಕೆಯಾಗಲಿ: ಪ್ರೊ. ಬಟ್ಟು ಸತ್ಯನಾರಾಯಣ

ಕಲಬುರಗಿ, ಸೆ.21: ರಾಷ್ಟ್ರ ನಿರ್ಮಾಣದಲ್ಲಿ ತಂತ್ರಜ್ಞಾನ, ನಾವೀನ್ಯತೆ, ಸಂಶೋಧನೆ ಹಾಗೂ ಅಂತರಶಿಸ್ತೀಯ ಸಹಕಾರ ಅತ್ಯಗತ್ಯ. ‘ವಿಕಸಿತ ಭಾರತ 2047’ರ ಗುರಿ ಸಾಧನೆಗೆ ಯುವಜನರು ತಮ್ಮ ಜ್ಞಾನ, ಕೌಶಲ್ಯ ಮತ್ತು ನಾವೀನ್ಯತೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಕರೆ ನೀಡಿದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಎಂಜಿನಿಯರಿಂಗ್ ವತಿಯಿಂದ ಎಂಜಿನಿಯರ್ಸ್‌ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ‘ಯಾಂತ್ರಿಕ-2026’ ತಾಂತ್ರಿಕ ಉತ್ಸವದಲ್ಲಿ ಮಾತನಾಡಿದ ಅವರು, ಭಾರತದ ಅಭಿವೃದ್ಧಿಗೆ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರು ನೀಡಿದ ಮಹತ್ವದ ಕೊಡುಗೆಗಳನ್ನು ಸ್ಮರಿಸಿದರು.

ಶಿಸ್ತು, ಸಮರ್ಪಣಾ ಭಾವ ಹಾಗೂ ಕಠಿಣ ಪರಿಶ್ರಮದಂತಹ ಮೌಲ್ಯಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದೇಶದ ಪ್ರಗತಿಗೆ ತಾಂತ್ರಿಕ ಜ್ಞಾನವನ್ನು ಸಮಾಜದ ಹಿತಕ್ಕಾಗಿ ಬಳಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ್ ಮಾತನಾಡಿ, ವಿಶ್ವವಿದ್ಯಾಲಯ ಒದಗಿಸಿರುವ ಅತ್ಯಾಧುನಿಕ ಮೂಲಸೌಕರ್ಯ, ಶೈಕ್ಷಣಿಕ ಸೌಲಭ್ಯಗಳು ಹಾಗೂ ವಿವಿಧ ಅವಕಾಶಗಳನ್ನು ವಿದ್ಯಾರ್ಥಿಗಳು ಪರಿಣಾಮಕಾರಿಯಾಗಿ ಬಳಸಿಕೊಂಡು ತಮ್ಮ ಜ್ಞಾನ, ಕೌಶಲ್ಯ ಮತ್ತು ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು. ಕಲಿಕೆಯನ್ನು ಕೇವಲ ಪದವಿಗೆ ಸೀಮಿತಗೊಳಿಸದೆ, ಸಮಾಜದ ಅಗತ್ಯಗಳಿಗೆ ಸ್ಪಂದಿಸುವ ಜ್ಞಾನವಾಗಿ ರೂಪಿಸಿಕೊಂಡು ರಾಷ್ಟ್ರದ ಅಭಿವೃದ್ಧಿಗೆ ಸಕ್ರಿಯ ಕೊಡುಗೆ ನೀಡಬೇಕು ಎಂದರು.

ನವದೆಹಲಿ ಯುಜಿಸಿ ಜಂಟಿ ಕಾರ್ಯದರ್ಶಿ ಡಾ. ಗೋಪಿಚಂದ್ ಮೆರುಗು ಮಾತನಾಡಿ, ವಿದ್ಯಾರ್ಥಿಗಳು ಸಮಾಜದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಅರ್ಥಪೂರ್ಣ ಸಂಶೋಧನೆಗಳನ್ನು ಕೈಗೊಳ್ಳಬೇಕು. ಸಮಾಜದ ಹಿತಕ್ಕಾಗಿ ನವೀನ ಪರಿಹಾರಗಳನ್ನು ಅಭಿವೃದ್ಧಿಪಡಿಸುವತ್ತ ಗಮನಹರಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕಂಪ್ಯೂಟರ್ ವಿಜ್ಞಾನ ನಿಕಾಯದ ಡೀನ್ ಪ್ರೊ. ಆರ್.ಎಸ್. ಹೆಗಡೆ, ಎಂಜಿನಿಯರಿಂಗ್ ನಿಕಾಯದ ಡೀನ್ ಪ್ರೊ. ಅಮರೇಂದ್ರ ಮಸ್ತಾ, ಗಣಿತ ವಿಭಾಗದ ಮುಖ್ಯಸ್ಥ ಪ್ರೊ. ಜನಾರ್ದನ ರೆಡ್ಡಿ ಸೇರಿದಂತೆ ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್, ಕಂಪ್ಯೂಟರ್ ವಿಜ್ಞಾನ ಹಾಗೂ ಎಂಜಿನಿಯರಿಂಗ್ ವಿಭಾಗಗಳ ಬೋಧಕ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಡಾ. ನಿತಿನ್ ಭೀಮರಾವ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮವು ವಂದೇ ಮಾತರಂ ಗೀತೆಯೊಂದಿಗೆ ಆರಂಭವಾಗಿ ರಾಷ್ಟ್ರಗೀತೆಯೊಂದಿಗೆ ಮುಕ್ತಾಯಗೊಂಡಿತು.

‘ವಿಕಸಿತ ಭಾರತ 2047’ ವಿಷಯದಡಿ ಸೆ.15ರಿಂದ 21ರವರೆಗೆ ನಡೆಯುತ್ತಿರುವ ಐದು ದಿನಗಳ ತಾಂತ್ರಿಕ ಉತ್ಸವದಲ್ಲಿ ರಸಪ್ರಶ್ನೆ, ಹ್ಯಾಕಥಾನ್, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಪ್ರಾಜೆಕ್ಟ್ ಪ್ರದರ್ಶನ ಸೇರಿದಂತೆ ವಿವಿಧ ತಾಂತ್ರಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ತಾಂತ್ರಿಕ ಜ್ಞಾನ, ಸೃಜನಶೀಲತೆ, ನಾವೀನ್ಯತೆ ಹಾಗೂ ತಂಡದ ಕಾರ್ಯನಿರ್ವಹಣಾ ಕೌಶಲ್ಯಗಳನ್ನು ಪ್ರದರ್ಶಿಸಲು ಈ ಚಟುವಟಿಕೆಗಳು ವೇದಿಕೆ ಒದಗಿಸಿವೆ.

Related Articles

Leave a Reply

Your email address will not be published. Required fields are marked *

Back to top button