ಜಿಲ್ಲಾಸುದ್ದಿ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಅಧ್ಯಯನ, ಸಂಶೋಧನೆ ಆಧಾರ ಅಗತ್ಯ: ಪ್ರೊ. ಬಟ್ಟು ಸತ್ಯನಾರಾಯಣ

ಕಲಬುರಗಿ, ಸೆ.17: ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಅಧ್ಯಯನ ಮತ್ತು ಸಂಶೋಧನೆ ಆಧಾರವಾಗಬೇಕು ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಹೇಳಿದರು.ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಗುರುವಾರ ಹೈದರಾಬಾದ್ ಕರ್ನಾಟಕ ಪ್ರದೇಶವು ಭಾರತೀಯ ಒಕ್ಕೂಟದೊಂದಿಗೆ ವಿಲೀನಗೊಂಡ ಐತಿಹಾಸಿಕ ಘಟನೆಯನ್ನು ಸ್ಮರಿಸುವ 79ನೇ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಏಕೀಕರಣದ ಪಿತಾಮಹ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.1947ರ ಆಗಸ್ಟ್ 15ರಂದು ದೇಶ ಸ್ವಾತಂತ್ರ್ಯ ಪಡೆದರೂ, ಹೈದರಾಬಾದ್ ಸಂಸ್ಥಾನದ ನಿಜಾಮರ ಆಳ್ವಿಕೆಯಲ್ಲಿದ್ದ ಈ ಪ್ರದೇಶವು 1948ರ ಸೆಪ್ಟೆಂಬರ್ 17ರಂದು ಭಾರತೀಯ ಒಕ್ಕೂಟದೊಂದಿಗೆ ವಿಲೀನಗೊಂಡಿತು ಎಂದು ಅವರು ತಿಳಿಸಿದರು.ಹೈದರಾಬಾದ್ ಕರ್ನಾಟಕ ಪ್ರದೇಶದ ನಿಜಾಮರ ದಬ್ಬಾಳಿಕೆ ಹಾಗೂ ದೌರ್ಜನ್ಯದ ವಿರುದ್ಧ ನಡೆದ ಹೋರಾಟಗಳಲ್ಲಿ ಅನೇಕ ದೇಶಭಕ್ತರು ಭಾಗವಹಿಸಿದ್ದರು. ಸಾವಿರಾರು ಜನರ ತ್ಯಾಗ ಮತ್ತು ಬಲಿದಾನದ ಫಲವಾಗಿ ಈ ಪ್ರದೇಶವು ಭಾರತದ ಭಾಗವಾಯಿತು. ಈ ಐತಿಹಾಸಿಕ ದಿನ ಕಲ್ಯಾಣ ಕರ್ನಾಟಕದ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದರು.ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಯಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪಾತ್ರ ಮಹತ್ವದ್ದಾಗಿದೆ. ಈ ಭಾಗದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ವಿಶ್ವವಿದ್ಯಾಲಯ ತನ್ನದೇ ಆದ ಕೊಡುಗೆ ನೀಡಬೇಕು ಎಂದು ಹೇಳಿದರು.ಕಲ್ಯಾಣ ಕರ್ನಾಟಕದ ಹಿಂದುಳಿಯುವಿಕೆಗೆ ಕಾರಣವಾಗಿರುವ ಅಂಶಗಳನ್ನು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ವೈಜ್ಞಾನಿಕವಾಗಿ ಅಧ್ಯಯನ ಮಾಡಬೇಕು. ಸಂಶೋಧನೆಯ ಆಧಾರದ ಮೇಲೆ ಸೂಕ್ತ ವರದಿಗಳನ್ನು ಸಿದ್ಧಪಡಿಸಿ ಸರ್ಕಾರಗಳಿಗೆ ಸಲ್ಲಿಸುವ ಮೂಲಕ ಪರಿಣಾಮಕಾರಿ ನೀತಿ ರೂಪಣೆಗೆ ಸಹಕರಿಸಬೇಕು ಎಂದು ಸಲಹೆ ನೀಡಿದರು.ಸಂಶೋಧನಾ ಆಧಾರಿತ ಅಧ್ಯಯನಗಳು ಹಾಗೂ ವರದಿಗಳು ಸರ್ಕಾರದ ಅಧಿಕೃತ ನೀತಿ ನಿರೂಪಣೆಗೆ ಆಧಾರವಾಗಬೇಕು. ಈ ಮೂಲಕ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಇನ್ನಷ್ಟು ವೇಗ ನೀಡುವ ಕೆಲಸ ನಡೆಯಬೇಕು. ವಿಶ್ವವಿದ್ಯಾಲಯವು ತನ್ನ ಸಾಮಾಜಿಕ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ಈ ಭಾಗದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಪ್ರೊ. ಬಟ್ಟು ಸತ್ಯನಾರಾಯಣ ಹೇಳಿದರು.ಪ್ರತಿ ಜಿಲ್ಲೆಯ ವೈಶಿಷ್ಟ್ಯ ಅರಿತು ಅಭಿವೃದ್ಧಿಗೆ ಶ್ರಮಿಸಬೇಕುಕುಲಸಚಿವ ಪ್ರೊ. ಆರ್.ಆರ್. ಬಿರಾದಾರ್ ಮಾತನಾಡಿ, ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಸುಮಾರು ಏಳು ಜಿಲ್ಲೆಗಳಿದ್ದು, ಪ್ರತಿಯೊಂದು ಜಿಲ್ಲೆಯೂ ತನ್ನದೇ ಆದ ನೈಸರ್ಗಿಕ ಸಂಪನ್ಮೂಲಗಳು ಹಾಗೂ ವೈಶಿಷ್ಟ್ಯಗಳನ್ನು ಹೊಂದಿದೆ ಎಂದರು.ಕರ್ನಾಟಕದ ಮೈಸೂರು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಬೆಂಗಳೂರು ಹಾಗೂ ಕರಾವಳಿ ಸೇರಿದಂತೆ ಪ್ರತಿಯೊಂದು ಪ್ರದೇಶವೂ ತನ್ನದೇ ಆದ ಶಕ್ತಿ ಮತ್ತು ಸಾಮರ್ಥ್ಯ ಹೊಂದಿದೆ. ಕಲ್ಯಾಣ ಕರ್ನಾಟಕದಲ್ಲಿರುವ ಸಂಪನ್ಮೂಲಗಳು ಹಾಗೂ ಸಾಮರ್ಥ್ಯವನ್ನು ಸಮರ್ಪಕವಾಗಿ ಬಳಸಿಕೊಂಡು ಈ ಭಾಗದ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಪ್ರೊ. ಚನ್ನವೀರ ಆರ್.ಎಂ., ಡಾ. ಸಫಿಯಾ ಪರ್ವಿನ್, ಸಂಶೋಧನಾ ವಿದ್ಯಾರ್ಥಿ ಮಲ್ಲಿಕಾರ್ಜುನ ಹಾಗೂ ಛಾಯಾಚಿತ್ರಕಾರ ಶ್ರವಣ್ ಕುಮಾರ್ ಹಿರೇಮಠ ಮಾತನಾಡಿದರು. ವಿಶ್ವವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.ಪ್ರೊ. ಪಾಂಡುರಂಗ ಪತ್ತಿ ಸ್ವಾಗತಿಸಿ, ವಂದನಾರ್ಪಣೆ ಸಲ್ಲಿಸಿದರು.

Related Articles

Leave a Reply

Your email address will not be published. Required fields are marked *

Back to top button