ಜಿಲ್ಲಾಸುದ್ದಿ

ಅಫಜಲಪುರ ತಾಲ್ಲೂಕು ಬರ ಘೋಷಣೆ: ಪರಿಹಾರ ಕ್ರಮಗಳಿಗೆ ಶಾಸಕ ಎಂ.ವೈ. ಪಾಟೀಲ ಸೂಚನೆ

ಅಫಜಲಪುರ, ಸೆ.19: ಕರ್ನಾಟಕ ಸರ್ಕಾರ ಅಫಜಲಪುರ ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ, ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಎಂ.ವೈ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಟಾಸ್ಕ್‌ಫೋರ್ಸ್‌ ಸಭೆಯಲ್ಲಿ ಅವರು ಮಾತನಾಡಿದರು.

ಸಭೆಯಲ್ಲಿ ತಾಲ್ಲೂಕು ದಂಡಾಧಿಕಾರಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ವಿವಿಧ ಇಲಾಖೆಗಳ ಹಿರಿಯ ಹಾಗೂ ಕಿರಿಯ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಅಫಜಲಪುರ ತಾಲ್ಲೂಕಿನ ಬರ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿದ ಶಾಸಕರು, ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಕೃಷಿ, ಉದ್ಯೋಗ ಹಾಗೂ ಸಾರ್ವಜನಿಕರಿಗೆ ಅಗತ್ಯವಿರುವ ಮೂಲಸೌಕರ್ಯಗಳಲ್ಲಿ ಯಾವುದೇ ಕೊರತೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕಿನ ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಜಾನುವಾರುಗಳಿಗೆ ಸಮರ್ಪಕವಾಗಿ ಮೇವು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಬರದಿಂದ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರದ ಪರಿಹಾರ ಹಾಗೂ ವಿವಿಧ ನೆರವು ಯೋಜನೆಗಳು ತ್ವರಿತವಾಗಿ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿನ ಬರ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಿ, ಸಮಸ್ಯೆಗಳು ಎದುರಾದ ಕೂಡಲೇ ಸ್ಥಳೀಯ ಮಟ್ಟದಲ್ಲಿಯೇ ತ್ವರಿತವಾಗಿ ಪರಿಹಾರ ಕಲ್ಪಿಸಬೇಕು. ವಿವಿಧ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿಭಾಯಿಸಬೇಕು ಎಂದು ಶಾಸಕ ಎಂ.ವೈ. ಪಾಟೀಲ ಸೂಚಿಸಿದರು.

ರೈತರು ಹಾಗೂ ಸಾರ್ವಜನಿಕರ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಬೇಕು. ಬರ ಪರಿಸ್ಥಿತಿಯಲ್ಲಿ ಸರ್ಕಾರದ ನೆರವು, ಪರಿಹಾರ ಹಾಗೂ ಅಗತ್ಯ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಯಾವುದೇ ವಿಳಂಬವಿಲ್ಲದೆ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button