ಹಿಂಗಾರು ಬೆಳೆಗಳಿಗೆ ನೀರು ಸಮರ್ಪಕ ಬಳಕೆಗೆ ಸೂಚನೆ

ಸೇಡಂ, ಸೆ.21: ಬ್ರಿಡ್ಜ್ ಕಮ್ ಬ್ಯಾರೇಜ್ ಮೂಲಕ ಸಂಗ್ರಹವಾಗಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ರೈತರಿಗೆ ಒದಗಿಸಬೇಕು. ಹಿಂಗಾರು ಬೆಳೆಗಳಾದ ಕಡಲೆ ಸೇರಿದಂತೆ ವಿವಿಧ ಬೆಳೆಗಳ ಬಿತ್ತನೆಗೆ ರೈತರಿಗೆ ಅನುಕೂಲವಾಗುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಸೂಚಿಸಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತುರ್ತು ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿಂಗಾರು ಮಳೆಯ ನಿರೀಕ್ಷೆಯಿದ್ದರೂ ಮಳೆ ಕೊರತೆಯಾದಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಮುನ್ನೆಚ್ಚರಿಕೆ ಕುರಿತು ಅಧಿಕಾರಿಗಳು ತಳಮಟ್ಟದ ವರದಿ ಸಿದ್ಧಪಡಿಸಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಪ್ರತಿ ಗ್ರಾಮದ ವಾಸ್ತವಿಕ ಪರಿಸ್ಥಿತಿಯ ಕುರಿತು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು. ಮಳೆ ಕೊರತೆ ಕಂಡುಬಂದಲ್ಲಿ ಪರ್ಯಾಯ ಕ್ರಮಗಳನ್ನು ಕೈಗೊಳ್ಳಬೇಕು. ಪಂಚಾಯಿತಿ ಮಟ್ಟದಲ್ಲಿರುವ ಬೋರ್ವೆಲ್ಗಳು ಹಾಗೂ ನೀರಿನ ಸಂಗ್ರಹದ ಕುರಿತು ತ್ವರಿತವಾಗಿ ಮಾಹಿತಿ ಸಂಗ್ರಹಿಸಿ ರೈತರಿಗೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಸೂಚಿಸಿದರು.
ಎಸ್ಟಿಆರ್ ಕುರಿತು ಗುರುತರ ಸಂಖ್ಯೆಯಲ್ಲಿ ಬದಲಾವಣೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಪರಿಶೀಲನೆ ನಡೆಸಬೇಕು. ಯಾವುದೇ ಕಾರಣಕ್ಕೂ ವರ್ಗೀಕರಣ ಅಥವಾ ಬದಲಾವಣೆಗೆ ಸಂಬಂಧಿಸಿದ ಕಡತಗಳನ್ನು ಪರಿಶೀಲಿಸದೆ ರದ್ದುಪಡಿಸುವುದು ಅಥವಾ ವರ್ಗಾಯಿಸುವುದು ಮಾಡಬಾರದು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಅಹವಾಲು ಸ್ವೀಕಾರ
ಸಭೆಯ ಸಂದರ್ಭದಲ್ಲಿ ಸಚಿವರು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳದಲ್ಲಿಯೇ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಿದರು. ಆಧಾರ್ ಸೇರಿದಂತೆ ವಿವಿಧ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಸಮರ್ಪಕ ಮಾಹಿತಿ ಒದಗಿಸಿ, ಅವರ ಕೆಲಸಗಳನ್ನು ವಿಳಂಬ ಮಾಡದೆ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.
ಆಧಾರ್ ಕಾರ್ಡ್ದಾರರ ಅರ್ಜಿಗಳ ಪರಿಶೀಲನೆ ಹಾಗೂ ಸ್ಥಗಿತಗೊಂಡಿರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ಸೂಚಿಸಿದರು.
ಸರ್ಕಾರಿ ಹಾಗೂ ಹೊರಗುತ್ತಿಗೆ ನೌಕರರು ಸಾರ್ವಜನಿಕರನ್ನು ವಿನಾಕಾರಣ ಕಚೇರಿಗಳಿಗೆ ಅಲೆದಾಡಿಸಬಾರದು. ದುಡ್ಡಿನ ಬೇಡಿಕೆ ಇಡುವುದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಸಿದರು.
ಸಭೆಯಲ್ಲಿ ತಾಲ್ಲೂಕು ಸಹಾಯಕ ಆಯುಕ್ತ ಪ್ರಭುರಡ್ಡಿ, ತಹಶೀಲ್ದಾರ್ ಶ್ರೇಯಾಂಕ ಧನಶ್ರೀ ಸೇರಿದಂತೆ ಕೃಷಿ, ತೋಟಗಾರಿಕೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.



