ಆದಾಯಕ್ಕಿಂತ ಹೆಚ್ಚಿನ ಆಸ್ತಿ: ಜೆಸ್ಕಾಂ ಅಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ, ಸೆ.22: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕಲಬುರಗಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಶ್ವರಿ ಬಬಲಾದ್ ಅವರ ಮನೆಗಳು ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದರು.
ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ರಾಜೇಶ್ವರಿ ಅವರ ನಿವಾಸದ ಮೇಲೆ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಆಸ್ತಿ-ಪಾಸ್ತಿ ಹಾಗೂ ಸಂಬಂಧಿತ ದಾಖಲೆಗಳ ಪರಿಶೀಲನೆ ನಡೆಸಿದರು. ಇದೇ ವೇಳೆ ಖಾದ್ರಿ ಚೌಕ್‌ನಲ್ಲಿರುವ ಮತ್ತೊಂದು ನಿವಾಸದ ಮೇಲೂ ದಾಳಿ ನಡೆಸಲಾಯಿತು. ಅವರು ಕರ್ತವ್ಯ ನಿರ್ವಹಿಸುತ್ತಿರುವ ಜೆಸ್ಕಾಂ ಕಚೇರಿಯ ಮೇಲೂ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಯಿತು.
ರಾಜೇಶ್ವರಿ ಅವರು ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ಮನೆಗೆ ಆಗಮಿಸಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ವಾಕಿಂಗ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದರು.
ಆದಾಯಕ್ಕೆ ಹೋಲಿಸಿದರೆ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. ದಾಳಿ ವೇಳೆ ಪತ್ತೆಯಾಗಿರುವ ಆಸ್ತಿ-ಪಾಸ್ತಿ, ದಾಖಲೆಗಳು ಹಾಗೂ ಇತರೆ ಮಾಹಿತಿಯನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಕಾರ್ಯಾಚರಣೆ ಮುಂದುವರಿದಿದ್ದು, ಪರಿಶೀಲನೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆಯಿದೆ.
ಬೀದರ್‌ನಲ್ಲೂ ಮೂರು ಕಡೆ ದಾಳಿ
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೀದರ್‌ನಲ್ಲಿ ಕೃಷಿ ಇಲಾಖೆಯ ನಿವೃತ್ತ ಆಡಳಿತಾಧಿಕಾರಿ ಮಾಣಿಕ್ ಶೆರಿಕಾರ್ ಅವರಿಗೆ ಸಂಬಂಧಿಸಿದ ಮೂರು ಸ್ಥಳಗಳ ಮೇಲೂ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಹನುಮಂತ ರೆಡ್ಡಿ ನೇತೃತ್ವದ ತಂಡ ಬೀದರ್ ನಗರದ ಹಕ್ಕಿ ಕಾಲೋನಿಯಲ್ಲಿರುವ ನಿವಾಸ, ಹುಮನಾಬಾದ್‌ನ ಮತ್ತೊಂದು ನಿವಾಸ ಹಾಗೂ ಚಿಟಗುಪ್ಪ ತಾಲ್ಲೂಕಿನ ಮುತ್ತಂಗಿ ಗ್ರಾಮದ ಸಮೀಪದಲ್ಲಿರುವ ಫಾರ್ಮ್‌ಹೌಸ್ ಮೇಲೆ ದಾಳಿ ನಡೆಸಿದೆ.
ಮೂರು ಸ್ಥಳಗಳಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಹಾಗೂ ಶೋಧ ಕಾರ್ಯ ಮುಂದುವರಿಸಿದ್ದಾರೆ. ಆಸ್ತಿ, ಹಣಕಾಸು ವ್ಯವಹಾರಗಳು ಹಾಗೂ ಇತರ ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.
ದಾಳಿ ವೇಳೆ ಪತ್ತೆಯಾಗುವ ದಾಖಲೆಗಳು ಹಾಗೂ ಲಭ್ಯವಾಗುವ ಮಾಹಿತಿಯ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಪ್ರಸ್ತುತ ಎರಡೂ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ಮುಂದುವರಿದಿದೆ.



