ಜೇವರ್ಗಿ, ಯಡ್ರಾಮಿ ಸೇರಿ ಜಿಲ್ಲೆಯ ಎಲ್ಲ ತಾಲ್ಲೂಕುಗಳು ಬರಪೀಡಿತ ಪಟ್ಟಿಗೆ

ಕಲಬುರಗಿ, ಸೆ.23: ರಾಜ್ಯ ಸರ್ಕಾರ ಮೂರನೇ ಹಂತದಲ್ಲಿ ಮತ್ತಷ್ಟು ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ ಆದೇಶ ಹೊರಡಿಸಿದ್ದು, ಇದರಿಂದ ರಾಜ್ಯದ ಬರಪೀಡಿತ ತಾಲ್ಲೂಕುಗಳ ಸಂಖ್ಯೆ 177ಕ್ಕೆ ಏರಿಕೆಯಾಗಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ, ಯಡ್ರಾಮಿ ಸೇರಿದಂತೆ ಎಲ್ಲ 11 ತಾಲ್ಲೂಕುಗಳು ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರ್ಪಡೆಯಾಗಿವೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ಸಿಂಗ್ ಧರ್ಮಸಿಂಗ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ಸರ್ಕಾರ ರೈತರ ಹಾಗೂ ಜನಪರ ನಿಲುವಿಗೆ ಸದಾ ಬದ್ಧವಾಗಿದೆ. ಬರ ಘೋಷಣೆ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಬದ್ಧವಾಗಿದ್ದು, ಮುಂಗಾರು ಹಂಗಾಮು ಮುಗಿಯುವವರೆಗೂ ಬರ ಪರಿಸ್ಥಿತಿಯ ಮೇಲ್ವಿಚಾರಣೆ ಮುಂದುವರಿಸಲಾಗುವುದು ಎಂದರು.
ಅಗತ್ಯ ಕಂಡುಬಂದಲ್ಲಿ ಮುಂದಿನ ಹಂತದಲ್ಲಿಯೂ ಹೆಚ್ಚಿನ ತಾಲ್ಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲಾಗುವುದು. ಬೆಳೆಹಾನಿಯ ನೈಜ ಚಿತ್ರಣವನ್ನು ಆಧರಿಸಿ, ಬರದಿಂದ ಸಂಕಷ್ಟಕ್ಕೊಳಗಾದ ರೈತರಿಗೆ ನಿಯಮಾನುಸಾರ ಅಗತ್ಯ ನೆರವು ತಲುಪಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
ಬರ ಘೋಷಣೆಗೆ ಸೆ.30ರವರೆಗೆ ಕಾಲಾವಕಾಶವಿದ್ದು, ಆ ಅವಧಿಯಲ್ಲಿ ರಾಜ್ಯದ ಸುಮಾರು 180ರಿಂದ 200 ತಾಲ್ಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗುವ ನಿರೀಕ್ಷೆಯಿದೆ. ಬರದಿಂದ ಸಂಕಷ್ಟಕ್ಕೊಳಗಾದ ರೈತರು ಹಾಗೂ ಸಾರ್ವಜನಿಕರ ನೆರವಿಗೆ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ತಿಳಿಸಿದರು.
ಜಿಲ್ಲೆಯ ಎಲ್ಲ 11 ತಾಲ್ಲೂಕುಗಳನ್ನು ಸರ್ಕಾರ ಅಧಿಕೃತವಾಗಿ ಬರಪೀಡಿತ ಪಟ್ಟಿಗೆ ಸೇರಿಸಿದೆ. ಹಂತ ಹಂತವಾಗಿ ನಡೆಸಿದ ಜಂಟಿ ಸಮೀಕ್ಷೆ ಹಾಗೂ ಮೌಲ್ಯಮಾಪನದ ಬಳಿಕ ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ತೀವ್ರ ಬರಪೀಡಿತವೆಂದು ಘೋಷಿಸಲಾಗಿದೆ. ಬೆಳೆಹಾನಿ ಸಮೀಕ್ಷೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಅಫಜಲಪುರ, ಆಳಂದ, ಚಿತ್ತಾಪುರ, ಕಲಬುರಗಿ, ಯಡ್ರಾಮಿ, ಶಹಾಬಾದ್ ಹಾಗೂ ಮೂರನೇ ಹಂತದಲ್ಲಿ ಚಿಂಚೋಳಿ, ಜೇವರ್ಗಿ, ಕಾಳಗಿ, ಕಮಲಾಪುರ ಮತ್ತು ಸೇಡಂ ತಾಲ್ಲೂಕುಗಳು ಸೇರಿದಂತೆ ಜಿಲ್ಲೆಯ ಎಲ್ಲ 11 ತಾಲ್ಲೂಕುಗಳು ತೀವ್ರ ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗಿವೆ.
ಮುಂಗಾರು ಮಳೆ ಕೊರತೆಯಿಂದ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ನಿರಂತರವಾಗಿ ಮೌಲ್ಯಮಾಪನ ಮಾಡಲಾಗುತ್ತಿದೆ. ರೈತರ ಸಂಕಷ್ಟಕ್ಕೆ ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಳೆಹಾನಿ ಸಮೀಕ್ಷೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಸಚಿವ ಡಾ. ಅಜಯ್ಸಿಂಗ್ ಧರ್ಮಸಿಂಗ್ ತಿಳಿಸಿದರು.
ರಾಜ್ಯದ ಬರ ಪರಿಸ್ಥಿತಿಯನ್ನು ಎದುರಿಸಲು ಹಾಗೂ ಸಂಕಷ್ಟದಲ್ಲಿರುವವರಿಗೆ ಅಗತ್ಯ ನೆರವು ಒದಗಿಸಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ. ರೈತರು ಮತ್ತು ಸಾರ್ವಜನಿಕರ ಹಿತ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಸಚಿವರು ಭರವಸೆ ನೀಡಿದರು.



