ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಆರ್ಥಿಕ ಸ್ಥಿತಿ ಕುರಿತು ಶ್ವೇತಪತ್ರಕ್ಕೆ ಆಗ್ರಹ

ಕಲಬುರಗಿ, ಸೆ.25: ರಾಜ್ಯದ ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿಯ ಅಂಚಿನಲ್ಲಿದ್ದು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಬಿಜೆಪಿ ನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ರೈತರು, ಜನಸಾಮಾನ್ಯರು, ಮಹಿಳೆಯರು ಹಾಗೂ ಯುವಜನರ ವಿರೋಧಿಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸರ್ಕಾರದ ಹಣಕಾಸು ಇಲಾಖೆಯೇ ರಾಜ್ಯದ ಆರ್ಥಿಕ ಪರಿಸ್ಥಿತಿ ಕುರಿತು ಎಚ್ಚರಿಕೆ ನೀಡಿದೆ ಎಂದು ಹೇಳಿದ ಅವರು, ಸರ್ಕಾರ ಹೆಚ್ಚಿನ ಪ್ರಮಾಣದಲ್ಲಿ ಸಾಲ ಮಾಡಿದ್ದು, ಇದರಿಂದ ರಾಜ್ಯದ ಅಭಿವೃದ್ಧಿಗೆ ತೊಂದರೆಯಾಗುತ್ತಿದೆ ಎಂದು ದೂರಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸದಾಗಿ ನಾಲ್ಕು ಲಕ್ಷ ಕೋಟಿಗೂ ಅಧಿಕ ಸಾಲ ಮಾಡಿದ್ದು, ಒಟ್ಟಾರೆ ಸಾಲದ ಮೊತ್ತ ಎಂಟು ಲಕ್ಷ ಕೋಟಿ ರೂ.ಗೆ ತಲುಪಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು. ಇಷ್ಟೊಂದು ಸಾಲ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಿರೀಕ್ಷಿತ ಅಭಿವೃದ್ಧಿ ಕಾಣುತ್ತಿಲ್ಲ ಎಂದು ಟೀಕಿಸಿದರು.
ಮುಖ್ಯಮಂತ್ರಿಗಳು ಇತ್ತೀಚೆಗೆ ಕರಾವಳಿ ಪ್ರದೇಶಕ್ಕೆ ಭೇಟಿ ನೀಡಿದ್ದರು. ಬರ ಪರಿಹಾರ ನೀಡಲು ಖಜಾನೆಯಲ್ಲಿ ಹಣವಿಲ್ಲ ಎಂದು ಆರ್ಥಿಕ ಇಲಾಖೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರೂ, ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸುಮಾರು 32 ಸಾವಿರ ಕೋಟಿ ರೂ.ಗಳ ಘೋಷಣೆ ಮಾಡಲಾಗಿದೆ. ಇದು ಕೇವಲ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ರಸ್ತೆಗಳ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ನೀಡುವುದಾಗಿ ಸರ್ಕಾರ ಘೋಷಿಸಿದೆ. ಆದರೆ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಹಣಕಾಸಿನ ನಿರ್ವಹಣೆ ಕುಸಿದಿದೆ ಎಂದು ಬಿಜೆಪಿ ಮುಖಂಡರು ದೂರಿದರು. ಬಡವರು ಹಾಗೂ ರೈತರಿಗೆ ಪರಿಹಾರ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂದು ಆರೋಪಿಸಿದ ಅವರು, ಸರ್ಕಾರ ಕೇವಲ ಜಾಹೀರಾತುಗಳಿಗೆ ಆದ್ಯತೆ ನೀಡುತ್ತಿದೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಅಂಗವಿಕಲರು, ವೃದ್ಧರು ಹಾಗೂ ವಿಧವೆಯರಿಗೆ ಸಕಾಲದಲ್ಲಿ ಪಿಂಚಣಿ ದೊರೆಯುತ್ತಿಲ್ಲ. ಶಿಕ್ಷಣ ಕ್ಷೇತ್ರದಲ್ಲಿಯೂ ಹಲವು ಸಮಸ್ಯೆಗಳಿದ್ದು, ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿರುವ ಶೂ, ಸಾಕ್ಸ್‌ಗಳ ಗುಣಮಟ್ಟದ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ ಎಂದು ಪ್ರತಿಭಟನಾಕಾರರು ಹೇಳಿದರು.
ಶಿಕ್ಷಕರ ನೇಮಕಾತಿಯನ್ನೂ ಸಮರ್ಪಕವಾಗಿ ಮಾಡುತ್ತಿಲ್ಲ. ಆರ್ಥಿಕ ಸಮಸ್ಯೆಯ ಕಾರಣ ಶಿಕ್ಷಕರಿಗೆ ವೇತನ ಪಾವತಿಯಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿದರು. ಯುವಕರಿಗೆ ಉದ್ಯೋಗ ಕಲ್ಪಿಸುವಲ್ಲಿಯೂ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.
ಮುಖ್ಯಮಂತ್ರಿಗಳು ರಾಜ್ಯದ ವಾಸ್ತವಿಕ ಆರ್ಥಿಕ ಪರಿಸ್ಥಿತಿ ಏನೆಂಬುದರ ಕುರಿತು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ, ಮಾಜಿ ಮೇಯರ್ ಶರಣಪ್ಪ ತಳವಾರ್, ಮಾಜಿ ಎಪಿಎಂಸಿ ಅಧ್ಯಕ್ಷ ಅವ್ವಣ್ಣ ಮಾಕೇರಿ, ಗಿರಿರಾಜ್ ಯಳಿಮೇಲಿ, ರಾಜು ವಾಡೇಕರ್, ಉಮೇಶ್ ಪಾಟೀಲ, ಮಹಾದೇವ ಬೆಳಮಗಿ, ಶಿವಯೋಗಿ ನಾಗನಳ್ಳಿ, ಶರಣು ಸಜ್ಜನ್, ಸುಂದರ ಕುಲಕರ್ಣಿ, ಮಲ್ಲಿಕಾರ್ಜುನ ಓಕಳಿ, ಅಶೋಕ ಮಾನಕರ್, ಅನಿಲ್ ಜಾಧವ್, ಲಿಂಗರಾಜ್ ಪಟ್ಟಣ, ವರದಾಶಂಕರ ಶೆಟ್ಟಿ, ಮಂಜುನಾಥ ಚಿಲಶೆಟ್ಟಿ, ಶಾಂತು ದುಧನಿ, ಸಂತೋಷ ದೋಣಿ, ಚಿನ್ನು ಬಂಗೆ, ಸಚಿನ್ ಬನ್ನಿ, ಪ್ರೀತಂ ಪಾಟೀಲ, ಗೋಪಾಲ ಕುಲಕರ್ಣಿ, ಶಿವಲಿಂಗ ಪಾಟೀಲ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.



