ಗಾಂಧಿ ಜಯಂತಿ ಅಂಗವಾಗಿ ಶ್ರಮದಾನ: ಕಸಗೂಡಿಸಿದ ಜಿಲ್ಲಾಧಿಕಾರಿ ಇಕ್ರಂ ಶರೀಫ್

ಕಲಬುರಗಿ, ಅ.೧: ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಗುರುವಾರ ನಗರದ ಮಿನಿ ವಿಧಾನಸೌಧ ಆವರಣದಲ್ಲಿ ಶ್ರಮದಾನ ಹಾಗೂ ಸ್ವಚ್ಛತಾ ಕಾರ್ಯ ನಡೆಯಿತು.
ಜಿಲ್ಲಾಧಿಕಾರಿ ಇಕ್ರಂ ಶರೀಫ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ವಿವಿಧ ಅಧಿಕಾರಿಗಳು ಪೊರಕೆ ಹಿಡಿದು ಆವರಣದಲ್ಲಿ ಕಸಗೂಡಿಸುವ ಮೂಲಕ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ಅಧಿಕಾರಿಗಳೊಂದಿಗೆ ಸಿಬ್ಬಂದಿ ವರ್ಗವೂ ಶ್ರಮದಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ, ಜಿಲ್ಲಾಧಿಕಾರಿ ಕಚೇರಿಯ ತಹಶೀಲ್ದಾರರಾದ ಗಂಗಾಧರ, ಪಂಪಯ್ಯ, ಶಿವಪ್ರಭು ಹಿರೇಮಠ ಸೇರಿದಂತೆ ಕಚೇರಿ ಸಿಬ್ಬಂದಿ ಹಾಗೂ ಮಹಾನಗರ ಪಾಲಿಕೆಯ ಸಿಬ್ಬಂದಿ ಶ್ರಮದಾನದಲ್ಲಿ ಭಾಗವಹಿಸಿ ಮಿನಿ ವಿಧಾನಸೌಧದ ಆವರಣವನ್ನು ಸ್ವಚ್ಛಗೊಳಿಸಿದರು.
ಸಭಾಂಗಣ ಕಾಮಗಾರಿ ವೀಕ್ಷಣೆ
ಶ್ರಮದಾನದ ಬಳಿಕ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಅವರು ಮಿನಿ ವಿಧಾನಸೌಧ ಆವರಣದಲ್ಲಿರುವ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಜಿ+೨ ಮಾದರಿಯ ಸಭಾಂಗಣ ಕಾಮಗಾರಿಯನ್ನು ವೀಕ್ಷಿಸಿ, ಕಾಮಗಾರಿಯ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಮಿನಿ ವಿಧಾನಸೌಧಕ್ಕೆ ಪ್ರತಿನಿತ್ಯ ಸಾವಿರಾರು ಸಾರ್ವಜನಿಕರು ಆಗಮಿಸುವ ಹಿನ್ನೆಲೆಯಲ್ಲಿ ಅವರ ಅನುಕೂಲಕ್ಕಾಗಿ ಆವರಣದಲ್ಲಿ ಸೂಕ್ತ ಆಸನ ವ್ಯವಸ್ಥೆ, ಕುಡಿಯುವ ನೀರು, ವಾಹನ ನಿಲುಗಡೆ ಹಾಗೂ ಸಾರ್ವಜನಿಕ ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
ಅಲ್ಲದೆ, ಆವರಣದಲ್ಲಿರುವ ಉದ್ಯಾನವನ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಉತ್ತಮವಾಗಿ ನಿರ್ವಹಿಸುವ ಮೂಲಕ ನಿರಂತರವಾಗಿ ಸ್ವಚ್ಛತೆ ಕಾಪಾಡಬೇಕು. ಸಾರ್ವಜನಿಕರಿಗೆ ಸ್ವಚ್ಛ ಹಾಗೂ ಉತ್ತಮ ವಾತಾವರಣ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.



