ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ: ನ್ಯಾಯಾಧೀಶ ಶ್ರೀನಿವಾಸ ನವಲೆ

ಕಲಬುರಗಿ, ಅ.1: ‘ರಕ್ತದಾನ ಮಹಾದಾನ’ ಎಂಬ ಸಂದೇಶದೊಂದಿಗೆ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಅಪಾಯದಲ್ಲಿರುವ ಹಲವು ರೋಗಿಗಳ ಜೀವ ಉಳಿಸಬಹುದು. ನಿಯಮಿತ ರಕ್ತದಾನವು ದಾನಿಗಳ ಆರೋಗ್ಯಕ್ಕೂ ಸಹಕಾರಿಯಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಹೇಳಿದರು.
ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ, ಕರ್ನಾಟಕ ರಾಜ್ಯ ರಕ್ತ ಪ್ರಸರಣ ಪರಿಷತ್ತು ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಮಾನವೀಯತೆ ಒಂದು ಹನಿ; ರಕ್ತ ನೀಡಿ, ಜೀವ ಉಳಿಸಿ’ ಎಂಬ ಘೋಷವಾಕ್ಯದೊಂದಿಗೆ ನಡೆದ ಜಾಥಾದಲ್ಲಿ ಮಾತನಾಡಿದ ಅವರು, ರಕ್ತದಾನದ ಕುರಿತು ಸಾರ್ವಜನಿಕರಲ್ಲಿ ಇರುವ ಅನಗತ್ಯ ಭಯ ಹಾಗೂ ತಪ್ಪು ಕಲ್ಪನೆಗಳನ್ನು ದೂರ ಮಾಡಬೇಕಿದೆ. ರಕ್ತದಾನ ಮಾಡಲು ಅರ್ಹರಾಗಿರುವ ಪ್ರತಿಯೊಬ್ಬರೂ ಈ ಮಹತ್ಕಾರ್ಯದಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಕ್ಯಾತ್ನಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾ ಆಸ್ಪತ್ರೆಯಲ್ಲಿ ಗರ್ಭಿಣಿಯರು, ಅಪಘಾತಕ್ಕೊಳಗಾದವರು ಹಾಗೂ ಡಯಾಲಿಸಿಸ್ ಮಾಡಿಸಿಕೊಳ್ಳುವ ರೋಗಿಗಳಿಗೆ ರಕ್ತದ ಅಗತ್ಯ ಹೆಚ್ಚಾಗಿದೆ. ಹೀಗಾಗಿ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬರಬೇಕು ಎಂದರು.
ವಿಭಾಗೀಯ ಜಂಟಿ ನಿರ್ದೇಶಕರ ಕಾರ್ಯಾಲಯದ ಉಪನಿರ್ದೇಶಕ ಡಾ. ಎ.ಎಸ್. ರುದ್ರವಾಡಿ ಮಾತನಾಡಿ, ಒಟ್ಟು ಜನಸಂಖ್ಯೆಯ ಕನಿಷ್ಠ ಶೇ.1ರಷ್ಟು ಪ್ರಮಾಣದ ರಕ್ತ ಸಂಗ್ರಹವಾಗುವುದು ಅಗತ್ಯವಾಗಿದೆ. ಆರೋಗ್ಯವಂತ ಯುವಜನರು ಸ್ವಯಂಪ್ರೇರಿತರಾಗಿ ಮುಂದೆ ಬಂದು ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಕೊರತೆ ನೀಗಿಸಲು ಸಹಕರಿಸಬೇಕು ಎಂದು ಹೇಳಿದರು.
ನಂತರ ನಗರದ ಸರ್ಕಾರಿ (ಸ್ವಾಯತ್ತ) ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 35ಕ್ಕೂ ಹೆಚ್ಚು ಮಂದಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.
ಕಾರ್ಯಕ್ರಮದಲ್ಲಿ ಡಾ. ಶರಣಬಸಪ್ಪ ಗಣಜಲಖೇಡ್, ಜಿಲ್ಲಾ ಆಸ್ಪತ್ರೆಯ ಅಧೀಕ್ಷಕಿ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ. ರುಖಯ್ಯಾ ಅಸ್ನಾ ರಬಾ, ಕಲಬುರಗಿ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಮಹಮ್ಮದ್ ಗಫಾರ್, ವೈದ್ಯಾಧಿಕಾರಿಗಳು, ಸಿಬ್ಬಂದಿ, ಪ್ರಾಧ್ಯಾಪಕರು, ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.



