ಮಹಾತ್ಮ ಗಾಂಧೀಜಿಯವರ ಜೀವನವೇ ಒಂದು ಸಂದೇಶ: ಪ್ರೊ. ಸಂತೋಷ ಪೂಜಾರಿ

ಕಲಬುರಗಿ, ಅ.2- ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜೀವನವೇ ಒಂದು ಸಂದೇಶವಾಗಿದೆ ಎಂದು ಪ್ರಾಧ್ಯಾಪಕ ಸಂತೋಷ ಪೂಜಾರಿ ಹೇಳಿದರು.
ನಗರದ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ಶುಕ್ರವಾರ ಮಹಾವಿದ್ಯಾಲಯದ ಗಾಂಧಿ ಅಧ್ಯಯನ ಕೇಂದ್ರ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹಾತ್ಮ ಗಾಂಧೀಜಿಯವರು ಸತ್ಯ, ಅಹಿಂಸೆ ಹಾಗೂ ಸರಳತೆಯ ಮಾರ್ಗದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಅವರ ಬದುಕಿನ ಪ್ರತಿಯೊಂದು ಹಂತವೂ ಸಮಾಜಕ್ಕೆ ಹಾಗೂ ಮುಂದಿನ ಪೀಳಿಗೆಗೆ ಮಾರ್ಗದರ್ಶಕ ಸಂದೇಶವನ್ನು ನೀಡುತ್ತದೆ. ಗಾಂಧೀಜಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅವರಿಗೆ ಸಲ್ಲಿಸುವ ನಿಜವಾದ ಗೌರವವಾಗಿದೆ ಎಂದು ಹೇಳಿದರು.
ಗಾಂಧೀಜಿ ಜಯಂತಿ ಅಂಗವಾಗಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕೃಪಾಸಾಗರ ಗೋಬುರ ಅವರು ಗಾಂಧೀಜಿಯವರ ಕುರಿತು ಮಾತನಾಡಿದರು.
ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಸೀಮಾ ಪಾಟೀಲ, ಡಾ. ಪ್ರತಿಭಾ ಪಾಟೀಲ, ಡಾ. ಮಹಾಲಕ್ಷ್ಮೀ ತೆಲಗಿ, ಡಾ. ರಾಜಲಕ್ಷ್ಮೀ, ಡಾ. ಸಿದ್ದಲಿಂಗರಡ್ಡಿ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.



