ಮುಡಬಿಯಲ್ಲಿ ₹4.41 ಲಕ್ಷ ಮೌಲ್ಯದ ಗಾಂಜಾ ಗಿಡಗಳು ವಶ; ಆರೋಪಿ ಬಂಧನ

ಬೀದರ್, ಅ.2- ಮುಡಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯಾವುದೇ ಸರ್ಕಾರಿ ಅನುಮತಿ ಇಲ್ಲದೆ ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 183 ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ತೂಕ ಸುಮಾರು 8 ಕೆ.ಜಿ. 820 ಗ್ರಾಂ ಎಂದು ಅಂದಾಜಿಸಲಾಗಿದೆ. ವಶಪಡಿಸಿಕೊಂಡ ಗಾಂಜಾ ಗಿಡಗಳ ಅಂದಾಜು ಮೌಲ್ಯ ₹4.41 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಐಪಿಎಸ್ ಅವರ ನೇರ ನಿರ್ದೇಶನ ಹಾಗೂ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.
ಮುಡಬಿ ಗ್ರಾಮದ ಹೊರವಲಯದಲ್ಲಿರುವ ಹೊಲವೊಂದರಲ್ಲಿ ಯಾವುದೇ ಅನುಮತಿ ಇಲ್ಲದೆ ಕಾನೂನುಬಾಹಿರವಾಗಿ ಗಾಂಜಾ ಬೆಳೆಯಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಮಾಹಿತಿ ಆಧರಿಸಿ ಹುಮನಾಬಾದ್ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಮಡೋಳಪ್ಪ ಪಿ.ಎಸ್. ಅವರ ಮುಂದಾಳತ್ವದಲ್ಲಿ, ಮಂಠಾಳ ವೃತ್ತದ ಸಿಪಿಐ ಅಮೋಲ್ ಕಾಳೆ ನೇತೃತ್ವದಲ್ಲಿ ಕಾರ್ಯಾಚರಣೆಗೆ ಸಿದ್ಧತೆ ಕೈಗೊಳ್ಳಲಾಗಿತ್ತು.
ಮುಡಬಿ ಪೊಲೀಸ್ ಠಾಣೆಯ ಪಿಎಸ್ಐ ಜೈಶ್ರೀ ಅವರು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಹೊಲದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿರುವುದು ಪತ್ತೆಯಾದ ಬಳಿಕ ಕಾನೂನುಬದ್ಧ ಪ್ರಕ್ರಿಯೆಗಳನ್ನು ಕೈಗೊಂಡು ಅಲ್ಲಿದ್ದ 183 ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಯಿತು.
ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದಾರೆ. ಗಾಂಜಾ ಗಿಡಗಳು ಹಾಗೂ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಪೊಲೀಸರು ವಶದಲ್ಲಿಟ್ಟುಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಶಂಕ್ರಪ್ಪ, ಹಣಮಂತ, ರೇಣುಕಪ್ಪ, ನಂದೀಶ, ಗುರುಲಿಂಗ ಹಾಗೂ ತಾತ್ಯರಾವ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.



