ಜಿಲ್ಲಾಸುದ್ದಿ

ಹಾಲಿನ ಪುಡಿ ಮಾರಾಟ ಪ್ರಶ್ನಿಸಿದ್ದಕ್ಕೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ: ಮೌನೇಶ್ ಕಿಡಿ

ಸೇಡಂ, ಅ.2- ತಾಲ್ಲೂಕಿನ ಅನಂತಪುರ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ ಹಾಗೂ ಬಾಣಂತಿಯರಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸದೆ, ಫಲಾನುಭವಿಗಳಿಗೆ ನೀಡಬೇಕಾದ ಆಹಾರ ಧಾನ್ಯ, ಮೊಟ್ಟೆ ಹಾಗೂ ಹಾಲಿನ ಪುಡಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿದ್ದಕ್ಕೆ ತಮ್ಮ ವಿರುದ್ಧ ಯಾವುದೇ ದಾಖಲೆ ಇಲ್ಲದೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ಮೌನೇಶ್ ಬೆನಕನಹಳ್ಳಿ ಆರೋಪಿಸಿದ್ದಾರೆ.

ಮೂರು ವರ್ಷದೊಳಗಿನ ಮಕ್ಕಳಿಗೆ ಸರ್ಕಾರದ ಸೌಲಭ್ಯಗಳನ್ನು ನೀಡದೆ ಅಂಗನವಾಡಿ ಆಹಾರ ಧಾನ್ಯಗಳನ್ನು ಮಾರಾಟ ಮಾಡುತ್ತಿರುವ ಕುರಿತು ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಅವರು ದೂರಿದರು.

ತಾಲ್ಲೂಕಿನ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಸರ್ಕಾರದಿಂದ ದೊರೆಯಬೇಕಾದ ಸೌಲಭ್ಯಗಳು ಸಮರ್ಪಕವಾಗಿ ಒದಗಿಸಲಾಗುತ್ತಿಲ್ಲ. ಇದರಿಂದ ಮಕ್ಕಳು ಹಾಗೂ ಗರ್ಭಿಣಿ, ಬಾಣಂತಿಯರು ಸರ್ಕಾರದ ಯೋಜನೆಗಳಿಂದ ವಂಚಿತರಾಗುತ್ತಿರುವುದು ನೋವಿನ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅನಂತಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳಿಗೆ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ನೀಡದಿರುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಅನುರಾಧಾ ಪಾಟೀಲ ಅವರ ಗಮನಕ್ಕೆ ತಂದು ಲಿಖಿತವಾಗಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮೌನೇಶ್ ಆರೋಪಿಸಿದರು.

ಈ ಹಿನ್ನೆಲೆಯಲ್ಲಿ ಸಂಘಟನೆಯ ವತಿಯಿಂದ ಅನಂತಪುರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲು ತೆರಳಿದ ಸಂದರ್ಭದಲ್ಲಿ, ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ದೂರಿದರು.

ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳಿಗೆ ಹಾಗೂ ಗರ್ಭಿಣಿ, ಬಾಣಂತಿಯರಿಗೆ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ತಲುಪುತ್ತಿವೆಯೇ ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ, ಲೋಪ ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಫಲಾನುಭವಿಗಳಿಗೆ ದೊರೆಯಬೇಕಾದ ಆಹಾರ ಸಾಮಗ್ರಿಗಳು ಕಾಳಸಂತೆಯಲ್ಲಿ ಮಾರಾಟವಾಗದಂತೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button