ಕನ್ನಡಿಗರ ಹಕ್ಕುಗಳಿಗಾಗಿ ಅ.8ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೀದರ್, ಅ.3- ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಹಾಗೂ ಕನ್ನಡಿಗರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಜಾಗೃತಿ ವೇದಿಕೆ ವತಿಯಿಂದ ಅಕ್ಟೋಬರ್ 8ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಜಿಲ್ಲಾ ಅಧ್ಯಕ್ಷ ಪ್ರವೀಣ್ ಮೊಳಕೇರೆ ತಿಳಿಸಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೇದಿಕೆಯ ರಾಜ್ಯಾಧ್ಯಕ್ಷ ಕೆ. ಮಂಜುನಾಥ ದೇವ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 10ರಿಂದ 15 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದೆ. ಬೀದರ್ ಜಿಲ್ಲೆಯಿಂದಲೂ 100ರಿಂದ 200 ಕಾರ್ಯಕರ್ತರು ಬೆಂಗಳೂರಿಗೆ ತೆರಳಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಮೇಕೆದಾಟು ಹಾಗೂ ಕಳಸಾ-ಬಂಡೂರಿ ಯೋಜನೆಗಳನ್ನು ಕೂಡಲೇ ಆರಂಭಿಸಬೇಕು. ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ.75ರಷ್ಟು ಮೀಸಲಾತಿ ಕಲ್ಪಿಸಬೇಕು. ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು. ಸರ್ಕಾರಿ ಕನ್ನಡ ಶಾಲೆಗಳನ್ನು ಉಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕನ್ನಡ ಕಲಿಸದ ಹಾಗೂ ನಾಡಗೀತೆ ಹಾಡದ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ರಾಜ್ಯಾದ್ಯಂತ ಕನ್ನಡ ನಾಮಫಲಕಗಳ ಬಳಕೆಯನ್ನು ಕಡ್ಡಾಯಗೊಳಿಸಬೇಕು. ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕನ್ನಡ ಬಲ್ಲ ಅಧಿಕಾರಿಗಳನ್ನು ನೇಮಿಸಬೇಕು ಎಂದು ಆಗ್ರಹಿಸಿದರು.
ವೇದಿಕೆಯ ಮಾರ್ಗದರ್ಶಕ ಭರತ್ ಕಾಂಬಳೆ ಮಾತನಾಡಿ, ಬೆಳಗಾವಿ ಮಹಾನಗರ ಪಾಲಿಕೆಯು ಕರ್ನಾಟಕದ ಅವಿಭಾಜ್ಯ ಅಂಗ ಎಂಬುದನ್ನು ಪ್ರತಿಪಾದಿಸುವುದರ ಜೊತೆಗೆ, ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಡಲಾಗಿದೆ ಎಂದು ತಿಳಿಸಿದರು.
ರೈತರಿಗೆ ಈಗಾಗಲೇ ಘೋಷಿಸಿರುವ ಪರಿಹಾರದ ಮೊತ್ತ ಸಾಕಾಗುತ್ತಿಲ್ಲ. ಬೆಳೆ ನಷ್ಟ ಅನುಭವಿಸಿರುವ ರೈತರ ನಷ್ಟವನ್ನು ವೈಜ್ಞಾನಿಕವಾಗಿ ಅಂದಾಜಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು.
ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಪೃಥ್ವಿರಾಜ ಮುಧೋಳಕರ್ ಮಾತನಾಡಿ, ಗಡಿ ಜಿಲ್ಲೆಯಾಗಿರುವ ಬೀದರ್‌ನಲ್ಲಿ ಕನ್ನಡ ಭಾಷೆ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ನಿಜಾಮರ ಆಡಳಿತದ ಸಂದರ್ಭದಲ್ಲಿ ಉರ್ದು ಭಾಷೆಯ ಪ್ರಭಾವವಿದ್ದ ಈ ಭಾಗದಲ್ಲಿ ಚೆನ್ನಬಸವ ಪಟ್ಟದ್ದೇವರು ಕಮಲನಗರದಲ್ಲಿ ಕನ್ನಡ ಶಾಲೆ ಆರಂಭಿಸುವ ಮೂಲಕ ಕನ್ನಡ ಶಿಕ್ಷಣಕ್ಕೆ ಉತ್ತೇಜನ ನೀಡಿದ್ದರು ಎಂದು ಸ್ಮರಿಸಿದರು.
ಗಡಿ ಭಾಗದ ಶಾಲೆಗಳಲ್ಲಿ ಕನ್ನಡ ಶಿಕ್ಷಣವನ್ನು ಮತ್ತಷ್ಟು ಬಲಪಡಿಸಲು ಸರ್ಕಾರ ವಿಶೇಷ ಕ್ರಮ ಕೈಗೊಳ್ಳಬೇಕು. ಕನ್ನಡ ಭಾಷೆ, ಶಿಕ್ಷಣ ಮತ್ತು ಕನ್ನಡಿಗರ ಹಕ್ಕುಗಳ ರಕ್ಷಣೆಗೆ ಅಗತ್ಯ ನೀತಿಗಳನ್ನು ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಮಹಿಳಾ ಘಟಕದ ಅಧ್ಯಕ್ಷೆ ಭುವನೇಶ್ವರಿ, ಪ್ರಧಾನ ಕಾರ್ಯದರ್ಶಿ ರಾಣಿ ಕೋಟೆ, ಪದಾಧಿಕಾರಿಗಳಾದ ಸಂತೋಷ ಮೊಳಕೇರೆ, ಸಂದೀಪ್ ಮೋರೆ, ಅಂಬರೀಶ್ ಸಂತಪುರ, ಅಂಜಲಿ, ಸೀಮಾ, ಮಹಾದೇವ, ಸಾಗರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.



