ಜಿಲ್ಲಾಸುದ್ದಿ

ಜಾಮೀನು ಪಡೆದ ವ್ಯಕ್ತಿಯಿಂದ ಲಂಚ ಪಡೆದ ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ

ಕಲಬುರಗಿ, ಅ.5– ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸುವ ವಿಚಾರದಲ್ಲಿ ₹3 ಸಾವಿರ ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಚಿಂಚೋಳಿ ತಾಲ್ಲೂಕಿನ ಸುಲೇಪೇಟ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಅನಿಲ್ ಕುಮಾರ್ ಅವರನ್ನು ಕರ್ನಾಟಕ ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ.

ಚಿಂಚೋಳಿ ತಾಲ್ಲೂಕಿನ ಸುಲೇಪೇಟ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಕೇಶ್ವರ ಗ್ರಾಮದ ಚಂದ್ರಕಾಂತ ರಂಗನೂರು ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ.

ದೂರಿನ ಪ್ರಕಾರ, ದೂರುದಾರರು ನ್ಯಾಯಾಲಯದಿಂದ ಜಾಮೀನು ಪಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿ ತಿಂಗಳು ಸುಲೇಪೇಟ ಪೊಲೀಸ್ ಠಾಣೆಯ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತ್ತು. ಆದರೆ ಠಾಣೆಯಲ್ಲಿ ರೈಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್‌ಸ್ಟೆಬಲ್ ಅನಿಲ್ ಕುಮಾರ್ ಅವರು ಪ್ರತಿ ಭಾನುವಾರ ಠಾಣೆಗೆ ಬಂದು ಹಾಜರಾತಿ ದಾಖಲಿಸಿಕೊಳ್ಳುವಂತೆ ಒತ್ತಾಯಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಹಾಜರಾಗದಿದ್ದರೆ ಜಾಮೀನು ರದ್ದುಪಡಿಸಿ ಮತ್ತೆ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ಪದೇಪದೇ ಅಲೆದಾಡುವುದನ್ನು ತಪ್ಪಿಸಲು ಮಧ್ಯವರ್ತಿಯೊಬ್ಬರ ಮೊಬೈಲ್ ಸಂಖ್ಯೆಗೆ ₹3 ಸಾವಿರ ಲಂಚದ ಹಣವನ್ನು ಫೋನ್‌ಪೇ ಮೂಲಕ ವರ್ಗಾಯಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರಿನ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಲಂಚದ ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಕಾನ್‌ಸ್ಟೆಬಲ್ ಅನಿಲ್ ಕುಮಾರ್ ಅವರನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸ್ ಅಧೀಕ್ಷಕ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಹಾಗೂ ತನಿಖಾಧಿಕಾರಿ ರವಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button