ಜಿಲ್ಲಾಸುದ್ದಿ

ಬೀದರ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಭಸ್ಮ

ಬೀದರ್, ಅ.6: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ಚಿಟಗುಪ್ಪ ತಾಲ್ಲೂಕಿನ ಮುಧಾಳ್ ಗ್ರಾಮದಲ್ಲಿ ನಡೆದಿದೆ.

ಚುಕ್ಕೆಮ್ಮ ಅವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರಗೊಂಡು ದಟ್ಟ ಹೊಗೆ ಆವರಿಸಿತ್ತು. ಇದರಿಂದ ಗ್ರಾಮದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮನೆಯ ಅಡುಗೆ ಕೋಣೆ ಹಾಗೂ ಹಾಲ್‌ನಲ್ಲಿ ಬೆಂಕಿ ವ್ಯಾಪಿಸಿದ ಪರಿಣಾಮ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ. ಫ್ರಿಜ್, ದಿನಸಿ ಸಾಮಗ್ರಿಗಳು ಸೇರಿದಂತೆ ಹಲವು ಗೃಹೋಪಯೋಗಿ ವಸ್ತುಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಭಸ್ಮವಾಗಿವೆ.

ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ

ಘಟನೆ ಕುರಿತು ಗ್ರಾಮಸ್ಥರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮೂಲಕ ಮಾಹಿತಿ ನೀಡಿದರು. ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡರು.

ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದು, ಹೆಚ್ಚಿನ ಅನಾಹುತ ಸಂಭವಿಸುವುದನ್ನು ತಪ್ಪಿಸಿದ್ದಾರೆ.

ಅದೃಷ್ಟವಶಾತ್ ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಿಟಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button