ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

ಕಲಬುರಗಿ, ಅ.7: ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಸಲ್ಲಿಕೆಯಾಗಿದ್ದ 15 ಅಭ್ಯರ್ಥಿಗಳ ನಾಮಪತ್ರಗಳ ಪರಿಶೀಲನಾ ಕಾರ್ಯ ಬುಧವಾರ ನಡೆಯಿತು. ಈ ಪೈಕಿ 14 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್ ತಿಳಿಸಿದ್ದಾರೆ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣಪ್ಪ ಮಟ್ಟೂರ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶಶೀಲ್ ಜಿ. ನಮೋಶಿ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸಾಯಿಬಣ್ಣ ಹಾಗೂ ಜನತಾ ದಳ (ಸಂಯುಕ್ತ) ಪಕ್ಷದ ಅಭ್ಯರ್ಥಿ ಶಂಕರೆಡ್ಡಿ ಪಾಟೀಲ ಅವರ ನಾಮಪತ್ರಗಳು ಕ್ರಮಬದ್ಧವಾಗಿವೆ.ಅದೇ ರೀತಿ, ಪಕ್ಷೇತರ ಅಭ್ಯರ್ಥಿಗಳಾದ ಕವಿರಾಜ, ತುಳಸಪ್ಪ ದಾಸರ, ನಬಿರಸೂಲ್, ಮಹಬೂಬ್ ವಂಟೇಲಿ, ರಾಜಕುಮಾರ, ರಾಜು, ಶರಣಬಸಪ್ಪ, ಶಶಿಧರ, ಶಿವಶಂಕರ ಹಾಗೂ ಡಾ. ಸುರೇಶ ಅವರು ಸಲ್ಲಿಸಿರುವ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ನಸೀರುದ್ದಿನ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ.ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನವಾಗಿದ್ದು, ಅಂದು ಅಂತಿಮವಾಗಿ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಚಿತ್ರಣ ಸ್ಪಷ್ಟವಾಗಲಿದೆ.ಚುನಾವಣಾ ವೀಕ್ಷಕ ಶಿವಕುಮಾರ ಕೆ.ಬಿ. ಅವರ ಉಪಸ್ಥಿತಿಯಲ್ಲಿ ನಡೆದ ನಾಮಪತ್ರಗಳ ಪರಿಶೀಲನಾ ಕಾರ್ಯದಲ್ಲಿ ಸಹಾಯಕ ಚುನಾವಣಾಧಿಕಾರಿ ಹಾಗೂ ಕಲಬುರಗಿ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.



