ಪಂಚಾಯಿತಿ ಚುನಾವಣೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಆದ್ಯತೆ ನೀಡಿ: ಹ್ಯಾರಿಸ್‌ಗೆ ಮನವಿ

ಕಲಬುರಗಿ, ಅ.7- ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಆದ್ಯತೆ ನೀಡಬೇಕು ಎಂದು ಜೆವರ್ಗಿ ಟಿಪ್ಪು ಸುಲ್ತಾನ್ ಸಮಿತಿ ಅಧ್ಯಕ್ಷ ಹಾಗೂ ನ್ಯಾಯವಾದಿ ಮೊಹಿಯುದ್ದೀನ್ ಇನಾಮದಾರ್ ಮನವಿ ಮಾಡಿದರು.
ಬುಧವಾರ ನಗರಕ್ಕೆ ಆಗಮಿಸಿದ್ದ ಕರ್ನಾಟಕ ರಾಜ್ಯ ಮುಸ್ಲಿಂ ಶಾಸಕರ ಒಕ್ಕೂಟದ ಅಧ್ಯಕ್ಷ ಎನ್.ಎ. ಹ್ಯಾರಿಸ್ ಅವರಿಗೆ ಮನವಿ ಪತ್ರ ಸಲ್ಲಿಸಿದ ಅವರು, ಮುಂಬರುವ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಮುಸ್ಲಿಂ ಸಮುದಾಯದ ಜನಸಂಖ್ಯೆ ಹಾಗೂ ಸ್ಥಳೀಯ ಸಾಮಾಜಿಕ ಪರಿಸ್ಥಿತಿಯನ್ನು ಪರಿಗಣಿಸಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅರ್ಹ ಹಾಗೂ ಸಮರ್ಥ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಬೇಕು. ಇದರಿಂದ ಸಮುದಾಯದ ರಾಜಕೀಯ ಪ್ರಾತಿನಿಧ್ಯ ಹೆಚ್ಚಲು ಸಹಕಾರಿಯಾಗಲಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಅದೇ ರೀತಿ ಜೆವರ್ಗಿ ಹಾಗೂ ಯಡ್ರಾಮಿ ತಾಲ್ಲೂಕುಗಳಲ್ಲಿರುವ ಮುಸ್ಲಿಂ ಸಮುದಾಯದ ಸ್ಮಶಾನಗಳ ಹಾಗೂ ಕಬರಸ್ತಾನಗಳ ಕುರಿತು ಸರಿಯಾದ ದಾಖಲೆಗಳನ್ನು ಪರಿಶೀಲಿಸಿ, ಅಗತ್ಯ ಸರ್ವೆ ನಡೆಸಬೇಕು. ಸರ್ಕಾರಿ ದಾಖಲೆಗಳಲ್ಲಿ ಅವುಗಳ ವಿವರಗಳನ್ನು ಸಮರ್ಪಕವಾಗಿ ದಾಖಲಿಸಿ, ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಪಂಚಾಯಿತಿ ಮಟ್ಟದಲ್ಲಿಯೂ ಮುಸ್ಲಿಂ ಸಮುದಾಯಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ದೊರೆಯುವಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಕ್ರಮ ಕೈಗೊಳ್ಳಬೇಕು ಎಂದು ಮೊಹಿಯುದ್ದೀನ್ ಇನಾಮದಾರ್ ಮನವಿ ಮಾಡಿದರು.



