ಮೋದಿ 25 ವರ್ಷಗಳ ದೇಶ ಸೇವೆ: ಬಿಜೆಪಿ ಸೇವಾ ಜ್ಯೋತಿ ಕಾರ್ಯಕ್ರಮ

ಕಲಬುರಗಿ, ಅ.7– ಪ್ರಧಾನಿ ನರೇಂದ್ರ ಮೋದಿ ಅವರು ಸತತ 25 ವರ್ಷಗಳಿಂದ ದೇಶದ ನಿರಂತರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಬುಧವಾರ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.
‘ಸೇವಾ ಸಂಕಲ್ಪ ಅಭಿಯಾನ’ದಡಿ ‘ಸೇವಾ ಜ್ಯೋತಿ’ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ವಿಕಸಿತ ಭಾರತ’ದ ಕುರಿತು ನೇರ ಪ್ರಸಾರದ ಮೂಲಕ ಮಾತನಾಡಿದರು. ಬಳಿಕ ಸೇವಾ ಜ್ಯೋತಿಗೆ ಜಿಲ್ಲಾ ಬಿಜೆಪಿ ಕಚೇರಿಯಿಂದ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಮಾಜಿ ಸಂಸದರು, ಮಾಜಿ ಶಾಸಕರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರು, ರಾಜ್ಯ, ಜಿಲ್ಲಾ ಮತ್ತು ಮಂಡಳ ಮಟ್ಟದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಪಕ್ಷದ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯ ನಾರಾಯಣ ಸಾ ಭಾಂಡಗೆ, ಶಾಸಕ ಡಾ. ಅವಿನಾಶ್ ಜಾಧವ್, ಬಿಜೆಪಿ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಅಶೋಕ ಬಗಲಿ, ಮಹಾನಗರ ಜಿಲ್ಲಾ ಅಧ್ಯಕ್ಷ ಚಂದು ಪಾಟೀಲ, ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡು ಸೇವಾ ಸಂಕಲ್ಪವನ್ನು ಪುನರುಚ್ಚರಿಸಿದರು.



