ಜಿಲ್ಲಾಸುದ್ದಿ

ಸಮಯ ಪ್ರಜ್ಞೆ, ಶಿಸ್ತಿನಿಂದ ಜೀವನದಲ್ಲಿ ಯಶಸ್ಸು: ಡಾ. ಶಿಂಧೆ

ಬೀದರ್, ಅ.7: ಸಮಯ ಪ್ರಜ್ಞೆ ಹಾಗೂ ಶಿಸ್ತನ್ನು ಮೈಗೂಡಿಸಿಕೊಂಡು ಜೀವನದಲ್ಲಿ ಮುನ್ನಡೆದರೆ ಯಶಸ್ಸು ಗಳಿಸಲು ಸಾಧ್ಯ ಎಂದು ಬೀದರ್ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ವಿಭಾಗದ ಡೀನ್ ಡಾ. ಜಯಕುಮಾರ ಶಿಂಧೆ ಹೇಳಿದರು.

ನಗರದ ನೌಬಾದ್‌ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಹಾಗೂ ಸಂಶೋಧನಾ ಕೇಂದ್ರದಲ್ಲಿ ಮಂಗಳವಾರ ನಡೆದ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಜೀವನದಲ್ಲಿ ಸಾಧಿಸುವ ಛಲವನ್ನು ಬೆಳೆಸಿಕೊಳ್ಳಬೇಕು. ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ನಿರಂತರ ಪರಿಶ್ರಮ ಹಾಗೂ ಶಿಸ್ತು ಅತ್ಯಂತ ಅಗತ್ಯ. ಸಮಯದ ಮಹತ್ವವನ್ನು ಅರಿತುಕೊಂಡು ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಅವರು ತಿಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಪ್ರೊ. ಮನೋಜಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಅಧ್ಯಯನಶೀಲರಾಗಿ, ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು. ಶಿಕ್ಷಣದ ಜತೆಗೆ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಕೊಡುಗೆ ನೀಡುವ ವ್ಯಕ್ತಿಗಳಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ. ಶಂಕರ ಗಣಗೊಂಡ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸಾಧನೆಯ ಮೂಲಕ ಪಾಲಕರಿಗೆ ಹಾಗೂ ಕಾಲೇಜಿಗೆ ಕೀರ್ತಿ ತರುವಂತಾಗಬೇಕು. ಉನ್ನತ ಗುರಿ ಹೊಂದಿ ಅದನ್ನು ಸಾಧಿಸಲು ಸತತ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.

ಬೀದರ್ ವಿಶ್ವವಿದ್ಯಾಲಯದ ಕಲಾ ವಿಭಾಗದ ಡೀನ್ ಡಾ. ರುತಾ, ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಸುಚಿತಾನಂದ ಮಲ್ಕಾಪುರೆ ಹಾಗೂ ಐಕ್ಯೂಎಸಿ ಸಂಚಾಲಕ ಡಾ. ಸಂಗಶೆಟ್ಟಿ ಮಾತನಾಡಿದರು.

ಅರ್ಥಶಾಸ್ತ್ರ ವಿಭಾಗದ ಅಂತಿಮ ವರ್ಷದ ಪರೀಕ್ಷೆಯಲ್ಲಿ ಬೀದರ್ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ ಪಲ್ಲವಿ ಹಾಗೂ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಗಳಿಸಿದ ಪೂಜಾ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಡಾ. ಸುನೀಲಕುಮಾರ ಮೂಲೆ, ಡಾ. ಬಸವರಾಜ ಕೋರಿಕೋಟಿ, ಡಾ. ಶ್ರೀಕಾಂತ ಮಲ್ಲಪ್ಪ, ಅರುಣಕುಮಾರ ಸೇರಿದಂತೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಅಂಬಿಕಾ ಮತ್ತು ಪ್ರತಿಭಾ ಕಾರ್ಯಕ್ರಮ ನಿರೂಪಿಸಿದರು. ಡಾ. ಜಯಭಾರತ ಮಂಗೇಶ್ಕರ್ ಸ್ವಾಗತಿಸಿದರು. ಅರುಣಕುಮಾರ ವಂದಿಸಿದರು.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button