ಜಿಲ್ಲಾಸುದ್ದಿ

ಹಳ್ಳ ಹಿಡಿದ ಕೂಸಿನ ಮನೆ ಯೋಜನೆ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಕಲಬುರಗಿ, ಅ.7– ರಾಜ್ಯದ ಗೃಹ ಹಾಗೂ ಐಟಿಬಿಟಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಕನಸಿನ ಯೋಜನೆಯಾದ ‘ಕೂಸಿನ ಮನೆ’ ಯೋಜನೆ ಹಳ್ಳ ಹಿಡಿದಿದ್ದು, ಯೋಜನೆ ಅನುಷ್ಠಾನದಲ್ಲಿ ನಿರ್ಲಕ್ಷ್ಯ ವಹಿಸಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆದಿವಾಸಿ ಅಲೆಮಾರಿ ಬುಡಕಟ್ಟು ಮೂಲನಿವಾಸಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಗೋಪಾಲ್ ಎಂ.ಪಿ. ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 2022-23ನೇ ಸಾಲಿನಲ್ಲಿ ಅಂದಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಪ್ರಿಯಾಂಕ್ ಖರ್ಗೆ ಅವರು ಪ್ರಸ್ತುತ ವಲಸೆ ಕಾರ್ಮಿಕರ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ಉದ್ದೇಶದಿಂದ ‘ಕೂಸಿನ ಮನೆ’ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದ್ದರು ಎಂದು ಹೇಳಿದರು.

ಸರ್ಕಾರ 2026-27ನೇ ಸಾಲಿನ ತ್ರೈಮಾಸಿಕ ಅನುದಾನವಾಗಿ ಜೂನ್‌ವರೆಗೆ ₹74.37 ಲಕ್ಷ ಬಿಡುಗಡೆ ಮಾಡಿದ್ದು, ಜಿಲ್ಲೆಯ 209 ಗ್ರಾಮ ಪಂಚಾಯಿತಿಗಳಲ್ಲಿ ತಲಾ ಇಬ್ಬರು ‘ಕೇರ್ ಟೇಕರ್‌’ಗಳನ್ನು ನೇಮಿಸಿ 4,483 ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲು ಅನುದಾನ ಮೀಸಲಿರಿಸಲಾಗಿದೆ ಎಂದರು.

ನಿಯಮದಂತೆ ಪ್ರತಿ ಮಗುವಿಗೆ ದಿನಕ್ಕೆ ₹12ರಂತೆ 75 ದಿನಗಳವರೆಗೆ ಪೌಷ್ಟಿಕ ಆಹಾರ ನೀಡಬೇಕು. ಯಾವುದೇ ಕಾರಣಕ್ಕೂ ಈ ಹಣವನ್ನು ಇತರ ಯೋಜನೆಗಳಿಗೆ ಬಳಸಬಾರದು ಎಂಬ ಕಠಿಣ ನಿಯಮವಿದೆ. ಆದರೆ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಗ್ರಾಮ ಪಂಚಾಯಿತಿ ಮಟ್ಟದ ನೋಡಲ್ ಅಧಿಕಾರಿಗಳು ಹಾಗೂ ಅಭಿವೃದ್ಧಿ ಅಧಿಕಾರಿಗಳು ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೆ, ಕೇರ್ ಟೇಕರ್‌ಗಳಿಗೆ ಗೌರವಧನ ಹಾಗೂ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸದೆ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ಯೋಜನೆಗೆ ಅನುದಾನ ಬಿಡುಗಡೆಯಾಗಿ ನಾಲ್ಕು ತಿಂಗಳು ಕಳೆದಿದ್ದರೂ ಜಿಲ್ಲೆಯ ಹಲವು ಗ್ರಾಮ ಪಂಚಾಯಿತಿಗಳಲ್ಲಿ ಕೂಸಿನ ಮನೆ ಕೇಂದ್ರಗಳನ್ನು ತೆರೆಯಲಾಗಿಲ್ಲ. ಹೀಗಾಗಿ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಅಧಿಕಾರಿಗಳನ್ನು ಅಮಾನತುಗೊಳಿಸಿ, ಅವರಿಂದ ದುರ್ಬಳಕೆಯಾದ ಹಣವನ್ನು ವಸೂಲಿ ಮಾಡಬೇಕು. ಅಲ್ಲದೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಶೌಚಾಲಯ ನಿರ್ಮಾಣದಲ್ಲೂ ಅಕ್ರಮ ಆರೋಪ

2022-23ನೇ ಸಾಲಿನಲ್ಲಿ ಅಂದಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಗ್ರಾಮೀಣ ಪ್ರದೇಶಗಳನ್ನು ಬಯಲು ಶೌಚ ಮುಕ್ತಗೊಳಿಸುವ ಉದ್ದೇಶದಿಂದ ಸಮುದಾಯ ಶೌಚಾಲಯ ಯೋಜನೆಯನ್ನು ಜಾರಿಗೆ ತಂದಿದ್ದರು. ಪ್ರತಿ ಶೌಚಾಲಯ ನಿರ್ಮಾಣಕ್ಕೆ ₹25 ಲಕ್ಷ ಅನುದಾನ ಮೀಸಲಿಟ್ಟು ಯೋಜನೆ ಜಾರಿಗೊಳಿಸಲಾಗಿತ್ತು ಎಂದು ಗೋಪಾಲ್ ಎಂ.ಪಿ. ತಿಳಿಸಿದರು.

ಆದರೆ ಭೂಸೇನಾ ನಿಗಮದ ಕಲಬುರಗಿ ಕಚೇರಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಬಹುತೇಕ ಶೌಚಾಲಯಗಳು ನಿರ್ಮಾಣವಾಗದೆ ಉಳಿದಿವೆ. ನಿರ್ಮಾಣಗೊಂಡಿರುವ ಹಲವು ಶೌಚಾಲಯಗಳು ಕಳಪೆ ಕಾಮಗಾರಿಯಿಂದಾಗಿ ಬಳಕೆಗೆ ಬಾರದ ಸ್ಥಿತಿಗೆ ತಲುಪಿವೆ ಎಂದು ಆರೋಪಿಸಿದರು.

ಈ ಹಿನ್ನೆಲೆಯಲ್ಲಿ ಕೂಡಲೇ ವಿಶೇಷ ತನಿಖಾ ತಂಡ ರಚಿಸಿ ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದರ ಜತೆಗೆ, ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಅವರು ಆಗ್ರಹಿಸಿದರು.

ಯೋಜನೆಗಳ ಉದ್ದೇಶ ದುರ್ಬಲ ವರ್ಗದ ಜನರಿಗೆ ಮತ್ತು ಮಕ್ಕಳಿಗೆ ನೇರ ಪ್ರಯೋಜನ ತಲುಪಿಸುವುದಾಗಿದ್ದರೂ, ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಅನುದಾನ ದುರ್ಬಳಕೆಯಿಂದ ಫಲಾನುಭವಿಗಳು ವಂಚಿತರಾಗುತ್ತಿದ್ದಾರೆ. ಈ ಕುರಿತು ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಂಡು ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಅವರು ಒತ್ತಾಯಿಸಿದರು.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button