ಸುಲಿಗೆ, ದರೋಡೆಕೋರರಿಗೆ ಪೊಲೀಸ್ ಪರೇಡ್

ಕಲಬುರಗಿ, ಅ.8– ನಗರ ಪೊಲೀಸ್ ಆಯುಕ್ತಾಲಯದ ಆವರಣದಲ್ಲಿ ಸುಲಿಗೆ ಹಾಗೂ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೊಲೀಸ್ ಪರೇಡ್ ನಡೆಸಲಾಯಿತು.
ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳು ಹಾಗೂ ಕಾನೂನುಬಾಹಿರ ಚಟುವಟಿಕೆಗಳ ಮೇಲೆ ನಿಗಾ ವಹಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಉದ್ದೇಶದಿಂದ ನಗರ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಸುಲಿಗೆ ಮತ್ತು ದರೋಡೆ ಪ್ರಕರಣಗಳ ಆರೋಪಿಗಳನ್ನು ಪರೇಡ್ಗೆ ಹಾಜರುಪಡಿಸಲಾಯಿತು.
ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಹಾಗೂ ಯಾವುದೇ ಅಪರಾಧ ಕೃತ್ಯಗಳಲ್ಲಿ ತೊಡಗದಂತೆ ಆರೋಪಿಗಳಿಗೆ ಎಚ್ಚರಿಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಐಪಿಎಸ್, ಅವರು, ಆರೋಪಿಗಳು ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ಭಾಗವಹಿಸಬಾರದು. ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಅಪರಾಧಗಳಲ್ಲಿ ತೊಡಗಿಕೊಂಡರೆ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ 10 ಪೊಲೀಸ್ ಠಾಣೆಗಳಿಂದ ಒಟ್ಟು 66 ಸುಲಿಗೆ ಹಾಗೂ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಪರೇಡ್ಗೆ ಹಾಜರುಪಡಿಸಲಾಯಿತು.
ಪ್ರಸಕ್ತ ಸಾಲಿನಲ್ಲಿ ಇದುವರೆಗೆ ಸುಲಿಗೆ ಹಾಗೂ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೈಕಿ 44 ಜನರ ವಿರುದ್ಧ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, 38 ಜನರ ವಿರುದ್ಧ ಬಾಂಡ್ಓವರ್ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಗರ ವ್ಯಾಪ್ತಿಯ ಎಲ್ಲ ಪೊಲೀಸ್ ಠಾಣೆಗಳ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು. ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಚಟುವಟಿಕೆಗಳ ಮೇಲೆ ಕಣ್ಣಿಟ್ಟು, ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಆಯುಕ್ತರು ಸೂಚಿಸಿದರು.
ಉಪ ಪೊಲೀಸ್ ಆಯುಕ್ತೆ ಶ್ರೀಮತಿ ಶಾಲು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



