ಕಲಬುರಗಿಯಲ್ಲಿ ಅ.೨೬ರಿಂದ ಮಲ್ಲಿಕಾರ್ಜುನ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ
ಮೂರು ದಿನಗಳ ಕಾಲ ಬಿಸಿಲು ಆರ್ಟ್ ಗ್ಯಾಲರಿಯಲ್ಲಿ ಕಲಾಕೃತಿಗಳ ಪ್ರದರ್ಶನ; ಸಾರ್ವಜನಿಕರಿಗೆ ಉಚಿತ ಪ್ರವೇಶ

ಕಲಬುರಗಿ, ಅ.೨೩: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯದಡಿ ರಾಯಚೂರಿನ ಯುವ ಚಿತ್ರಕಲಾವಿದ ಮಲ್ಲಿಕಾರ್ಜುನ ಅವರ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನವನ್ನು ಅಕ್ಟೋಬರ್ ೨೬ರಿಂದ ೨೮ರವರೆಗೆ ನಗರದ ಬಿಸಿಲು ಆರ್ಟ್ ಗ್ಯಾಲರಿ-೦೨ರಲ್ಲಿ ಆಯೋಜಿಸಲಾಗಿದೆ ಎಂದು ಹಿರಿಯ ಚಿತ್ರಕಲಾವಿದ ಡಾ. ಪರಶುರಾಮ್ ಪಿ. ತಿಳಿಸಿದ್ದಾರೆ.
ಅಕ್ಟೋಬರ್ ೨೬ರಂದು ಸಂಜೆ ೪.೩೦ಕ್ಕೆ ಬೆಂಗಳೂರಿನ ದೂರದರ್ಶನ ಕೇಂದ್ರದ ಗ್ರಾಫಿಕ್ಸ್ ಮೇಲ್ವಿಚಾರಕ ಹಾಗೂ ಹಿರಿಯ ಚಿತ್ರಕಲಾವಿದ ಶ್ರೀಶೈಲ ಗುಡೆದ ಅವರು ಪ್ರದರ್ಶನ ಉದ್ಘಾಟಿಸಲಿದ್ದಾರೆ. ಚಿತ್ರಕಲಾವಿದ ಹಾಗೂ ಚಿತ್ರಕಲಾ ಶಿಕ್ಷಕ ಮಲ್ಲಿಕಾರ್ಜುನ ವಿ. ಕೊರಳ್ಳಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಹಿರಿಯ ಚಿತ್ರಕಲಾವಿದ ಹಾಗೂ ವಿ.ಬಿ. ಬಿರಾದಾರ ಕಲಾ ಪ್ರತಿಷ್ಠಾನದ ಅಧ್ಯಕ್ಷ ವಿ.ಬಿ. ಬಿರಾದಾರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಗುಲಬರ್ಗಾ ವಿಶ್ವವಿದ್ಯಾಲಯದಿಂದ ಚಿತ್ರಕಲೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಲ್ಲಿಕಾರ್ಜುನ ಅವರು ವಿವಿಧ ಮಾಧ್ಯಮಗಳಲ್ಲಿ ರಚಿಸಿರುವ ೧೫ಕ್ಕೂ ಹೆಚ್ಚು ಕಲಾಕೃತಿಗಳು ಪ್ರದರ್ಶನದಲ್ಲಿ ಇರಲಿವೆ.
ಕಲಾವಿದ ಮಲ್ಲಿಕಾರ್ಜುನ ಅವರು ದೆಹಲಿ, ಹೈದರಾಬಾದ್, ಕೇರಳ, ಬೆಂಗಳೂರು, ಮೈಸೂರು, ಕಲಬುರಗಿ, ದಾವಣಗೆರೆ, ರಾಯಚೂರು, ಹಂಪಿ ಮತ್ತು ಬಾದಾಮಿ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ನಡೆದ ೨೦ಕ್ಕೂ ಹೆಚ್ಚು ಪ್ರತಿಷ್ಠಿತ ಕಲಾ ಪ್ರದರ್ಶನಗಳಲ್ಲಿ ಭಾಗವಹಿಸಿದ್ದಾರೆ. ಅಲ್ಲದೆ, ೧೫ಕ್ಕೂ ಹೆಚ್ಚು ರಾಜ್ಯ ಹಾಗೂ ರಾಷ್ಟ್ರಮಟ್ಟದ ಕಲಾ ಶಿಬಿರಗಳಲ್ಲಿಯೂ ಪಾಲ್ಗೊಂಡಿದ್ದಾರೆ.
ಇವರ ಕಲಾಕೃತಿಗಳು ಮೂರು ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನಗಳು ಹಾಗೂ ನಾಲ್ಕು ಸಮೂಹ ಚಿತ್ರಕಲಾ ಪ್ರದರ್ಶನಗಳಲ್ಲಿ ಪ್ರದರ್ಶನಗೊಂಡಿವೆ. ಎಂಟಕ್ಕೂ ಹೆಚ್ಚು ರಾಜ್ಯ ಮತ್ತು ರಾಷ್ಟ್ರಮಟ್ಟದ ಕಲಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಅಕ್ಟೋಬರ್ ೨೬ರಿಂದ ೨೮ರವರೆಗೆ ಪ್ರತಿದಿನ ಬೆಳಿಗ್ಗೆ ೧೦ರಿಂದ ಸಂಜೆ ೬ರವರೆಗೆ ಪ್ರದರ್ಶನ ವೀಕ್ಷಿಸಲು ಸಾರ್ವಜನಿಕರಿಗೆ ಉಚಿತ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.



