ಜಿಲ್ಲಾಸುದ್ದಿ

ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸಿ ರೇಣುಕಾ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಆಗ್ರಹ

ಬೆಲೆ ನಿಗದಿಯಾಗುವವರೆಗೆ ಸಕ್ಕರೆ ಮಾರಾಟ ಸ್ಥಗಿತಗೊಳಿಸಲು ರೈತ ಸಂಘ ಒತ್ತಾಯ

ಕಲಬುರಗಿ, ಅ. 30: ಜಿಲ್ಲೆಯ ಅಫಜಲಪುರ ತಾಲೂಕಿನ ಹವಳಗಾ ಗ್ರಾಮದ ರೇಣುಕಾ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯು ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸಿ ಕೂಡಲೇ ಕಾರ್ಖಾನೆಯನ್ನು ಆರಂಭಿಸಬೇಕು. ಬೆಲೆ ನಿಗದಿಯಾಗುವವರೆಗೆ ಕಾರ್ಖಾನೆಯಲ್ಲಿರುವ ಸಕ್ಕರೆ ಮಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ರಮೇಶ್ ಎಸ್. ಹೂಗಾರ್ ಆಗ್ರಹಿಸಿದ್ದಾರೆ.

ಈ ಕುರಿತು ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿರುವ ಅವರು, ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಂತರ್ಜಲ ಮಟ್ಟ ಕುಸಿಯುತ್ತಿದೆ. ಕೊಳವೆಬಾವಿಗಳು ಮತ್ತು ಬಾವಿಗಳು ಬತ್ತಿಹೋಗುತ್ತಿವೆ. ಮತ್ತೊಂದೆಡೆ, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿ ರೈತರು ಅಪಾರ ನಷ್ಟ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಕಾರ್ಖಾನೆಯ ಆಡಳಿತ ಮಂಡಳಿಯು ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಹಾಗೂ ರೈತ ಸಂಘಟನೆಗಳೊಂದಿಗೆ ಸಮನ್ವಯ ಸಾಧಿಸಿ ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ರೈತರ ಹಿತ ಕಾಪಾಡಲು ಆಗ್ರಹ

ಕೂಡಲೇ ಕಬ್ಬು ನುರಿಸುವಿಕೆ ಆರಂಭಿಸಿ ರೈತರ ಹಿತ ಕಾಪಾಡಬೇಕು. ಕಬ್ಬಿಗೆ ಅಂತಿಮ ಬೆಲೆ ನಿಗದಿಯಾಗುವವರೆಗೆ ಕಾರ್ಖಾನೆಯಲ್ಲಿರುವ ಸಕ್ಕರೆಯನ್ನು ಮಾರಾಟ ಮಾಡದೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು ಎಂದು ರಮೇಶ್ ಎಸ್. ಹೂಗಾರ್ ಮನವಿ ಮಾಡಿದ್ದಾರೆ.

ರೈತರ ಶ್ರಮಕ್ಕೆ ತಕ್ಕ ನ್ಯಾಯಯುತ ಬೆಲೆ ನೀಡುವುದು ಕಾರ್ಖಾನೆಯ ಆಡಳಿತ ಮಂಡಳಿಯ ಜವಾಬ್ದಾರಿಯಾಗಿದೆ. ಆದ್ದರಿಂದ ರೈತರ ಬೇಡಿಕೆಗಳಿಗೆ ಕೂಡಲೇ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಗಂಗಾಧರ ಕರಭಂಟನಾಳ, ಆನಂದ ದೇಸಾಯಿ ಜೇರಟಗಿ, ಗುಂಡಪ್ಪ ಹೂಗಾರ್, ಶಂಕರಗೌಡ ಪಾಟೀಲ, ದಾನಯ್ಯ ಹಿರೇಮಠ, ಮಾಳಪ್ಪ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button