ಕನ್ನಡದ ಶ್ರೀಮಂತ ಪರಂಪರೆ ಉಳಿಸಿ ಬೆಳೆಸಲು ಪ್ರೊ. ಪಲಾಟೆ ಕರೆ
ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ, ಕನ್ನಡದಲ್ಲಿ ಸಂಶೋಧನೆ ಮತ್ತು ಸಾಹಿತ್ಯ ರಚನೆಗೆ ಪ್ರೋತ್ಸಾಹ ಅಗತ್ಯ

ಕಲಬುರಗಿ, ನ. 3: ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ನೀಡುವುದರ ಜತೆಗೆ ಕನ್ನಡದಲ್ಲಿ ಸಂಶೋಧನೆ, ಸಾಹಿತ್ಯ ರಚನೆ ಹಾಗೂ ಜ್ಞಾನ ಸಂಪಾದನೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಕನ್ನಡವು ಶಾಸ್ತ್ರೀಯ ಭಾಷೆಯಾಗಿದ್ದು, ಅದರ ಶ್ರೀಮಂತ ಪರಂಪರೆಯನ್ನು ಉಳಿಸಿ ಬೆಳೆಸಲು ಎಲ್ಲರೂ ಕೈಜೋಡಿಸಬೇಕು ಎಂದು ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ. ವೆಂಕಟರಾವ್ ಪಲಾಟೆ ಕರೆ ನೀಡಿದರು.
ಜಿಲ್ಲೆಯ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಏಕೀಕರಣದ ಹಾದಿ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಕರ್ನಾಟಕದ ಇತಿಹಾಸವೆಂದರೆ ಏಕೀಕರಣ, ಹೋರಾಟ ಮತ್ತು ನಿರಂತರ ಪರಿಶ್ರಮದ ಇತಿಹಾಸವಾಗಿದೆ. ಅನೇಕ ಹೋರಾಟಗಾರರು, ಸಂಘಟನೆಗಳು, ಕನ್ನಡಪರ ಹೋರಾಟಗಾರರು, ಸಾಹಿತಿಗಳು, ಬರಹಗಾರರು ಹಾಗೂ ರಾಜಕೀಯ ನಾಯಕರು ನಡೆಸಿದ ಹೋರಾಟ, ತ್ಯಾಗ ಮತ್ತು ಪರಿಶ್ರಮದಿಂದ ಕರ್ನಾಟಕ ಏಕೀಕರಣ ಸಾಧ್ಯವಾಯಿತು ಎಂದು ಹೇಳಿದರು.
ಭಾರತದ ಸ್ವಾತಂತ್ರ್ಯ ಹೋರಾಟದ ಜತೆಯಲ್ಲಿಯೇ ಕರ್ನಾಟಕ ಏಕೀಕರಣ ಚಳವಳಿಯೂ ವಿವಿಧ ಹಂತಗಳಲ್ಲಿ ನಡೆದಿದ್ದು, ಐತಿಹಾಸಿಕ ಮಹತ್ವ ಹೊಂದಿದೆ. ಹಿಂದೆ ಕನ್ನಡ ಮಾತನಾಡುವ ಪ್ರದೇಶಗಳು ಮುಂಬೈ, ಮದ್ರಾಸ್, ಹೈದರಾಬಾದ್ ಮತ್ತು ಮೈಸೂರು ಆಡಳಿತ ಪ್ರದೇಶಗಳಲ್ಲಿ ಹಂಚಿಹೋಗಿದ್ದವು. ಆಯಾ ಪ್ರದೇಶಗಳಲ್ಲಿ ಆಡಳಿತ ಭಾಷೆ ಮತ್ತು ಜನರ ಆಡುಭಾಷೆಗಳ ನಡುವೆ ವ್ಯತ್ಯಾಸವಿತ್ತು. ಮುಂಬೈ ಪ್ರಾಂತ್ಯದಲ್ಲಿ ಮರಾಠಿ, ಮದ್ರಾಸ್ ಪ್ರಾಂತ್ಯದಲ್ಲಿ ತಮಿಳು ಮತ್ತು ತೆಲುಗು, ಹೈದರಾಬಾದ್ ಪ್ರಾಂತ್ಯದಲ್ಲಿ ಉರ್ದು ಹಾಗೂ ಮೈಸೂರು ಸಂಸ್ಥಾನದಲ್ಲಿ ಕನ್ನಡಕ್ಕೆ ಆಡಳಿತಾತ್ಮಕ ಪ್ರಾಮುಖ್ಯತೆ ಇತ್ತು ಎಂದು ವಿವರಿಸಿದರು.
ಕರ್ನಾಟಕ ಏಕೀಕರಣ ಚಳವಳಿಗೆ ಆಲೂರು ವೆಂಕಟರಾಯರು, ಹುಯಿಲಗೋಳ ನಾರಾಯಣರಾಯರು, ಹರ್ಡೇಕರ್ ಮಂಜಪ್ಪ, ಸಿದ್ಧಪ್ಪ ಕಂಬಳಿ ಮತ್ತು ಆರ್.ಎಚ್. ದೇಶಪಾಂಡೆ ಸೇರಿದಂತೆ ಅನೇಕ ಮಹನೀಯರು ಮಹತ್ವದ ಕೊಡುಗೆ ನೀಡಿದ್ದಾರೆ. 1890ರಲ್ಲಿ ಧಾರವಾಡದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಸ್ಥಾಪನೆ, ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗೆ ನಡೆದ ಪ್ರಯತ್ನಗಳು ಹಾಗೂ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕನ್ನಡ ಭಾಷಿಕ ಪ್ರದೇಶಗಳ ಏಕೀಕರಣದ ಬೇಡಿಕೆಗಳು ಚಳವಳಿಗೆ ಮಹತ್ವದ ತಿರುವು ನೀಡಿದವು ಎಂದರು.
ಹುಯಿಲಗೋಳ ನಾರಾಯಣರಾಯರು ರಚಿಸಿದ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಗೀತೆ ಕನ್ನಡಿಗರಲ್ಲಿ ಏಕೀಕರಣದ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿತು. 1915ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪನೆ ಹಾಗೂ ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗೆ ಮೈಸೂರು ಅರಸರು ಸೇರಿದಂತೆ ಅನೇಕ ಗಣ್ಯರು ನೀಡಿದ ಕೊಡುಗೆಗಳು ಏಕೀಕರಣದ ಆಶಯಕ್ಕೆ ಮತ್ತಷ್ಟು ಬಲ ತುಂಬಿದವು ಎಂದು ತಿಳಿಸಿದರು.
1956ರ ನವೆಂಬರ್ 1ರಂದು ಕನ್ನಡ ಭಾಷಿಕ ಪ್ರದೇಶಗಳನ್ನು ಒಗ್ಗೂಡಿಸಿ ವಿಶಾಲ ಮೈಸೂರು ರಾಜ್ಯವನ್ನು ರಚಿಸಲಾಯಿತು. ನಂತರ 1973ರ ನವೆಂಬರ್ 1ರಂದು ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ಅವರ ಆಡಳಿತಾವಧಿಯಲ್ಲಿ ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ಮರುನಾಮಕರಣ ಮಾಡಲಾಯಿತು. ಈ ಐತಿಹಾಸಿಕ ಬೆಳವಣಿಗೆಯ ಹಿಂದೆ ಅನೇಕ ಹೋರಾಟಗಾರರ ತ್ಯಾಗ ಮತ್ತು ಪರಿಶ್ರಮ ಅಡಗಿದೆ ಎಂದು ಸ್ಮರಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಕುಲಪತಿ ಪ್ರೊ. ಬಟ್ಟೆ ಸತ್ಯನಾರಾಯಣ ಮಾತನಾಡಿ, ಕರ್ನಾಟಕ ಏಕೀಕರಣದ ಇತಿಹಾಸವನ್ನು ಸ್ಮರಿಸುವುದರ ಜತೆಗೆ ನಾಡಿನ ಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದರು.
ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ ಮಾತನಾಡಿ, ಕರ್ನಾಟಕವು ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಸಮಗ್ರ ಅಭಿವೃದ್ಧಿ ಸಾಧಿಸಬೇಕು. ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನ, ಆರೋಗ್ಯ, ಶಿಕ್ಷಣ ಹಾಗೂ ಕೈಗಾರಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ರಾಜ್ಯ ಪ್ರಗತಿ ಹೊಂದಬೇಕು. 2047ರ ವಿಕಸಿತ ಭಾರತದ ಕನಸಿನ ಸಾಕಾರದಲ್ಲಿ ಕರ್ನಾಟಕದ ಕೊಡುಗೆ ಮಹತ್ವದ್ದಾಗಿದೆ. ರಾಜ್ಯ ಸರ್ಕಾರದ ಆಶಯದಂತೆ 2037ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿ ಸಾಧಿಸಲು ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿರುವ ವಿಶ್ವವಿದ್ಯಾಲಯವು ಸುತ್ತಮುತ್ತಲಿನ ಗ್ರಾಮಗಳನ್ನು ದತ್ತು ಪಡೆದು ಸಂಶೋಧನೆ, ಶಿಕ್ಷಣ, ಸಮಾಜಸೇವೆ ಹಾಗೂ ಕೌಶಲ್ಯಾಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಲು ಉತ್ತಮ ಅವಕಾಶ ಹೊಂದಿದೆ. ವಿವಿಧ ಅಧ್ಯಯನ ವಿಭಾಗಗಳು ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ ಸಂಶೋಧನೆ ನಡೆಸಬೇಕು. ಗ್ರಾಮೀಣ ಜನರಿಗೆ ಶಿಕ್ಷಣ, ಉದ್ಯೋಗಾವಕಾಶ, ಸಣ್ಣ ಕೈಗಾರಿಕೆಗಳ ಸ್ಥಾಪನೆ ಹಾಗೂ ಸ್ವಾವಲಂಬಿ ಬದುಕಿಗೆ ಅಗತ್ಯ ಮಾರ್ಗದರ್ಶನ ನೀಡುವ ಮೂಲಕ ಪ್ರಾದೇಶಿಕ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ತಿಳಿಸಿದರು.
ಡಾ. ಗಣಪತಿ ಬಿ. ಸಿನ್ನೂರ ಸ್ವಾಗತಿಸಿದರು. ಪ್ರೊ. ಪಾಂಡುರಂಗ ವಿ. ಪತ್ತಿ ವಂದಿಸಿದರು. ಡಾ. ಸಫಿಯಾ ಪರ್ವಿನ್ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಪ್ರೊ. ಬಸವರಾಜ ದೋಣೂರ, ಪ್ರೊ. ಚೆನ್ನವೀರ ಆರ್.ಎಂ., ಪ್ರೊ. ವಿಕ್ರಮ ವಿಸಾಜಿ, ಪ್ರೊ. ಜಿ.ಆರ್. ಅಂಗಡಿ, ಪ್ರೊ. ಎನ್. ಸತ್ಯನಾರಾಯಣ, ಪ್ರೊ. ಬಸವರಾಜ ಎಂ. ಕುಬಕಡ್ಡಿ, ಪ್ರೊ. ಶಿವಗಂಗಾ ರುಮ್ಮಾ, ಪ್ರೊ. ಮೊಹಮ್ಮದ್ ಜೋಹೇರ್, ಪ್ರೊ. ವಿಜಯಕುಮಾರ, ಪ್ರೊ. ದೇವರಾಜಪ್ಪ, ಪ್ರೊ. ಜಯವೇಲ್ ಸೇರಿದಂತೆ ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
