ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಸೇವೆ ಶ್ಲಾಘನೀಯ: ಪ್ರಭು ಚವ್ಹಾಣ್
ಸುಮಾರು ೯೦೦ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಸನ್ಮಾನ

ಔರಾದ್, ನ. ೪: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸರ್ಕಾರದ ವಿವಿಧ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ತಮ್ಮ ಜವಾಬ್ದಾರಿಯನ್ನು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸುವ ಮೂಲಕ ಮಕ್ಕಳ ಪೌಷ್ಟಿಕತೆ, ಮಹಿಳೆಯರ ಆರೋಗ್ಯ ಹಾಗೂ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಇವರ ಸೇವೆ ಶ್ಲಾಘನೀಯ ಎಂದು ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಪ್ರಭು ಬಿ. ಚವ್ಹಾಣ್ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸಂತಪುರ ವತಿಯಿಂದ ಪಟ್ಟಣದ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಬುಧವಾರ ಔರಾದ್ (ಬಿ) ಮತ್ತು ಕಮಲನಗರ ತಾಲ್ಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಕುರಿತು ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಮತ್ತು ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಜನಗಣತಿ ಸೇರಿದಂತೆ ಸರ್ಕಾರದ ವಿವಿಧ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಪಡೆಯಲಾಗುತ್ತಿದೆ. ಆದರೆ, ಅವರ ಕೆಲಸಕ್ಕೆ ಅನುಗುಣವಾಗಿ ಗೌರವಧನ ದೊರೆಯುತ್ತಿಲ್ಲ. ಈ ಕುರಿತು ವಿಧಾನಸಭೆಯಲ್ಲಿಯೂ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದೇನೆ. ಗೌರವಧನ ಹೆಚ್ಚಳ, ಆರೋಗ್ಯ, ವಿಮೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಕಾರ್ಯಕರ್ತೆಯರು ತಮ್ಮ ಸಮಸ್ಯೆಗಳನ್ನು ನೇರವಾಗಿ ಗಮನಕ್ಕೆ ತಂದರೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಅಂಗನವಾಡಿಗೆ ಬರುವ ಪ್ರತಿಯೊಂದು ಮಗುವನ್ನೂ ತಮ್ಮ ಸ್ವಂತ ಮಕ್ಕಳಂತೆ ಪ್ರೀತಿ ಮತ್ತು ಕಾಳಜಿಯಿಂದ ನೋಡಿಕೊಳ್ಳಬೇಕು. ಮಕ್ಕಳಿಗೆ ಉತ್ತಮ ಪೌಷ್ಟಿಕ ಆಹಾರ, ಆರೋಗ್ಯಕರ ವಾತಾವರಣ ಹಾಗೂ ಪೂರ್ವಪ್ರಾಥಮಿಕ ಶಿಕ್ಷಣ ದೊರೆಯುವಂತೆ ವಿಶೇಷ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಪ್ರಧಾನಮಂತ್ರಿ ಮಾತೃ ವಂದನಾ, ಬೇಟಿ ಬಚಾವೊ–ಬೇಟಿ ಪಢಾವೊ, ಸಮಗ್ರ ಶಿಶು ಅಭಿವೃದ್ಧಿ ಸೇವೆಗಳು, ಭಾಗ್ಯಲಕ್ಷ್ಮಿ ಹಾಗೂ ಉದ್ಯೋಗಿನಿ ಸೇರಿದಂತೆ ವಿವಿಧ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಮನೆಮನೆಗೆ ತೆರಳಿ ಜನರಲ್ಲಿ ಯೋಜನೆಗಳ ಕುರಿತು ಜಾಗೃತಿ ಮೂಡಿಸಬೇಕು ಎಂದರು.
ಸಮಾಜದಲ್ಲಿ ಇನ್ನೂ ಕಂಡುಬರುತ್ತಿರುವ ಬಾಲ್ಯವಿವಾಹದಂತಹ ಅನಿಷ್ಟ ಪದ್ಧತಿಗಳನ್ನು ತಡೆಗಟ್ಟುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ. ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಪೋಷಕರಲ್ಲಿ ಅರಿವು ಮೂಡಿಸಬೇಕು. ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಿಗೆ ಸರ್ಕಾರದಿಂದ ದೊರೆಯುವ ಆರೋಗ್ಯ, ಪೌಷ್ಟಿಕ ಆಹಾರ ಹಾಗೂ ಇತರ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಕಾಳಜಿ ವಹಿಸಬೇಕು ಎಂದು ತಿಳಿಸಿದರು.
ತಾಲ್ಲೂಕಿನ ಎಲ್ಲೆಡೆ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸುವ ಕಾರ್ಯ ನಡೆಯುತ್ತಿದೆ. ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ, ಅಗತ್ಯ ಮೂಲಸೌಕರ್ಯ ಹಾಗೂ ಆಧುನಿಕ ಸೌಲಭ್ಯಗಳನ್ನು ಒದಗಿಸಿ ಅಂಗನವಾಡಿ ಕೇಂದ್ರಗಳನ್ನು ಮಾದರಿ ಕೇಂದ್ರಗಳನ್ನಾಗಿ ರೂಪಿಸುವ ಪ್ರಯತ್ನ ನಡೆದಿದೆ. ಪ್ರತಿ ಕೇಂದ್ರದಲ್ಲಿಯೂ ಶುದ್ಧ ಕುಡಿಯುವ ನೀರು, ಶೌಚಾಲಯ ಹಾಗೂ ಗುಣಮಟ್ಟದ ಆಹಾರ ದೊರೆಯುವಂತಾಗಬೇಕು ಎಂದು ಹೇಳಿದರು.
ರಾಜ್ಯ ಸರ್ಕಾರ ಅಂಗನವಾಡಿ ಕೇಂದ್ರಗಳತ್ತ ಹೆಚ್ಚಿನ ಗಮನ ಹರಿಸಬೇಕು. ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಿಗೆ ವಿತರಿಸುವ ಬೆಲ್ಲ ಸೇರಿದಂತೆ ಇತರ ಆಹಾರ ಪದಾರ್ಥಗಳು ಗುಣಮಟ್ಟದಿಂದ ಕೂಡಿರುವುದನ್ನು ಖಚಿತಪಡಿಸಬೇಕು. ಆಹಾರದ ಗುಣಮಟ್ಟ ಪರಿಶೀಲನೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಸುಮಾರು ೯೦೦ ಮಂದಿಗೆ ಸನ್ಮಾನ: ಕಾರ್ಯಕ್ರಮದಲ್ಲಿ ಔರಾದ್ (ಬಿ) ಮತ್ತು ಕಮಲನಗರ ತಾಲ್ಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಗರ್ಭಿಣಿಯರು ಸೇರಿದಂತೆ ಸುಮಾರು ೯೦೦ ಮಂದಿಗೆ ಶಾಲು ಹೊದಿಸಿ, ಹೂಮಾಲೆ ಮತ್ತು ಉಡುಗೊರೆ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಪಾಸ್ಬುಕ್ ವಿತರಿಸಲಾಯಿತು. ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವೂ ನಡೆಯಿತು.
ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಸುಭಾಷ ರತ್ನಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉತ್ತಮ ಸಂಗೇವಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀನಿವಾಸ ಬಾಳುವಾಲೆ, ವಿಜಯಲಕ್ಷ್ಮಿ, ಶೋಭಾ, ಭಾಗ್ಯವತಿ, ನಿರ್ಮಲಾ, ಶಾಂತಮ್ಮ, ರವಿಕಾ, ರೇಣುಕಾ, ಮಹಾದೇವಿ, ಸುದೀಕ್ಷ್ಣಾ, ಪದ್ಮಾವತಿ, ಶ್ರದ್ಧಾ, ಮಂಗಳಾ, ಆಕಾಶ, ಸತೀಶ್, ಶಿವಪುತ್ರ, ರವೀಂದ್ರ, ಮಹಾದೇವ ಸೇರಿದಂತೆ ಅಂಗನವಾಡಿ ಮೇಲ್ವಿಚಾರಕಿಯರು, ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಉಪಸ್ಥಿತರಿದ್ದರು.
ವಿಜಯಲಕ್ಷ್ಮಿ ನಿರೂಪಿಸಿದರು. ಶೋಭಾವತಿ ವಂದಿಸಿದರು.
