ಕಬ್ಬಿಗೆ ಬೆಂಬಲ ಬೆಲೆ ಆಗ್ರಹಿಸಿ ಚೌಡಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್
ಟನ್‌ಗೆ ₹೫,೫೦೦ ಬೆಲೆ ನಿಗದಿಗೆ ಒತ್ತಾಯಿಸಿ ರೈತರ ಪ್ರತಿಭಟನೆ

ಅಫಜಲಪುರ, ನ. ೪: ಕಬ್ಬಿಗೆ ಪ್ರತಿ ಟನ್‌ಗೆ ₹೫,೫೦೦ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಚೂನಪ್ಪ ಪೂಜಾರಿ ಬಣದ ಕಾರ್ಯಕರ್ತರು ಚೌಡಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಬುಧವಾರ ಪ್ರತಿಭಟನೆ ನಡೆಸಿದರು.
ಹೆದ್ದಾರಿಯಲ್ಲಿ ಟೆಂಟ್ ಹಾಕಿ, ಎತ್ತಿನ ಬಂಡೆ ಹಾಗೂ ಟ್ರ್ಯಾಕ್ಟರ್ ಟ್ರಾಲಿಗಳನ್ನು ನಿಲ್ಲಿಸಿ ರಸ್ತೆ ತಡೆ ನಡೆಸಿದ ರೈತರು, ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಸಂತೋಷ ಮಲಗೊಂಡ ಮಾತನಾಡಿ, ಕಳೆದ ಮೂರು ದಿನಗಳಿಂದ ರೈತರು ರಸ್ತೆ ಬದಿಯಲ್ಲಿ ಕುಳಿತು ಹೋರಾಟ ನಡೆಸುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಂಘದ ಕಾರ್ಯಾಧ್ಯಕ್ಷ ಸಿದ್ದು ದಣ್ಣೂರ ಮಾತನಾಡಿ, ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಪ್ರತಿ ಟನ್ ಕಬ್ಬಿಗೆ ₹೫,೫೦೦ ಬೆಲೆ ನಿಗದಿಪಡಿಸಿ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಬೇಕು. ಇಲ್ಲದಿದ್ದರೆ ಕಾರ್ಖಾನೆಗಳ ಕಾರ್ಯಾರಂಭಕ್ಕೂ ತೊಂದರೆಯಾಗಲಿದೆ ಎಂದು ಎಚ್ಚರಿಸಿದರು.
ರೈತರ ಬಂದ್ ಮತ್ತು ಪ್ರತಿಭಟನೆಯಿಂದ ಚೌಡಾಪುರದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿ ಸಾರ್ವಜನಿಕರು ಪರದಾಡುವಂತಾಯಿತು. ಪೊಲೀಸರು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದ್ದರು.
ರೈತರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿ ನಡೆದ ಪ್ರತಿಭಟನೆಯಲ್ಲಿ ಸಿದ್ದರಾಮ ದಣ್ಣೂರ, ಸಂತೋಷ ಜಿ. ಮಲಗೊಂಡ, ಅಶೋಕ ಹೂಗಾರ, ಶರಣಗೌಡ ಪಾಟೀಲ, ಕಾಸಿಂ ಹಳ್ಯಾಳ, ರಾಜು ಶೆಟ್ಟಿ, ರಘು ಸ್ವಾಮಿ, ಹರೀಶ್ ಸಾಸನೇಕರ್, ಸುಭಾಷ್ ಲಿಂಗಶೆಟ್ಟಿ, ವಿಜಯಕುಮಾರ, ಸಾಯಿಬಣ್ಣ ಜಮಾದಾರ, ರಮೇಶ ಯಲ್ಲಪ್ಪ, ಮಲ್ಲಪ್ಪ ಗೌಡ ಪಾಟೀಲ, ಅಣ್ಣಾರಾವ್ ಪಾಟೀಲ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.



