ರಾಜಕೀಯ

ಪಟ್ಟಣ ಜಿಲ್ಲಾ ಪಂಚಾಯಿತಿ ಕ್ಷೇತ್ರವನ್ನು ಪರಿಶಿಷ್ಟ ಜಾತಿಗೆ ಮೀಸಲಿಡಲು ಆಗ್ರಹಿಸಿ ಪ್ರತಿಭಟನೆ

ದಕ್ಷಿಣ ವಿಧಾನಸಭಾ ಕ್ಷೇತ್ರದ ಪಟ್ಟಣ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ಕಲ್ಪಿಸುವಂತೆ ಒತ್ತಾಯ

ಕಲಬುರಗಿ, ನ. ೪: ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪಟ್ಟಣ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳನ್ನು ಪರಿಶಿಷ್ಟ ಜಾತಿಗೆ ಮೀಸಲಿಡಬೇಕು ಎಂದು ಆಗ್ರಹಿಸಿ ದಕ್ಷಿಣ ವಿಧಾನಸಭಾ ಪರಿಶಿಷ್ಟ ಜಾತಿ ಮೀಸಲಾತಿ ವಂಚಿತ ಪಟ್ಟಣ ವಲಯ ವೇದಿಕೆಯ ಪದಾಧಿಕಾರಿಗಳು ಪಟ್ಟಣ ಕ್ರಾಸ್ ಬಳಿ ಪ್ರತಿಭಟನೆ ನಡೆಸಿ, ರಸ್ತೆ ತಡೆ ನಡೆಸಿದರು.

ಪ್ರತಿಭಟನೆಯಲ್ಲಿ ಶರಣಬಸಪ್ಪ ಎಸ್. ದೊಡ್ಡಮನಿ, ನಾಗರಾಜ ಖಂಡೋಜಿ, ಗುಂಡಪ್ಪ ಲಂಡನಕರ್, ಅನಿಲಕುಮಾರ ಡಾಂಗೆ, ಈರಣ್ಣ ದಬ್ಬಕಿ, ಸಂಜುಕುಮಾರ ಜವರಕರ್, ಚಂದ್ರಕಾಂತ ವಾಲಿ, ಪರಮೇಶ್ವರ ಶೀಲ್ಡ್, ಪಂಡಿತ ಸಾವಳಗಿ, ಧರ್ಮಣ್ಣ ಪಟ್ಟಣಕರ್, ಬಸಯ್ಯ ಗುತ್ಹೇದಾರ್, ಶರಣಪ್ಪ ಸಿಂಗೆ, ಓಂಕಾರ ವಠಾರ, ಸೈದಪ್ಪ ಡಾಂಗೆ, ಶರಣಬಸಪ್ಪ ಕುಕಮಕರ, ಯುನೂಸ್ ಭೀಮಳ್ಳಿ, ಶರಣಪ್ಪ ಸಿಂಗೆ, ರಾಹುಲ್ ಡಾಂಗೆ, ಅರುಣ ಹತಗುಂದಿ, ವಿಠಲ ಬಚ್ಚನಾಳ, ಸೋಮಲಿಂಗ ಸಾವಳಗಿ, ಬಾಬುರಾವ್ ಪಟ್ಟಣ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಪ್ರತಿಭಟನಾಕಾರರು ತಹಶೀಲ್ದಾರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಪಟ್ಟಣ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಕಳೆದ ೩೬ ವರ್ಷಗಳ ಮೀಸಲಾತಿ ಇತಿಹಾಸವನ್ನು ಉಲ್ಲೇಖಿಸಿ, ಈವರೆಗೆ ಪರಿಶಿಷ್ಟ ಜಾತಿಗೆ ಮೀಸಲಾತಿ ಕಲ್ಪಿಸದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

೧೯೯೩ರಿಂದ ೧೯೯೮ರವರೆಗೆ ಹಿಂದುಳಿದ ವರ್ಗಗಳ ಮಹಿಳೆಯರಿಗೆ, ೧೯೯೮ರಿಂದ ೨೦೦೪ರವರೆಗೆ ಸಾಮಾನ್ಯ ವರ್ಗಕ್ಕೆ, ೨೦೦೪ರಿಂದ ೨೦೧೦ರವರೆಗೆ ಹಿಂದುಳಿದ ವರ್ಗಕ್ಕೆ, ೨೦೧೦ರಿಂದ ೨೦೧೫ರವರೆಗೆ ಸಾಮಾನ್ಯ ಮಹಿಳೆಯರಿಗೆ ಹಾಗೂ ೨೦೧೬ರಿಂದ ೨೦೨೧ರವರೆಗೆ ಹಿಂದುಳಿದ ವರ್ಗ ‘ಬಿ’ಗೆ ಮೀಸಲಾತಿ ಕಲ್ಪಿಸಲಾಗಿತ್ತು. ೨೦೨೬ರ ಮೀಸಲಾತಿಯನ್ನೂ ಸಾಮಾನ್ಯ ವರ್ಗಕ್ಕೆ ನಿಗದಿಪಡಿಸಲಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಪಟ್ಟಣ ಜಿಲ್ಲಾ ಪಂಚಾಯಿತಿ ಕ್ಷೇತ್ರದ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ ಸುಮಾರು ೧೩ರಿಂದ ೧೪ ಸಾವಿರ ಜನರು ವಾಸಿಸುತ್ತಿದ್ದಾರೆ. ಅಹಿಂದ ಹಾಗೂ ಬಹುಜನ ಸಮುದಾಯದವರೂ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೂ ಈ ಕ್ಷೇತ್ರಕ್ಕೆ ಪರಿಶಿಷ್ಟ ಜಾತಿಯ ಮೀಸಲಾತಿ ಕಲ್ಪಿಸದಿರುವುದರಿಂದ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಮತ್ತು ರಾಜಕೀಯ ಪ್ರಾತಿನಿಧ್ಯ ದೊರೆಯುತ್ತಿಲ್ಲ ಎಂದು ದೂರಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಂದು ಸಮುದಾಯಕ್ಕೂ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಸೂಕ್ತ ರಾಜಕೀಯ ಪ್ರಾತಿನಿಧ್ಯ ದೊರೆಯಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆ, ಹಿತಾಸಕ್ತಿ ಹಾಗೂ ಸಾಮಾಜಿಕ ನ್ಯಾಯದ ಆಶಯಗಳನ್ನು ಪರಿಗಣಿಸಿ ಮೀಸಲಾತಿ ನಿಗದಿಪಡಿಸಬೇಕು. ದೀರ್ಘಕಾಲದಿಂದ ಪರಿಶಿಷ್ಟ ಜಾತಿಗೆ ಮೀಸಲಾತಿ ಕಲ್ಪಿಸದಿರುವ ಹಿನ್ನೆಲೆಯಲ್ಲಿ ಹಿಂದಿನ ಮೀಸಲಾತಿ ಇತಿಹಾಸವನ್ನು ಸಮಗ್ರವಾಗಿ ಪರಿಶೀಲಿಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಈ ಕುರಿತು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ದಕ್ಷಿಣ ಕ್ಷೇತ್ರದ ಶಾಸಕರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಧಾಕೃಷ್ಣ ದೊಡ್ಡಮನಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಲಾಗಿದೆ. ಪಟ್ಟಣ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿಯನ್ನು ಮರುಪರಿಶೀಲಿಸಿ ಪರಿಶಿಷ್ಟ ಜಾತಿಗೆ ಮೀಸಲಾತಿ ಕಲ್ಪಿಸುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

Related Articles

Leave a Reply

Your email address will not be published. Required fields are marked *

Back to top button