ಶಿಕ್ಷಣಸಾಂಸ್ಕೃತಿಕ

ರಂಗಭೂಮಿ ಕಲೆಯಿಂದ ವ್ಯಕ್ತಿತ್ವ ವಿಕಸನಕ್ಕೆ ಅವಕಾಶ: ಜಾಬಶೆಟ್ಟಿ

ಗ್ರಾಮೀಣ ಪ್ರತಿಭೆಗಳಿಗೆ ರಾಷ್ಟ್ರೀಯ ಮಟ್ಟದ ವೇದಿಕೆ ಕಲ್ಪಿಸುವುದು ಶ್ಲಾಘನೀಯ: ಬಸವರಾಜ ಜಾಬಶೆಟ್ಟಿ

ಬೀದರ್, ನ. 4: ರಂಗಭೂಮಿ ಕೇವಲ ಮನರಂಜನೆಯ ಮಾಧ್ಯಮವಲ್ಲ. ಅಭಿನಯ ಕೌಶಲ, ಆತ್ಮವಿಶ್ವಾಸ, ವ್ಯಕ್ತಿತ್ವ ವಿಕಸನ ಹಾಗೂ ಸೃಜನಶೀಲತೆಯನ್ನು ಬೆಳೆಸುವ ಪರಿಣಾಮಕಾರಿ ಕಲಾಪ್ರಕಾರವಾಗಿದೆ. ವಿದ್ಯಾರ್ಥಿಗಳು ರಂಗಭೂಮಿ ತರಬೇತಿಯ ಸದುಪಯೋಗ ಪಡೆದುಕೊಂಡು ಕಲಾಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂದು ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಹೇಳಿದರು.

ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆ ಹಾಗೂ ಕರ್ನಾಟಕ ಸಾಹಿತ್ಯ ಸಂಘದ ಸಹಯೋಗದಲ್ಲಿ ಕರ್ನಾಟಕ ಕಾಲೇಜಿನ ಸಹಕಾರದೊಂದಿಗೆ ಆಯೋಜಿಸಿದ್ದ ರಂಗಭೂಮಿ ತರಬೇತಿ ಶಿಬಿರದ ಸಮಾರೋಪ ಮತ್ತು ಪ್ರಮಾಣಪತ್ರ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಈ ಭಾಗದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ರಂಗಭೂಮಿ ತರಬೇತಿ ಪಡೆಯುವ ಅವಕಾಶ ಕಲ್ಪಿಸಿರುವುದು ಶ್ಲಾಘನೀಯ. ಇಂತಹ ಶಿಬಿರಗಳಿಂದ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ಪ್ರತಿಭೆಗಳಿಗೆ ಸೂಕ್ತ ವೇದಿಕೆ ದೊರೆಯುತ್ತದೆ. ವಿದ್ಯಾರ್ಥಿಗಳು ಶಿಬಿರದಲ್ಲಿ ಕಲಿತ ಕೌಶಲಗಳನ್ನು ನಿರಂತರ ಅಭ್ಯಾಸದ ಮೂಲಕ ಮತ್ತಷ್ಟು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಪ್ರೊ. ಜಗನ್ನಾಥ ಹೆಬ್ಬಾಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರೀಯ ನಾಟಕ ಶಾಲೆಯು ದೇಶದ ಪ್ರತಿಷ್ಠಿತ ರಂಗಭೂಮಿ ತರಬೇತಿ ಸಂಸ್ಥೆಗಳಲ್ಲಿ ಒಂದಾಗಿದೆ. ಇಲ್ಲಿ ತರಬೇತಿ ಪಡೆದ ಅನೇಕ ಕಲಾವಿದರು ಕನ್ನಡ, ಹಿಂದಿ ಸೇರಿದಂತೆ ವಿವಿಧ ಭಾಷೆಗಳ ಚಲನಚಿತ್ರ ಹಾಗೂ ರಂಗಭೂಮಿ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ಹೇಳಿದರು.

ಅಭಿನಯ, ದೇಹಭಾಷೆ, ಸಂಭಾಷಣೆ, ಭಾವಾಭಿವ್ಯಕ್ತಿ ಹಾಗೂ ಪಾತ್ರ ನಿರ್ವಹಣೆಯಂತಹ ವಿಷಯಗಳಲ್ಲಿ ಶಿಸ್ತುಬದ್ಧ ತರಬೇತಿ ನೀಡುವುದು ಈ ಸಂಸ್ಥೆಯ ವಿಶೇಷತೆಯಾಗಿದೆ ಎಂದು ತಿಳಿಸಿದರು.

ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸತೀಶ ಪಾಟೀಲ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮನಾನ್ ಸೇಠ್, ಶಿಬಿರದ ನಿರ್ದೇಶಕ ಮಹೇಶ ಪಾಟೀಲ, ನಿವೃತ್ತ ಪ್ರಾಚಾರ್ಯ ಡಾ. ಪ್ರಭುಶೆಟ್ಟಿ ಮುಲಗೆ, ರಾಷ್ಟ್ರೀಯ ಜನಪದ ಬುಡಕಟ್ಟು ಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಡಾ. ರಾಜಕುಮಾರ ಹೆಬ್ಬಾಳೆ, ಸಂಸ್ಥೆಯ ಆಡಳಿತಾಧಿಕಾರಿ ಪ್ರೊ. ಅನಿಲಕುಮಾರ ಆನದೂರೆ ಹಾಗೂ ಕರ್ನಾಟಕ ಕಾಲೇಜಿನ ಪ್ರಾಚಾರ್ಯ ಪ್ರೊ. ಸೋಮನಾಥ ಬಿರಾದಾರ ಉಪಸ್ಥಿತರಿದ್ದರು.

ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ. ಸುನೀತಾ ಕೂಡ್ಲಿಕರ್ ಕಾರ್ಯಕ್ರಮ ನಿರ್ವಹಿಸಿದರು. ನೂರಾರು ವಿದ್ಯಾರ್ಥಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಕಲಾಸಕ್ತರು ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button