ಜಿಲ್ಲಾಸುದ್ದಿ

ಸಾರಡಗಿ ಬಿ. ಬ್ಯಾರೇಜ್‌ಗೆ ಜಿಲ್ಲಾಧಿಕಾರಿ ಭೇಟಿ: ನೀರು ಪೋಲಾಗದಂತೆ ಕ್ರಮಕ್ಕೆ ಸೂಚನೆ

ಕುಡಿಯುವ ನೀರಿಗೆ ಮಾತ್ರ ಬಳಕೆ; ಅನ್ಯ ಉದ್ದೇಶಕ್ಕೆ ನೀರು ಬಳಸುವುದನ್ನು ತಡೆಯಲು ಅಧಿಕಾರಿಗಳಿಗೆ ನಿರ್ದೇಶನ

ಕಲಬುರಗಿ, ನ. 7: ನೀರಿನ ಲಭ್ಯತೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರಡಗಿ ಬಿ. ಗ್ರಾಮದ ಬ್ರಿಡ್ಜ್ ಕಂ ಬ್ಯಾರೇಜ್‌ಗೆ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಭೇಟಿ ನೀಡಿ ಪರಿಶೀಲಿಸಿದರು. ಬ್ಯಾರೇಜ್‌ನಿಂದ ನೀರು ಪೋಲಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬ್ಯಾರೇಜ್‌ನಲ್ಲಿರುವ ನೀರಿನ ಪ್ರಮಾಣ ಸೀಮಿತವಾಗಿರುವುದರಿಂದ ಅದನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಬೇಕು. ಬೇರೆ ಉದ್ದೇಶಗಳಿಗೆ ನೀರು ಬಳಸದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಅಲ್ಲದೆ, ಬ್ಯಾರೇಜ್‌ನಿಂದ ನೀರು ಎತ್ತುವ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಜೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ಪೂಜಾರಿ ಅವರಿಗೆ ಸೂಚಿಸಿದರು. ಈ ಕುರಿತು ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಜು, ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಶ್ರವಣ್ ಕುಮಾರ, ಸಹಾಯಕ ಆಯುಕ್ತೆ ರಿತಿಕಾ ವರ್ಮಾ, ಕಲಬುರಗಿ ತಹಶೀಲ್ದಾರ್ ಕೆ. ಆನಂದಶೀಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button