ಬಗದಲ ಹಳೆಯ ಸೇತುವೆ ಮರುನಿರ್ಮಾಣಕ್ಕೆ ಶಾಸಕ ಡಾ. ಬೆಲ್ದಾಳೆ ಆಗ್ರಹ

ಬೀದರ್, ನ.9: ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಗದಲ ಗ್ರಾಮದ ಸಮೀಪ ಕಾರಂಜಾ ನದಿಯ ಹಿನ್ನೀರಿನ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಹಳೆಯ ಸೇತುವೆ ಶಿಥಿಲಾವಸ್ಥೆ ತಲುಪಿದ್ದು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಅದರ ಬದಲಿಗೆ ಹೊಸ ಸೇತುವೆ ನಿರ್ಮಿಸಬೇಕು ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಸುಮಾರು ₹21 ಕೋಟಿ ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿ, ಅಗತ್ಯ ಅನುದಾನ ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಬೀದರ್–ಚಿಂಚೋಳಿ ಪ್ರಮುಖ ಸಂಪರ್ಕ ರಸ್ತೆಯಲ್ಲಿರುವ ಬಗದಲ ಸೇತುವೆಯು ಸುತ್ತಮುತ್ತಲಿನ ಹಲವು ಗ್ರಾಮಗಳ ಜನರ ಸಂಚಾರಕ್ಕೆ ಪ್ರಮುಖ ಕೊಂಡಿಯಾಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ಸಾರ್ವಜನಿಕರು, ರೈತರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ವಿವಿಧ ವಾಹನಗಳು ಸಂಚರಿಸುತ್ತವೆ. ವಿಶೇಷವಾಗಿ ಕಬ್ಬು ಬೆಳೆಗಾರರು ತಮ್ಮ ಕಬ್ಬನ್ನು ಸಕ್ಕರೆ ಕಾರ್ಖಾನೆಗಳಿಗೆ ಸಾಗಿಸಲು ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ಹೀಗಾಗಿ ಸೇತುವೆಯ ದುಸ್ಥಿತಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಸೇತುವೆಯ ಸ್ಥಿತಿ ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಸುಮಾರು ಮೂರು ತಿಂಗಳ ಹಿಂದೆಯೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಂದ ಸೇತುವೆಯ ಸ್ಥಿತಿಗತಿ ಕುರಿತು ಮಾಹಿತಿ ಪಡೆದು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ತಕ್ಷಣ ಅಗತ್ಯ ದುರಸ್ತಿ ಕಾರ್ಯ ಕೈಗೊಳ್ಳಬೇಕು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು.
ಆದರೆ ಸೇತುವೆಯ ಪ್ರಸ್ತುತ ಸ್ಥಿತಿಯನ್ನು ಗಮನಿಸಿದರೆ ತಾತ್ಕಾಲಿಕ ದುರಸ್ತಿಗಿಂತ ಶಾಶ್ವತ ಪರಿಹಾರ ಕಲ್ಪಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಸುಮಾರು ₹21 ಕೋಟಿ ಅನುದಾನದ ಅವಶ್ಯಕತೆಯಿದ್ದು, ಈ ಕುರಿತು ಸರ್ಕಾರದ ಗಮನ ಸೆಳೆದು ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಬಗದಲ ಸೇತುವೆಯು ಕೇವಲ ಒಂದು ಗ್ರಾಮದ ಸಂಪರ್ಕಕ್ಕೆ ಸೀಮಿತವಾಗಿಲ್ಲ. ಸುತ್ತಮುತ್ತಲಿನ ಹಲವು ಗ್ರಾಮಗಳ ಜನರ ಸಂಚಾರ, ಕೃಷಿ ಚಟುವಟಿಕೆ ಹಾಗೂ ವ್ಯಾಪಾರ ವಹಿವಾಟಿಗೆ ಪ್ರಮುಖ ಆಧಾರವಾಗಿದೆ. ಸೇತುವೆ ಶಿಥಿಲಾವಸ್ಥೆಯಲ್ಲಿರುವುದರಿಂದ ಭಾರಿ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆಯೂ ಪ್ರಶ್ನೆಯಾಗಿದೆ.
ಸೇತುವೆಯ ಪ್ರಸ್ತುತ ಸ್ಥಿತಿಯನ್ನು ಪರಿಗಣಿಸಿ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಭಾರಿ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗದ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅದರಂತೆ ಮನಾಳಖೇಳ್ಳಿ ಕ್ರಾಸ್ನಿಂದ ಬಂಗೂರು ಕ್ರಾಸ್ ಮಾರ್ಗವಾಗಿ ಮನಳ್ಳಿ ಗ್ರಾಮದ ಮೂಲಕ ಭಾರಿ ವಾಹನಗಳು ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ. ಬೀದರ್ ನಗರದಿಂದ ಬರುವ ವಾಹನಗಳು ಮುರಾರ್ಜಿ ದೇಸಾಯಿ ಶಾಲೆಯ ಬಳಿಯ ಮನಳ್ಳಿ ರಸ್ತೆಯ ಮೂಲಕ ಸಂಚರಿಸುವಂತೆ ಸೂಚಿಸಲಾಗಿದೆ.
ಸಾರ್ವಜನಿಕರು ಹಾಗೂ ವಾಹನ ಸವಾರರು ಜಿಲ್ಲಾಡಳಿತ ಸೂಚಿಸಿರುವ ಪರ್ಯಾಯ ಮಾರ್ಗಗಳನ್ನು ಅನುಸರಿಸುವ ಮೂಲಕ ಸಹಕರಿಸಬೇಕು. ಸೇತುವೆಯ ಸುರಕ್ಷತೆ ಮತ್ತು ಸಂಚಾರ ನಿಯಂತ್ರಣದ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಉತ್ತಮ ರಸ್ತೆ ಹಾಗೂ ಸೇತುವೆ ಸಂಪರ್ಕ ವ್ಯವಸ್ಥೆ ಅತ್ಯಗತ್ಯವಾಗಿದೆ. ಬಗದಲ ಸೇತುವೆಯ ನಿರ್ಮಾಣವು ಈ ಭಾಗದ ಜನರ ಬಹುದಿನಗಳ ಅಗತ್ಯವಾಗಿದ್ದು, ರೈತರ ಹಿತಾಸಕ್ತಿ ಕಾಪಾಡುವುದು ಹಾಗೂ ಸಾರ್ವಜನಿಕರಿಗೆ ಸುರಕ್ಷಿತ ಮೂಲಸೌಕರ್ಯ ಒದಗಿಸುವುದು ತಮ್ಮ ಆದ್ಯತೆಯಾಗಿದೆ. ಹೊಸ ಸೇತುವೆ ನಿರ್ಮಾಣಕ್ಕೆ ಅಗತ್ಯ ಅನುದಾನ ಮಂಜೂರಾಗುವವರೆಗೆ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮುಂದುವರಿಸಲಾಗುವುದು ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ದಕ್ಷಿಣ ಮಂಡಲದ ಅಧ್ಯಕ್ಷ ಗುರುನಾಥ ಎಂ. ರಾಜಗಿರಿ (ಬಗದಲ), ಮುಖಂಡರಾದ ರೇವಣಪ್ಪ ಮೈಲಾರ, ಸೋಮನಾಥ ಪೋಶೆಟ್ಟಿ, ಶಶಿಕಾಂತ ಕಲವಟ್ಟಿ, ಶಿವಕುಮಾರ ಗೌಡಪ್ಪನೂರ, ಅಣ್ಣಪ್ಪ ರಾಜಗಿರಿ, ಪ್ರಭುರಾವ್ ಹಲಬರ್ಗಿ, ಹನಾನ್ ಗಾಜಿ, ಕಂಟೆಪ್ಪ ಮೈಲಾರ, ಅಶೋಕ ಜಮಾದಾರ, ಇಕ್ಬಾಲ್ ಗಾಜಿ, ಸುಭಾಷ್ ಮಟ್ಟಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
