ಹಾಲು, ಬಸ್ ಪ್ರಯಾಣ ದರ ಏರಿಕೆಗೆ ಕೆಆರ್ಎಸ್ ಪಕ್ಷ ವಿರೋಧ

ಬೀದರ್, ನ.9: ರಾಜ್ಯ ಸರ್ಕಾರ ನವೆಂಬರ್ 1ರಿಂದ ಹಾಲಿನ ದರ ಹಾಗೂ ನವೆಂಬರ್ 5ರಿಂದ ಬಸ್ ಪ್ರಯಾಣ ದರ ಹೆಚ್ಚಿಸಿರುವುದನ್ನು ತಕ್ಷಣ ಹಿಂಪಡೆಯಬೇಕು. ಸರ್ಕಾರದ ವಿವಿಧ ಇಲಾಖೆಗಳು ಮತ್ತು ನಿಗಮಗಳಲ್ಲಿನ ಭ್ರಷ್ಟಾಚಾರ, ಅವ್ಯವಹಾರ ಹಾಗೂ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಅಗತ್ಯ ಆರ್ಥಿಕ ಸಂಪನ್ಮೂಲಗಳನ್ನು ಕ್ರೋಡೀಕರಿಸಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ಜಿಲ್ಲಾಧ್ಯಕ್ಷ ಹಣಮಂತ ಮಟ್ಟಿ ಒತ್ತಾಯಿಸಿದರು.
ಈ ಕುರಿತು ಪಕ್ಷದ ವತಿಯಿಂದ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ ಅವರು, ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿದರು.
ರಾಜ್ಯ ಸರ್ಕಾರ ಹಾಲಿನ ದರವನ್ನು ನವೆಂಬರ್ 1ರಿಂದ ಹಾಗೂ ಬಸ್ ಪ್ರಯಾಣ ದರವನ್ನು ನವೆಂಬರ್ 5ರಿಂದ ಹೆಚ್ಚಿಸಿರುವುದು ಜನಸಾಮಾನ್ಯರ ಜೀವನದ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹೊರಿಸಿದೆ. ರೈತರಿಗೆ ಹೆಚ್ಚಿನ ದರ ನೀಡುವ ನೆಪದಲ್ಲಿ ಹಾಲಿನ ಬೆಲೆ ಹೆಚ್ಚಿಸಲಾಗಿದ್ದು, ಘೋಷಿತ ಪ್ರಮಾಣಕ್ಕಿಂತಲೂ ಹೆಚ್ಚಿನ ದರ ಏರಿಕೆ ಮಾಡಲಾಗಿದೆ ಎಂದು ಆರೋಪಿಸಿದರು.
ಅದೇ ರೀತಿ ಬಸ್ ಪ್ರಯಾಣ ದರವನ್ನು ಶೇ 25ರಷ್ಟು ಹೆಚ್ಚಿಸುವುದಾಗಿ ಹೇಳಿ, ನಗರ ಸಾರಿಗೆಯಲ್ಲಿ ಶೇ 35ರಷ್ಟು ಹೆಚ್ಚಳ ಮಾಡಿರುವುದು ಜನಸಾಮಾನ್ಯರಿಗೆ ತೀವ್ರ ಹೊರೆಯಾಗಿದೆ ಎಂದು ದೂರಿದರು.
ಈಗಾಗಲೇ ಆಹಾರ ಪದಾರ್ಥಗಳು, ತರಕಾರಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಹಾಲು ಮತ್ತು ಬಸ್ ದರ ಏರಿಕೆ ಮತ್ತಷ್ಟು ಆರ್ಥಿಕ ಹೊರೆಯಾಗಿದೆ. ಹಾಲಿನ ದರ ಏರಿಕೆಗೆ ರೈತರ ಹಿತಾಸಕ್ತಿಯನ್ನು ಮುಂದಿಟ್ಟುಕೊಳ್ಳಲಾಗುತ್ತಿದೆ. ಆದರೆ ಕೆಎಂಎಫ್ ಹಾಗೂ ಹಾಲು ಒಕ್ಕೂಟಗಳಲ್ಲಿ ನಡೆಯುತ್ತಿರುವ ಅವ್ಯವಹಾರ ಮತ್ತು ಅಕ್ರಮಗಳನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.
ಮಂಡ್ಯ ಹಾಲು ಒಕ್ಕೂಟದಲ್ಲಿನ ಕಲಬೆರಕೆ ಪ್ರಕರಣ ಸೇರಿದಂತೆ ಇಂತಹ ಘಟನೆಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಹಾಲು ಒಕ್ಕೂಟಗಳ ಕಾರ್ಯವೈಖರಿಯನ್ನು ಸುಧಾರಿಸಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದರೆ ಗ್ರಾಹಕರ ಮೇಲೆ ಹೆಚ್ಚುವರಿ ಹೊರೆ ಹಾಕದೆ ರೈತರಿಗೆ ಉತ್ತಮ ದರ ನೀಡಲು ಸಾಧ್ಯವಿದೆ ಎಂದು ಹೇಳಿದರು.
ಸಾರಿಗೆ ನಿಗಮಗಳು ನಷ್ಟದಲ್ಲಿವೆ ಎಂಬ ನೆಪದಲ್ಲಿ ಬಸ್ ಪ್ರಯಾಣ ದರ ಹೆಚ್ಚಿಸಲಾಗಿದೆ. ಆದರೆ ನಿಗಮಗಳಲ್ಲಿನ ಭ್ರಷ್ಟಾಚಾರ, ಅವ್ಯವಹಾರ ಹಾಗೂ ಆಡಳಿತಾತ್ಮಕ ವೈಫಲ್ಯಗಳನ್ನು ಸರಿಪಡಿಸುವ ಪ್ರಯತ್ನ ನಡೆಯುತ್ತಿಲ್ಲ. ಸಾರಿಗೆ ನೌಕರರಿಗೆ ಸಮಯಕ್ಕೆ ಸರಿಯಾಗಿ ವೇತನ ಪಾವತಿಸದಿರುವುದು, ಕಡಿಮೆ ಸಂಬಳ ಸೇರಿದಂತೆ ಹಲವು ಸಮಸ್ಯೆಗಳಿವೆ. ಹೀಗಿರುವಾಗ ಪ್ರಯಾಣ ದರ ಹೆಚ್ಚಿಸುವ ಬದಲು ಸಾರಿಗೆ ನಿಗಮಗಳ ಕಾರ್ಯವೈಖರಿ ಸುಧಾರಿಸಿ ಅನಗತ್ಯ ವೆಚ್ಚಗಳನ್ನು ಕಡಿತಗೊಳಿಸಬೇಕು ಎಂದು ಆಗ್ರಹಿಸಿದರು.
2023ರ ವಿಧಾನಸಭಾ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೇ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಭ್ರಷ್ಟಾಚಾರ ನಿಯಂತ್ರಿಸಿ ಹೆಚ್ಚುವರಿ ಸಂಪನ್ಮೂಲ ಕ್ರೋಡೀಕರಿಸದಿದ್ದರೆ ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿದೆ ಎಂದು ಕೆಆರ್ಎಸ್ ಪಕ್ಷ ಎಚ್ಚರಿಸಿತ್ತು. ಇದೀಗ ಅಭಿವೃದ್ಧಿ ಕಾಮಗಾರಿಗಳಿಗೆ ಹಣದ ಕೊರತೆ, ಗುತ್ತಿಗೆದಾರರು ಹಾಗೂ ಸರಬರಾಜುದಾರರಿಗೆ ಬಾಕಿ ಪಾವತಿ, ರೈತರಿಗೆ ಪರಿಹಾರ ನೀಡುವಲ್ಲಿನ ವಿಳಂಬ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗುತ್ತಿವೆ. ಇಂತಹ ಸಂದರ್ಭದಲ್ಲಿ ಜನರ ಮೇಲೆ ಬೆಲೆ ಏರಿಕೆಯ ಹೊರೆ ಹೇರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
ಸರ್ಕಾರಿ ಕಾರ್ಯಕ್ರಮಗಳಲ್ಲಿನ ದುಂದುವೆಚ್ಚ, ಆಡಂಬರದ ಜಾಹೀರಾತುಗಳು, ಅನಗತ್ಯ ಸರ್ಕಾರಿ ವಾಹನಗಳ ಬಳಕೆ ಹಾಗೂ ಆಡಳಿತಾತ್ಮಕ ವೆಚ್ಚಗಳಿಗೆ ಕಡಿವಾಣ ಹಾಕಬೇಕು. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಜವಾಬ್ದಾರಿಯುತ ಕಾರ್ಯನಿರ್ವಹಣೆಯನ್ನು ಖಚಿತಪಡಿಸಬೇಕು. ಭ್ರಷ್ಟಾಚಾರ ನಿಯಂತ್ರಿಸಿ ದಕ್ಷ ಆಡಳಿತ ನೀಡುವ ಮೂಲಕ ರಾಜ್ಯದ ಆರ್ಥಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಜನರ ಹಿತದೃಷ್ಟಿಯಿಂದ ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆಯನ್ನು ತಕ್ಷಣ ಹಿಂಪಡೆಯಬೇಕು. ಭ್ರಷ್ಟಾಚಾರ ಹಾಗೂ ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಜನಪರ ಆಡಳಿತ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕೆಆರ್ಎಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಶಿವರಾಜ್ ಶ್ರೀಮಂಗಲೆ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಹಾದೇವಿ ಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಜರಂಗ ಪವಾರ್, ಜಿಲ್ಲಾ ಕಾರ್ಯದರ್ಶಿ ವಿಠಲರಾವ್ ಚಟ್ನಳ್ಳಿಕರ್, ಪಕ್ಷದ ಕಾರ್ಯಕರ್ತರಾದ ಹನುಮರೆಡ್ಡಿ ಎಂಗಡೆ, ಕೃಷ್ಣಾರೆಡ್ಡಿ ಎಂಗಡೆ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
