ಕಲಬುರಗಿ ಬಳಿ ಆಧುನಿಕ ವಚನ ಮಂಟಪ ನಿರ್ಮಾಣಕ್ಕೆ ಸಿದ್ಧತೆ

ಕಲಬುರಗಿ, ನ.10: ನಗರದ ಸಮೀಪದ ಕಪನೂರು ಗ್ರಾಮದ ಬಳಿ ಶರಣ-ಶರಣೆಯರ ವಚನ ಪರಂಪರೆ, ಸಾಮಾಜಿಕ ಕ್ರಾಂತಿ ಹಾಗೂ ಕನ್ನಡದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುವ ಆಧುನಿಕ ವಚನ ಮಂಟಪ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಸಂಬಂಧ ವಚನ ಮಂಟಪದ ವಿನ್ಯಾಸ, ನಿರ್ಮಾಣದ ರೂಪುರೇಷೆ ಹಾಗೂ ವಿವಿಧ ಸೌಲಭ್ಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯದ ಗೃಹ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಅವರು, ಯೋಜನೆಯನ್ನು ಅರ್ಥಪೂರ್ಣವಾಗಿ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ತಮ್ಮ ಕಚೇರಿಯಲ್ಲಿ ನಡೆದ ಸಭೆಯಲ್ಲಿ ವಚನ ಮಂಟಪ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿವಿಧ ಹೆಸರಾಂತ ವಾಸ್ತುಶಿಲ್ಪಿಗಳು ಸಿದ್ಧಪಡಿಸಿ ಸಲ್ಲಿಸಿರುವ ವಿನ್ಯಾಸ ಹಾಗೂ ಪರಿಕಲ್ಪನಾ ವರದಿಗಳನ್ನು ಸಚಿವರು ಪರಿಶೀಲಿಸಿದರು.
ತಾಲ್ಲೂಕಿನ ಕಪನೂರು ಗ್ರಾಮದ ಸರ್ವೆ ನಂ. 44/1ರಲ್ಲಿರುವ 6 ಎಕರೆ 6 ಗುಂಟೆ ಜಮೀನಿನಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.
ವಚನ ಮಂಟಪದ ಜೊತೆಗೆ ಶರಣರ ಜೀವನ, ವಚನ ಸಾಹಿತ್ಯ ಹಾಗೂ ವಚನ ಚಳವಳಿಯ ಇತಿಹಾಸವನ್ನು ಪರಿಚಯಿಸುವ ವಸ್ತುಸಂಗ್ರಹಾಲಯ, ವ್ಯಾಖ್ಯಾನ ಕೇಂದ್ರ, ಅನುಭವ ಕೇಂದ್ರ ಹಾಗೂ ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸುವ ಯೋಜನೆಯೂ ಇದೆ.
ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರು ಸೇರಿದಂತೆ ವಚನ ಕ್ರಾಂತಿಯಲ್ಲಿ ಪಾಲ್ಗೊಂಡ ಎಲ್ಲ ಶರಣ-ಶರಣೆಯರ ಜೀವನ, ಸಾಧನೆ, ಭಾವಚಿತ್ರಗಳು ಹಾಗೂ ಅಮೂಲ್ಯ ವಚನಗಳನ್ನು ಇಲ್ಲಿ ಪರಿಚಯಿಸಲಾಗುತ್ತದೆ. ವಚನ ಸಾಹಿತ್ಯದ ಆಶಯ, ಸಮಾನತೆ, ಕಾಯಕ, ದಾಸೋಹ ಹಾಗೂ ಸಾಮಾಜಿಕ ನ್ಯಾಯದ ಸಂದೇಶಗಳನ್ನು ಇಂದಿನ ಮತ್ತು ಮುಂದಿನ ಪೀಳಿಗೆಗೆ ತಲುಪಿಸುವ ರೀತಿಯಲ್ಲಿ ಮಂಟಪವನ್ನು ವಿನ್ಯಾಸಗೊಳಿಸಲಾಗುತ್ತದೆ.
ಇದರೊಂದಿಗೆ ಚರ್ಚೆ, ಸಂವಾದ, ಉಪನ್ಯಾಸ, ವಿಚಾರ ಸಂಕಿರಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಕೂಲವಾಗುವಂತೆ ವಿಶಾಲ ಸಭಾಂಗಣವನ್ನೂ ನಿರ್ಮಿಸುವ ಉದ್ದೇಶವಿದೆ. ವಚನ ಸಾಹಿತ್ಯದ ಕುರಿತು ಅಧ್ಯಯನ ನಡೆಸುವ ಸಂಶೋಧಕರು, ವಿದ್ಯಾರ್ಥಿಗಳು ಹಾಗೂ ಆಸಕ್ತರಿಗೆ ಅಗತ್ಯ ಮಾಹಿತಿ ಮತ್ತು ಸೌಲಭ್ಯಗಳನ್ನು ಒದಗಿಸುವ ಕೇಂದ್ರವಾಗಿಯೂ ಇದು ರೂಪುಗೊಳ್ಳಲಿದೆ.
ಜಿಲ್ಲೆಯ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಪ್ರವಾಸೋದ್ಯಮ, ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿರುವ ತಾಣಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದೆ ಎಂದು ಸಚಿವರು ತಿಳಿಸಿದರು.
ಈ ಹಿನ್ನೆಲೆಯಲ್ಲಿ ಕಾಳಗಿ ತಾಲ್ಲೂಕಿನ ಸೂರ್ಯನಾರಾಯಣ ದೇವಾಲಯದ ಸಂರಕ್ಷಣಾ ಕಾಮಗಾರಿ, ಸೇಡಂ ತಾಲ್ಲೂಕಿನ ಐತಿಹಾಸಿಕ ಮಳಖೇಡ ಕೋಟೆಯ ಅಭಿವೃದ್ಧಿ ಹಾಗೂ ಚಿತ್ತಾಪುರ ತಾಲ್ಲೂಕಿನ ನಾಗಾವಿ ಪಾರಂಪರಿಕ ಪ್ರದೇಶದಲ್ಲಿರುವ ಪ್ರಾಚ್ಯ ಕುರುಹುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಅದೇ ರೀತಿ ಚಿತ್ತಾಪುರ ತಾಲ್ಲೂಕಿನ ಕನಗನಹಳ್ಳಿಯಲ್ಲಿರುವ ಐತಿಹಾಸಿಕ ಬೌದ್ಧ ನೆಲೆ ಹಾಗೂ ಪ್ರಾಚ್ಯ ಕುರುಹುಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವುದರ ಜೊತೆಗೆ ಈ ತಾಣಗಳನ್ನು ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ಆಕರ್ಷಣೀಯವಾಗಿಸುವುದು ಸರ್ಕಾರದ ಉದ್ದೇಶವಾಗಿದೆ. ಇದರಿಂದ ಜಿಲ್ಲೆಯ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಉತ್ತೇಜನ ದೊರೆಯುವುದರೊಂದಿಗೆ ಸ್ಥಳೀಯ ಆರ್ಥಿಕ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎಂದು ಸಚಿವರು ಆಶಯ ವ್ಯಕ್ತಪಡಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಲ್ಲದೆ, ವಿಡಿಯೋ ಸಂವಾದದ ಮೂಲಕ ಕಲಬುರಗಿ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಹಾಗೂ ಜಿಲ್ಲೆಯ ಇತರ ಅಧಿಕಾರಿಗಳು ಭಾಗವಹಿಸಿದ್ದರು.
