ನಾಗಮಾರಪಳ್ಳಿ ಆಸ್ಪತ್ರೆಯಲ್ಲಿ ನ.11ರಂದು ಉಚಿತ ಹೊರರೋಗಿಗಳ ತಪಾಸಣೆ

ಬೀದರ್, ನ.11: ಸಹಕಾರಿ ಸಂಸ್ಥೆಗಳನ್ನು ಜನಕಲ್ಯಾಣ ಹಾಗೂ ಅಭಿವೃದ್ಧಿಯ ಉದ್ದೇಶದಿಂದ ಕಟ್ಟಿ ಬೆಳೆಸಿದ ದಿವಂಗತ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಅವರ ಜನ್ಮದಿನದ ಅಂಗವಾಗಿ ನಗರದ ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿಸೂಪರ್ ಸ್ಪೆಷಾಲಿಟಿ ಸಹಕಾರಿ ಆಸ್ಪತ್ರೆಯಲ್ಲಿ ನವೆಂಬರ್ 11ರಂದು ಉಚಿತ ಹೊರರೋಗಿಗಳ ತಪಾಸಣೆ ಶಿಬಿರ ಆಯೋಜಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಆಸ್ಪತ್ರೆಯ ಅಧ್ಯಕ್ಷ ತರುಣ್ ಸೂರ್ಯಕಾಂತ್ ನಾಗಮಾರಪಳ್ಳಿ ಅವರು, ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಹೊರರೋಗಿಗಳ ತಪಾಸಣೆ ಉಚಿತವಾಗಿ ನಡೆಯಲಿದೆ. ಇದರ ಜೊತೆಗೆ ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ಶೇ.50ರಷ್ಟು ರಿಯಾಯಿತಿ ದರದಲ್ಲಿ ಮಾಡಲಾಗುವುದು ಎಂದು ತಿಳಿಸಿದರು.
ಎಂಆರ್ಐ, ಸಿಟಿ ಸ್ಕ್ಯಾನಿಂಗ್ ಹಾಗೂ ಪ್ರಯೋಗಾಲಯದ ಪರೀಕ್ಷೆಗಳಿಗೆ ಶೇ.50ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಸಾರ್ವಜನಿಕರು ಈ ಅವಕಾಶದ ಸದುಪಯೋಗ ಪಡೆದುಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರಕ್ಕೆ ಆಗಮಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
