₹3.75 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಬೀದರ್, ನ.11: ದಕ್ಷಿಣ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಗ್ರಾಮೀಣ ಭಾಗಗಳ ಮೂಲಸೌಕರ್ಯ ಸುಧಾರಣೆಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಒಟ್ಟು ₹3.75 ಕೋಟಿ ವೆಚ್ಚದ ಎರಡು ಮಹತ್ವದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ತಿಳಿಸಿದರು.
ಕ್ಷೇತ್ರದ ಚಟ್ಟಾ–ಚಟ್ಟಾ ವಾಡಿ–ಘೋಡಪಳ್ಳಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಚಟ್ಟಾ ಗ್ರಾಮದ ಹೊರವಲಯದಿಂದ ಘೋಡಪಳ್ಳಿ ಗ್ರಾಮದವರೆಗೆ ₹2.25 ಕೋಟಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಇದೇ ಸಂದರ್ಭದಲ್ಲಿ ಚಟ್ಟಾ–ಚಟ್ಟಾ ವಾಡಿ ಗ್ರಾಮದಲ್ಲಿ ₹1.50 ಕೋಟಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ, ವಿಭಜಕ ನಿರ್ಮಾಣ ಹಾಗೂ ಬೀದಿ ದೀಪಗಳ ಅಳವಡಿಕೆ ಕಾಮಗಾರಿಗೂ ಚಾಲನೆ ನೀಡಲಾಗಿದೆ ಎಂದರು.
ಈ ಭಾಗದ ಜನರು ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ರಸ್ತೆ ಅಭಿವೃದ್ಧಿಯಿಂದ ಗ್ರಾಮಗಳ ನಡುವಿನ ಸಂಪರ್ಕ ಮತ್ತಷ್ಟು ಸುಧಾರಿಸಲಿದೆ. ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಸಾಗಿಸಲು, ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಹಾಗೂ ಸಾರ್ವಜನಿಕರು ದೈನಂದಿನ ಚಟುವಟಿಕೆಗಳಿಗೆ ಸುಗಮವಾಗಿ ಸಂಚರಿಸಲು ಅನುಕೂಲವಾಗಲಿದೆ. ರಸ್ತೆ ಅಭಿವೃದ್ಧಿಯೊಂದಿಗೆ ರಾತ್ರಿ ವೇಳೆಯಲ್ಲಿಯೂ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.
ಒಟ್ಟು ₹3.75 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ಎರಡು ಕಾಮಗಾರಿಗಳು ಗ್ರಾಮೀಣ ಭಾಗದ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಬಲಪಡಿಸುವುದರ ಜೊತೆಗೆ ಸ್ಥಳೀಯ ಜನರ ಸಂಚಾರದ ಸಮಸ್ಯೆಗಳಿಗೆ ಪರಿಹಾರ ಒದಗಿಸಲಿವೆ ಎಂದು ತಿಳಿಸಿದರು.
ಕಾಮಗಾರಿಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಸ್ಥಳದಲ್ಲಿಯೇ ಅನುಷ್ಠಾನದ ಕುರಿತು ಪರಿಶೀಲನೆ ನಡೆಸಿ, ನಿಗದಿತ ಯೋಜನೆಯಂತೆ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಲಾಯಿತು. ಕಾಮಗಾರಿಗಳಲ್ಲಿ ಗುಣಮಟ್ಟದ ಸಾಮಗ್ರಿಗಳನ್ನು ಬಳಸಬೇಕು. ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೆ, ನಿಗದಿತ ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಸಮರ್ಪಕ ರಸ್ತೆ ಸಂಪರ್ಕ, ಕುಡಿಯುವ ನೀರು, ವಿದ್ಯುತ್, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದೆ. ಗ್ರಾಮೀಣ ಭಾಗದ ಜನರ ಅಗತ್ಯತೆ ಹಾಗೂ ಸಾರ್ವಜನಿಕರ ಬೇಡಿಕೆಗಳಿಗೆ ಸ್ಪಂದಿಸುತ್ತಾ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಯಾವುದೇ ಗ್ರಾಮವನ್ನು ಕಡೆಗಣಿಸದೆ ಎಲ್ಲ ಪ್ರದೇಶಗಳಿಗೂ ಸಮಾನ ಆದ್ಯತೆ ನೀಡಿ ಜನರ ಜೀವನಮಟ್ಟ ಸುಧಾರಿಸಲು ನಿರಂತರವಾಗಿ ಶ್ರಮಿಸಲಾಗುತ್ತಿದೆ ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ತಿಳಿಸಿದರು.
ಈ ಸಂದರ್ಭದಲ್ಲಿ ಸುತ್ತಮುತ್ತಲಿನ ಪಕ್ಷದ ಮುಖಂಡರು, ಗ್ರಾಮಗಳ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.
