ಜಿಲ್ಲಾಸುದ್ದಿಶಿಕ್ಷಣ

ಸರ್ಕಾರಿ ಶಾಲೆಗಳ ವಿಲೀನ ವಿರೋಧಿಸಿ ಎಸ್‌ಎಫ್‌ಐ ಪ್ರತಿಭಟನೆ

ಕಲಬುರಗಿ, ನ.14: ಸರ್ಕಾರಿ ಶಾಲೆಗಳನ್ನು ಉಳಿಸುವ ಹೋರಾಟದ ಭಾಗವಾಗಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಜಿಲ್ಲಾ ಸಮಿತಿಯ ವತಿಯಿಂದ ಶನಿವಾರ ನಗರದಲ್ಲಿ ವಿದ್ಯಾರ್ಥಿಗಳನ್ನು ಒಗ್ಗೂಡಿಸಿ ರಾಜ್ಯ ಸರ್ಕಾರದ ಶಿಕ್ಷಣ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಸಮಿತಿ ಅಧ್ಯಕ್ಷೆ ಸುಜಾತಾ ವೈ., ಜಿಲ್ಲಾ ಉಪಾಧ್ಯಕ್ಷ ಪ್ರದೀಪ್ ಮಾಯಗಡಿ, ಮಂಜುನಾಥ್ ಸೇರಿದಂತೆ ಹಲವಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಗ್ರಾಮೀಣ ಪ್ರದೇಶದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ನೆಪದಲ್ಲಿ ರಾಜ್ಯದ 2,000 ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸುವ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಸರ್ಕಾರದ ಯೋಜನೆಯನ್ನು ಎಸ್‌ಎಫ್‌ಐ ತೀವ್ರವಾಗಿ ವಿರೋಧಿಸಿದೆ. ಈ ಯೋಜನೆಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮುಖ್ಯಮಂತ್ರಿಗಳ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮದಡಿ 2,000 ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸಲು ಹಾಗೂ ಮೊದಲ ಹಂತದಲ್ಲಿ 1,000 ಶಾಲೆಗಳನ್ನು ಯೋಜನೆಗೆ ಒಳಪಡಿಸಲು ಸರ್ಕಾರ ಉದ್ದೇಶಿಸಿದೆ. ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿದರೆ ಸರ್ಕಾರಿ ಶಾಲೆಗಳ ಹೆಸರಿನೊಂದಿಗೆ ಖಾಸಗಿ ಶಾಲೆಗಳ ಹೆಸರನ್ನೂ ಸೇರಿಸಲು ಅವಕಾಶ ನೀಡಲಾಗುವುದು ಎಂದು ತಿಳಿಸಲಾಗಿದೆ. ಇದು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಖಾಸಗಿಯವರ ಕೈಗೆ ಒಪ್ಪಿಸುವ ಅಪಾಯಕಾರಿ ಕ್ರಮವಾಗಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳು ಸೇರಿದಂತೆ ಸುಮಾರು 47,493 ಶಿಕ್ಷಣ ಸಂಸ್ಥೆಗಳಿವೆ. ಇವುಗಳಲ್ಲಿ 19,603 ಪ್ರಾಥಮಿಕ ಶಾಲೆಗಳು, 21,676 ಹಿರಿಯ ಪ್ರಾಥಮಿಕ ಶಾಲೆಗಳು, 4,895 ಪ್ರೌಢಶಾಲೆಗಳು ಹಾಗೂ 1,319 ಪದವಿಪೂರ್ವ ಕಾಲೇಜುಗಳಿವೆ. ಇದರ ಜೊತೆಗೆ 309 ಕರ್ನಾಟಕ ಪಬ್ಲಿಕ್ ಶಾಲೆಗಳು ಎಲ್‌ಕೆಜಿಯಿಂದ 12ನೇ ತರಗತಿಯವರೆಗೆ ಶಿಕ್ಷಣ ನೀಡುತ್ತಿವೆ.

2015-16ನೇ ಸಾಲಿನಲ್ಲಿ ಸರ್ಕಾರಿ ಶಾಲೆಗಳಲ್ಲಿ 47.1 ಲಕ್ಷ ವಿದ್ಯಾರ್ಥಿಗಳಿದ್ದರೆ, 2025-26ನೇ ಸಾಲಿನಲ್ಲಿ ಈ ಸಂಖ್ಯೆ 38.2 ಲಕ್ಷಕ್ಕೆ ಇಳಿಕೆಯಾಗಿದೆ. ಅಂದರೆ ಸುಮಾರು ಶೇ.19ರಷ್ಟು ವಿದ್ಯಾರ್ಥಿಗಳ ದಾಖಲಾತಿ ಕುಸಿದಿದೆ. ಒಟ್ಟು ದಾಖಲಾತಿಯಲ್ಲಿ ಸರ್ಕಾರಿ ಶಾಲೆಗಳ ಪಾಲು ಶೇ.46ರಿಂದ ಶೇ.38ಕ್ಕೆ ಇಳಿದಿದೆ. ಮತ್ತೊಂದೆಡೆ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ 36.3 ಲಕ್ಷದಿಂದ 47 ಲಕ್ಷಕ್ಕೆ ಏರಿಕೆಯಾಗಿದೆ.

2025-26ನೇ ಸಾಲಿನಲ್ಲಿ 50 ಅಥವಾ ಅದಕ್ಕಿಂತ ಕಡಿಮೆ ವಿದ್ಯಾರ್ಥಿಗಳ ದಾಖಲಾತಿ ಹೊಂದಿರುವ ಸರ್ಕಾರಿ ಶಾಲೆಗಳ ಸಂಖ್ಯೆ 25,683ಕ್ಕೆ ತಲುಪಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಕರ್ನಾಟಕ ಜ್ಞಾನ ಆಯೋಗದ ಶಿಫಾರಸಿನಲ್ಲಿಯೂ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿಯಲು ಶಿಕ್ಷಣದ ಗುಣಮಟ್ಟದ ಕೊರತೆಯೇ ಪ್ರಮುಖ ಕಾರಣವೆಂದು ಉಲ್ಲೇಖಿಸಲಾಗಿದೆ. ಆದರೆ, ದಾಖಲಾತಿ ಕಡಿಮೆಯಾಗಲು ನೈಜ ಕಾರಣಗಳನ್ನು ಅಧ್ಯಯನ ಮಾಡಿ ಪರಿಹಾರ ಕಂಡುಕೊಳ್ಳುವ ಬದಲು ಸರ್ಕಾರ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಲು ಮುಂದಾಗಿದೆ ಎಂದು ಆರೋಪಿಸಿದರು.

ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸದೆ, ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡದೆ, ಸಮಯಕ್ಕೆ ಸರಿಯಾಗಿ ಪಠ್ಯಪುಸ್ತಕಗಳನ್ನು ವಿತರಿಸದೆ ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸದೆ ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ಸೈಕಲ್ ಯೋಜನೆಯಂತಹ ವಿದ್ಯಾರ್ಥಿಪರ ಕಾರ್ಯಕ್ರಮಗಳನ್ನೂ ಸಮರ್ಪಕವಾಗಿ ಮುಂದುವರಿಸಿಲ್ಲ. 2026-27ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಶೂಗಳನ್ನು ವಿತರಿಸಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಮತ್ತೊಂದು ಉದಾಹರಣೆಯಾಗಿದೆ. ಇಂತಹ ವೈಫಲ್ಯಗಳಿಂದಲೇ ಸರ್ಕಾರಿ ಶಾಲೆಗಳ ದಾಖಲಾತಿ ಕುಸಿಯುತ್ತಿದೆ ಎಂದು ದೂರಿದರು.

ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ 79,694 ಹುದ್ದೆಗಳು ಖಾಲಿ ಇವೆ. ಶಿಕ್ಷಣ ಸಚಿವರು 43,553 ಅತಿಥಿ ಶಿಕ್ಷಕರನ್ನು ನೇಮಕ ಮಾಡಿರುವುದಾಗಿ ತಿಳಿಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದೊಳಗೆ 18,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸರ್ಕಾರ ಭರವಸೆ ನೀಡಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಇಂತಹ ಭರವಸೆಗಳನ್ನು ನೀಡುತ್ತಿದೆಯೇ ಹೊರತು ಖಾಲಿ ಹುದ್ದೆಗಳನ್ನು ಸಮರ್ಪಕವಾಗಿ ಭರ್ತಿ ಮಾಡುತ್ತಿಲ್ಲ. ಶಿಕ್ಷಕರ ಕೊರತೆಯಿಂದ ಸರ್ಕಾರಿ ಶಾಲೆಗಳ ಶಿಕ್ಷಣದ ಗುಣಮಟ್ಟದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ ಎಂದು ಎಚ್ಚರಿಸಿದರು.

ಇನ್ನು ಕರ್ನಾಟಕ ಪಬ್ಲಿಕ್ ಶಾಲೆಗಳ ಹೆಸರಿನಲ್ಲಿ ಒಂದೇ ಸೂರಿನಡಿ ಎಲ್‌ಕೆಜಿಯಿಂದ ಪದವಿಪೂರ್ವ ಶಿಕ್ಷಣದವರೆಗೆ ಗುಣಮಟ್ಟದ ಶಿಕ್ಷಣ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಇದಕ್ಕಾಗಿ ಏಷ್ಯನ್ ಅಭಿವೃದ್ಧಿ ಬ್ಯಾಂಕ್‌ನಿಂದ 2,500 ಕೋಟಿ ರೂಪಾಯಿ ಸಾಲ ಪಡೆಯುವುದಾಗಿ ಹಾಗೂ ಸಿಎಸ್‌ಆರ್ ನಿಧಿಯ ಮೂಲಕ 500 ಹೊಸ ಪಬ್ಲಿಕ್ ಶಾಲೆಗಳನ್ನು ಆರಂಭಿಸುವುದಾಗಿ ತಿಳಿಸಿತ್ತು. ಕಲ್ಯಾಣ ಕರ್ನಾಟಕದಲ್ಲಿ 200 ಶಾಲೆಗಳನ್ನು ಸ್ಥಾಪಿಸುವುದಾಗಿಯೂ ಘೋಷಿಸಿತ್ತು.

ಆದರೆ, ಹೊಸ ಶಾಲೆಗಳನ್ನು ಆರಂಭಿಸುವ ಬದಲು ಈಗಾಗಲೇ ಅಸ್ತಿತ್ವದಲ್ಲಿರುವ ಸರ್ಕಾರಿ ಶಾಲೆಗಳನ್ನು ಪಂಚಾಯಿತಿಗೊಂದು ಶಾಲೆಯನ್ನಾಗಿ ಉನ್ನತೀಕರಿಸುವ ಹೆಸರಿನಲ್ಲಿ ವಿಲೀನಗೊಳಿಸಲು ಸರ್ಕಾರ ಮುಂದಾಗಿದೆ. ಇದು ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳನ್ನು ಮುಚ್ಚುವ ಹಾಗೂ ಶಿಕ್ಷಣ ಕ್ಷೇತ್ರವನ್ನು ಖಾಸಗಿಯವರಿಗೆ ಹಸ್ತಾಂತರಿಸುವ ವ್ಯವಸ್ಥಿತ ಪ್ರಯತ್ನವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಆದ್ದರಿಂದ ರಾಜ್ಯ ಸರ್ಕಾರವು 2,000 ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸುವ ಯೋಜನೆ ಹಾಗೂ ಕೆಪಿಎಸ್ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಪ್ರಕ್ರಿಯೆಯನ್ನು ತಕ್ಷಣ ಕೈಬಿಡಬೇಕು. ಸರ್ಕಾರಿ ಶಾಲೆಗಳನ್ನು ಮುಚ್ಚುವ ಬದಲು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು, ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು, ಗುಣಮಟ್ಟದ ಶಿಕ್ಷಣವನ್ನು ಖಾತರಿಪಡಿಸಬೇಕು ಹಾಗೂ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಎಸ್‌ಎಫ್‌ಐ ಮುಖಂಡರು ಆಗ್ರಹಿಸಿದರು.

Related Articles

Leave a Reply

Your email address will not be published. Required fields are marked *

Back to top button