ಅಫಜಲಪುರ ಕ್ಷೇತ್ರದಲ್ಲಿ ಕೆಆರ್ಐಡಿಎಲ್ ಕಾಮಗಾರಿಗಳಲ್ಲಿ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ಶಿವಕುಮಾರ ನಾಟೀಕಾರ್ ಆಗ್ರಹ

ಕಲಬುರಗಿ, ನ.16: ಜಿಲ್ಲೆಯ ಅಫಜಲಪುರ ವಿಧಾನಸಭಾ ಕ್ಷೇತ್ರದಲ್ಲಿ 2023ರಿಂದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (ಕೆಆರ್ಐಡಿಎಲ್) ಮೂಲಕ ಕೈಗೆತ್ತಿಕೊಳ್ಳಲಾಗಿರುವ ₹100 ಕೋಟಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಅಕ್ರಮಗಳು ನಡೆದಿರುವ ಆರೋಪ ಕೇಳಿಬಂದಿದೆ. ಈ ಕುರಿತು ಉನ್ನತ ಮಟ್ಟದ ಸಮಗ್ರ ತನಿಖೆ ನಡೆಸಿ, ಆರೋಪಗಳ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಬೇಕು ಎಂದು ರಾಷ್ಟ್ರೀಯ ಜನತಾದಳದ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷ ಶಿವಕುಮಾರ ನಾಟೀಕಾರ್ ಆಗ್ರಹಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಫಜಲಪುರ ಕ್ಷೇತ್ರದಲ್ಲಿ 2023ರಿಂದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ವಿವಿಧ ಸರ್ಕಾರಿ ಅನುದಾನಗಳ ಅಡಿಯಲ್ಲಿ ಶಾಲಾ-ಕಾಲೇಜು ಕಟ್ಟಡಗಳ ನಿರ್ಮಾಣ ಮತ್ತು ದುರಸ್ತಿ, ಕುಡಿಯುವ ನೀರು, ಶೌಚಾಲಯ, ಗ್ರಾಮ ಪಂಚಾಯಿತಿ, ಗ್ರಂಥಾಲಯ ಹಾಗೂ ಆಸ್ಪತ್ರೆಗಳ ಅಭಿವೃದ್ಧಿ ಸೇರಿದಂತೆ ಹಲವು ಕಾಮಗಾರಿಗಳನ್ನು ಕೆಆರ್ಐಡಿಎಲ್ ಸಂಸ್ಥೆಗೆ ವಹಿಸಲಾಗಿದೆ. ಆದರೆ, ಈ ಕಾಮಗಾರಿಗಳಲ್ಲಿ ಅನುಮೋದಿತ ಅಂದಾಜು ಪಟ್ಟಿ ಮತ್ತು ತಾಂತ್ರಿಕ ಮಾನದಂಡಗಳನ್ನು ಪಾಲಿಸದೆ ಕಳಪೆ ಗುಣಮಟ್ಟದ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದೆ, ಸ್ಥಳ ಪರಿಶೀಲನೆ ಹಾಗೂ ಅಧಿಕಾರಿಗಳ ಮೇಲ್ವಿಚಾರಣೆ ಇಲ್ಲದ ಕಾರಣ ಸರ್ಕಾರಿ ಅನುದಾನದ ದುರುಪಯೋಗವಾಗುತ್ತಿದೆ ಎಂದು ದೂರಿದರು.
ಅಂದಾಜು ಪಟ್ಟಿ ಮತ್ತು ತಾಂತ್ರಿಕ ಮಾನದಂಡಗಳನ್ನು ಉಲ್ಲಂಘಿಸಿ ಕಳಪೆ ಕಾಮಗಾರಿ ನಡೆಸಲಾಗಿದೆ. ಕಾಮಗಾರಿಗಳು ಸಮರ್ಪಕವಾಗಿ ಆರಂಭವಾಗುವ ಮೊದಲೇ ಬಿಡುಗಡೆಯಾಗುವ ಶೇ.40ರಷ್ಟು ಅನುದಾನ ದುರುಪಯೋಗವಾಗುತ್ತಿದೆ ಎಂಬ ಗಂಭೀರ ಆರೋಪವನ್ನೂ ಅವರು ಮಾಡಿದರು. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೆ ಅಂದಾಜು ಪಟ್ಟಿಗಳನ್ನು ಸಿದ್ಧಪಡಿಸುತ್ತಿದ್ದು, ಕಾಮಗಾರಿಗಳ ಮೇಲ್ವಿಚಾರಣೆಯಲ್ಲಿಯೂ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದರು.
ಶಾಸಕರ ಕಾರ್ಯಕರ್ತರು ನಿಯಮಬಾಹಿರವಾಗಿ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಶಾಸಕರು ಹಾಗೂ ಅಧಿಕಾರಿಗಳಿಗೆ ಬೇಕಾದ ಅರ್ಹತೆ ಇಲ್ಲದ ಗುಂಪು ನಾಯಕರನ್ನು (ಗುತ್ತಿಗೆದಾರರನ್ನು) ಬಳಸಿಕೊಂಡು ಸಾಮಗ್ರಿ ಮತ್ತು ಕಾರ್ಮಿಕರ ಪೂರೈಕೆ ಮಾಡಲಾಗುತ್ತಿದೆ. ಈ ಸಂಬಂಧ ಅವರ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮಾಡಲಾಗಿದೆ ಎಂಬ ಆರೋಪಗಳನ್ನೂ ನಾಟೀಕಾರ್ ಪ್ರಸ್ತಾಪಿಸಿದರು.
ಕಾಮಗಾರಿಗಳ ಛಾಯಾಚಿತ್ರಗಳು, ತೃತೀಯ ವ್ಯಕ್ತಿಗಳ ಪರಿಶೀಲನಾ ವರದಿಗಳು ಹಾಗೂ ಸಾಮಗ್ರಿಗಳ ಗುಣಮಟ್ಟ ಪರೀಕ್ಷಾ ವರದಿಗಳಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂದು ಆರೋಪಿಸಿದರು. ಅನುದಾನ ಬಳಕೆಯ ನಿಯಮಗಳನ್ನು ಉಲ್ಲಂಘಿಸಿ ಹಣವನ್ನು ಮರುಬಳಕೆ ಮಾಡಿಕೊಳ್ಳಲಾಗಿದೆ. ಉದ್ದೇಶಪೂರ್ವಕವಾಗಿ ಕಾಮಗಾರಿಗಳನ್ನು ವಿಳಂಬಗೊಳಿಸಿ ಅನುದಾನದ ದುರುಪಯೋಗಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಒಂದು ಕಾಮಗಾರಿಗೆ ಮಂಜೂರಾದ ಅನುದಾನವನ್ನು ಬೇರೆ ಕಾಮಗಾರಿಗಳಿಗೆ ಬಳಸಲಾಗುತ್ತಿದೆ ಎಂಬ ದೂರನ್ನೂ ಅವರು ಮಾಡಿದರು.
ಈ ಎಲ್ಲ ಆರೋಪಗಳ ಹಿಂದೆ ಶಾಸಕರು, ಅವರ ಬೆಂಬಲಿಗರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಶಾಮೀಲಾತಿ ಇರುವ ಶಂಕೆಯಿದೆ ಎಂದು ನಾಟೀಕಾರ್ ಹೇಳಿದರು. 2023ರಿಂದ ಅಫಜಲಪುರ ಕ್ಷೇತ್ರದಲ್ಲಿ ಕೈಗೆತ್ತಿಕೊಳ್ಳಲಾದ ₹100 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗಳ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಯಾರೇ ಆಗಿದ್ದರೂ ರಾಜಕೀಯ ಪ್ರಭಾವಕ್ಕೆ ಮಣಿಯದೆ ಕಾನೂನು ಕ್ರಮ ಕೈಗೊಳ್ಳಬೇಕು. ಸರ್ಕಾರಿ ಹಣ ದುರುಪಯೋಗವಾಗಿರುವುದು ಸಾಬೀತಾದರೆ ಅದನ್ನು ಸಂಬಂಧಪಟ್ಟವರಿಂದ ವಸೂಲಿ ಮಾಡಬೇಕು. ಅಫಜಲಪುರ ಕ್ಷೇತ್ರದ ಅಭಿವೃದ್ಧಿಗೆ ಮೀಸಲಾದ ಸಾರ್ವಜನಿಕ ಹಣ ಸಂಪೂರ್ಣವಾಗಿ ಸದ್ಬಳಕೆಯಾಗಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಲ್ಲಿಕಾರ್ಜುನ ಸಿಂಗ್, ಶಂಕರಗೌಡ ಪಾಟೀಲ, ಮರೆಪ್ಪ ಜಮಾದಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.



