ರಾಜಕೀಯ

ದಂಡೋತಿ ವಸತಿ ಶಾಲೆ ಘಟನೆ: ಸಚಿವ ಪ್ರಿಯಾಂಕ್ ಖರ್ಗೆ ನಿರ್ಲಕ್ಷ್ಯ ಧೋರಣೆ ತೋರಿದ್ದಾರೆ ಎಂದು ಬಿಜೆಪಿ ವಕ್ತಾರೆ ಡಾ. ಸುಧಾ ಹಾಳ್ಕೈ ಆರೋಪ

ವಿದ್ಯಾರ್ಥಿಗಳ ಆರೋಗ್ಯದ ವಿಷಯದಲ್ಲಿ ರಾಜಕೀಯವಲ್ಲ, ಹೊಣೆಗಾರಿಕೆ ಅಗತ್ಯ; ಘಟನೆ ಕುರಿತು ಸಮಗ್ರ ತನಿಖೆಗೆ ಆಗ್ರಹ

ಚಿತ್ತಾಪುರ ತಾಲ್ಲೂಕಿನ ದಂಡೋತಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಅತ್ಯಂತ ಆತಂಕಕಾರಿ ಎಂದು ಬಿಜೆಪಿ ರಾಜ್ಯ ವಕ್ತಾರೆ ಡಾ. ಸುಧಾ ಆರ್. ಹಾಳ್ಕೈ ತಿಳಿಸಿದ್ದಾರೆ.

ಈ ಕುರಿತು ಪ್ರಕಟಿಸಿರುವ ಹೇಳಿಕೆಯಲ್ಲಿ, ಕೆಲವೇ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ ಅಥವಾ ಅನ್ನ ಸರಿಯಾಗಿ ಬೇಯಿರಲಿಲ್ಲ ಎಂಬ ಹೇಳಿಕೆ ನೀಡುವ ಬದಲು, ವಿದ್ಯಾರ್ಥಿಗಳು ಅಸ್ವಸ್ಥರಾಗಲು ನಿಖರ ಕಾರಣವೇನು ಎಂಬುದನ್ನು ಸರ್ಕಾರ ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆ ಯಾವುದೇ ಸರ್ಕಾರದ ಮೊದಲ ಆದ್ಯತೆಯಾಗಿರಬೇಕು. ಈ ಘಟನೆ ಕೇವಲ ಒಂದು ಪ್ರಕರಣವಲ್ಲ, ಜಿಲ್ಲೆಯ ಆಡಳಿತ ವ್ಯವಸ್ಥೆಯ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿರುವ ಬೆಳವಣಿಗೆಯಾಗಿದೆ ಎಂದು ಅವರು ಟೀಕಿಸಿದ್ದಾರೆ.

ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರು, ಸರ್ಕಾರಿ ವಸತಿ ನಿಲಯಗಳ ಆಹಾರದ ಗುಣಮಟ್ಟ, ಶಾಲಾ ಕಟ್ಟಡಗಳ ನಿರ್ವಹಣೆ ಹಾಗೂ ಸಾರ್ವಜನಿಕ ಸೇವೆಗಳ ಬಗ್ಗೆ ಈಗಾಗಲೇ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಇಂತಹ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳು ಸರ್ಕಾರಿ ವಸತಿ ನಿಲಯಗಳಲ್ಲಿ ಊಟ ಮಾಡುವುದಕ್ಕೂ ಪೋಷಕರು ಮಕ್ಕಳನ್ನು ಅಲ್ಲಿಗೆ ಕಳುಹಿಸುವುದಕ್ಕೂ ಆತಂಕ ಪಡುವಂತಹ ವಾತಾವರಣ ನಿರ್ಮಾಣವಾಗಬಾರದು. ಈ ರೀತಿಯ ಘಟನೆಗಳು ಸಾರ್ವಜನಿಕರ ವಿಶ್ವಾಸಕ್ಕೂ ಧಕ್ಕೆ ತರುತ್ತಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚೆಗೆ ಮುಖ್ಯಮಂತ್ರಿಗಳು ಕಲಬುರಗಿ ಜಿಲ್ಲೆಗೆ ಭೇಟಿ ನೀಡಿದ್ದರೂ, ಜಿಲ್ಲೆಯ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಸ್ಪಷ್ಟ ಕ್ರಮಗಳು ಕಾಣುತ್ತಿಲ್ಲ ಎಂದು ಆರೋಪಿಸಿದ ಅವರು, ಶಿಕ್ಷಣ, ಆರೋಗ್ಯ, ಪೌಷ್ಟಿಕತೆ, ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೇವೆಗಳ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ಜನರು ರಾಜಕೀಯ ವಾಗ್ವಾದಗಳಿಗಿಂತ ಸುರಕ್ಷಿತ ವಿದ್ಯಾರ್ಥಿ ನಿಲಯಗಳು, ಉತ್ತಮ ಶಿಕ್ಷಣ, ಶುದ್ಧ ಕುಡಿಯುವ ನೀರು, ಗುಣಮಟ್ಟದ ರಸ್ತೆ ಹಾಗೂ ಜನಪರ ಆಡಳಿತವನ್ನು ನಿರೀಕ್ಷಿಸುತ್ತಿದ್ದಾರೆ ಎಂದು ಡಾ. ಸುಧಾ ಹಾಳ್ಕೈ ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button