ಸುಳ್ಳು ಆದಾಯ ಪ್ರಮಾಣಪತ್ರ ಆರೋಪ: ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು
ಪುತ್ರಿಯ ನೇಮಕಾತಿ ಪ್ರಕ್ರಿಯೆಯಲ್ಲಿ ಅಧಿಕಾರ ದುರುಪಯೋಗ ಆರೋಪ; ರಾಜ್ಯಪಾಲರಿಂದ ಅಮಾನತು ಆದೇಶ, ತನಿಖೆಗೆ ರಾಷ್ಟ್ರಪತಿಗಳಿಗೆ ಶಿಫಾರಸು

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅವರ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳ ಕುರಿತು ತನಿಖೆ ನಡೆಸುವಂತೆ ಶಿಫಾರಸು ಮಾಡಲಾಗಿದ್ದು, ಈ ಸಂಬಂಧ ಸುಪ್ರೀಂ ಕೋರ್ಟ್ಗೆ ಉಲ್ಲೇಖಿಸಲು ರಾಷ್ಟ್ರಪತಿಗಳಿಗೆ ರಾಜ್ಯಪಾಲರು ಶಿಫಾರಸು ಸಲ್ಲಿಸಿದ್ದಾರೆ.
ಮುಂದಿನ ಆದೇಶದವರೆಗೆ ಕೆಪಿಎಸ್ಸಿಯ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಪ್ರಕರಣದ ಹಿನ್ನೆಲೆ
ಶಿವಶಂಕರಪ್ಪ ಸಾಹುಕಾರ್ ಅವರು ತಮ್ಮ ಪುತ್ರಿಗೆ ಸರ್ಕಾರಿ ಉದ್ಯೋಗ ದೊರಕಿಸುವ ಉದ್ದೇಶದಿಂದ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ 50 ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿಗೆ 2024ರ ಮಾರ್ಚ್ 15ರಂದು ಅಧಿಸೂಚನೆ ಪ್ರಕಟಿಸಲಾಗಿತ್ತು.
ಈ ನೇಮಕಾತಿಯಲ್ಲಿ ಸಾಹುಕಾರ್ ಅವರ ಪುತ್ರಿ ಸುಮಾ ಎಸ್. ಸಾಹುಕಾರ್ ಅವರು 3ಬಿ ಮೀಸಲಾತಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಹತಾ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದ ಅವರು ದಾಖಲೆಗಳ ಪರಿಶೀಲನೆಗೆ ಹಾಜರಾಗಿದ್ದ ವೇಳೆ ಸಲ್ಲಿಸಿದ್ದ ಜಾತಿ ಮತ್ತು ಆದಾಯ ಪ್ರಮಾಣಪತ್ರದಲ್ಲಿ ಕುಟುಂಬದ ವಾರ್ಷಿಕ ಆದಾಯವನ್ನು ₹40 ಸಾವಿರ ಎಂದು ನಮೂದಿಸಲಾಗಿತ್ತು.
ಆದರೆ ಶಿವಶಂಕರಪ್ಪ ಸಾಹುಕಾರ್ ಅವರು 2019ರಿಂದಲೇ ಕೆಪಿಎಸ್ಸಿ ಸದಸ್ಯರಾಗಿ ವೇತನ ಪಡೆಯುತ್ತಿದ್ದ ಹಿನ್ನೆಲೆಯಲ್ಲಿ, ಕುಟುಂಬದ ವಾರ್ಷಿಕ ಆದಾಯ ಕೇವಲ ₹40 ಸಾವಿರ ಎಂದು ತೋರಿಸಿರುವುದು ವಾಸ್ತವಕ್ಕೆ ವಿರುದ್ಧವಾಗಿದೆ ಎಂಬ ಆರೋಪ ಎದ್ದಿದೆ. ಈ ಹಿನ್ನೆಲೆಯಲ್ಲಿ ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಕೆ ಮತ್ತು ಅಧಿಕಾರ ದುರುಪಯೋಗದ ಬಗ್ಗೆ ಗಂಭೀರ ಪ್ರಶ್ನೆಗಳು ಉದ್ಭವಿಸಿವೆ.
ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯಪಾಲರು ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿದ್ದು, ಪ್ರಕರಣದ ಸತ್ಯಾಸತ್ಯತೆ ಕುರಿತು ಸಮಗ್ರ ತನಿಖೆ ನಡೆಸಲು ಮುಂದಿನ ಕಾನೂನು ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ.



