ರಾಜ್ಯ

ಬರ ಪರಿಹಾರಕ್ಕೆ ಆಗ್ರಹಿಸಿ ಆಗಸ್ಟ್‌ 17ರಂದು ಕಲಬುರಗಿ ಜಿಲ್ಲೆ ಬಂದ್‌ಗೆ ಕರೆ

ರೈತರ ಸಾಲ ಮನ್ನಾ, ಬರ ಪರಿಹಾರ ಕಾಮಗಾರಿಗಳ ಆರಂಭ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ರೈತ ಸಂಘದ ಹೋರಾಟ

ರೈತರ ಸಾಲ ಮನ್ನಾ ಮಾಡಬೇಕು, ಬರ ಪರಿಹಾರ ಕಾಮಗಾರಿಗಳನ್ನು ಕೂಡಲೇ ಆರಂಭಿಸಬೇಕು ಹಾಗೂ ರೈತರಿಗೆ ತುರ್ತು ನೆರವು ನೀಡಬೇಕು ಎಂದು ಆಗ್ರಹಿಸಿ ಆಗಸ್ಟ್‌ 17ರಂದು ಕಲಬುರಗಿ ಜಿಲ್ಲೆ ಬಂದ್‌ಗೆ ಕರೆ ನೀಡಲಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ತಿಳಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ಮರುಬಿತ್ತನೆಗೆ ಬೀಜ ಮತ್ತು ರಸಗೊಬ್ಬರವನ್ನು ಉಚಿತವಾಗಿ ನೀಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ಕೃಷಿ ಸಾಲಗಳ ಮರುಪಾವತಿಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿ ಬರ ಪರಿಸ್ಥಿತಿ ಕುರಿತು ಸಭೆ ನಡೆಸಿದರೂ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ಸಿಕ್ಕಿಲ್ಲ ಎಂದು ಅವರು ಆರೋಪಿಸಿದರು. ಜಿಲ್ಲೆಯ ಅನೇಕ ಭಾಗಗಳಲ್ಲಿ ಮಳೆಯ ಕೊರತೆಯಿಂದ ಬಿತ್ತನೆ ಕುಂಠಿತಗೊಂಡಿದ್ದು, ರೈತರು ಸಾಲ ಮಾಡಿ ಬೀಜ ಮತ್ತು ರಸಗೊಬ್ಬರ ಖರೀದಿಸಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸೋಯಾಬೀನ್‌, ಹತ್ತಿ, ತೊಗರಿ ಸೇರಿದಂತೆ ಹಲವು ಬೆಳೆಗಳು ಹಾನಿಗೊಳಗಾಗಿದ್ದು, ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಸಮಸ್ಯೆಯೂ ತೀವ್ರವಾಗಿದೆ ಎಂದು ಹೇಳಿದರು.

ಉಜನಿ ಜಲಾಶಯದಿಂದ ಭೀಮಾ ನದಿಗೆ 15 ಟಿಎಂಸಿ ನೀರು ಬಿಡುಗಡೆ ಮಾಡಬೇಕು. ಪ್ರತಿ ಎಕರೆಗೆ ₹30 ಸಾವಿರ ಪರಿಹಾರ ಘೋಷಿಸಬೇಕು. ಬೆಳೆ ವಿಮೆ ಮೊತ್ತವನ್ನು ತ್ವರಿತವಾಗಿ ರೈತರ ಖಾತೆಗೆ ಜಮಾ ಮಾಡಬೇಕು. ಗೋಶಾಲೆಗಳನ್ನು ಆರಂಭಿಸಿ ಜಾನುವಾರುಗಳಿಗೆ ಮೇವು ಒದಗಿಸಬೇಕು. ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲರ ಮಾಸಾಶನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಬರ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಜುಲೈ 21ರಿಂದ ಆಗಸ್ಟ್‌ 14ರವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರತಿಭಟನೆಗಳು, ರಸ್ತೆ ತಡೆ ಹಾಗೂ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಲಾಗುವುದು. ಇದರ ಸಮಾರೋಪವಾಗಿ ಆಗಸ್ಟ್‌ 17ರಂದು ಕಲಬುರಗಿ ಜಿಲ್ಲೆ ಬಂದ್ ನಡೆಸಲಾಗುವುದು ಎಂದು ಶರಣಬಸಪ್ಪ ಮಮಶೆಟ್ಟಿ ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button