ಪೌರಕಾರ್ಮಿಕರ ಸುರಕ್ಷತೆಗೆ ಕಠಿಣ ಕ್ರಮ: ಗ್ಲೌಸ್ ಸೇರಿ ಸುರಕ್ಷತಾ ಪರಿಕರ ಕಡ್ಡಾಯ ಎಂದ ಜಿಲ್ಲಾಧಿಕಾರಿ
ಸುರಕ್ಷತಾ ಪರಿಕರ ಧರಿಸದ ಕಾರ್ಮಿಕರನ್ನು ಕೆಲಸದಿಂದ ತೆರವುಗೊಳಿಸಲು ಸೂಚನೆ • ತ್ರೈಮಾಸಿಕ ಆರೋಗ್ಯ ತಪಾಸಣೆ ಕಡ್ಡಾಯ • ಬಾಕಿ ಯೋಜನೆಗಳ ವಿಳಂಬಕ್ಕೆ ಅಧಿಕಾರಿಗಳಿಗೆ ಎಚ್ಚರಿಕೆ

ಪೌರಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಪಾಡುವ ಉದ್ದೇಶದಿಂದ ಕೆಲಸದ ಅವಧಿಯಲ್ಲಿ ಗ್ಲೌಸ್ ಸೇರಿದಂತೆ ಎಲ್ಲಾ ಸುರಕ್ಷತಾ ಪರಿಕರಗಳನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ಇಕ್ರಮುಲ್ಲಾ ಶರೀಫ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಎರಡನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆಲವು ಪೌರಕಾರ್ಮಿಕರು ಗ್ಲೌಸ್ ಧರಿಸಿದರೆ ಕೈ ಬೆವರುತ್ತದೆ ಎಂಬ ಕಾರಣ ನೀಡಿ ನೇರವಾಗಿ ಕೈಯಿಂದಲೇ ಕಸ ವಿಲೇವಾರಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಸುರಕ್ಷತಾ ಪರಿಕರಗಳ ಬಳಕೆ ಕರ್ತವ್ಯದ ಅವಿಭಾಜ್ಯ ಅಂಗವಾಗಿದ್ದು, ಇದರಲ್ಲಿ ಯಾವುದೇ ವಿನಾಯಿತಿ ನೀಡಬಾರದು ಎಂದು ಸ್ಪಷ್ಟಪಡಿಸಿದರು. ಸುರಕ್ಷತಾ ಪರಿಕರಗಳನ್ನು ಧರಿಸದ ಕಾರ್ಮಿಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ವಾರ್ಡ್ ಮಟ್ಟದಲ್ಲಿ ಪೌರಕಾರ್ಮಿಕರ ಸಭೆ ನಡೆಸಿ ಸುರಕ್ಷತಾ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವುದರೊಂದಿಗೆ ಅವುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕ್ರಮವಹಿಸಬೇಕು ಎಂದರು. ಪೌರಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಹಾಗೂ ವರ್ಷಕ್ಕೊಮ್ಮೆ ಮಾಸ್ಟರ್ ಹೆಲ್ತ್ ಚೆಕ್-ಅಪ್ ನಡೆಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲೆಯಲ್ಲಿ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ನಿರ್ಮೂಲನೆ ಮತ್ತು ಕಾರ್ಮಿಕರ ಸುರಕ್ಷತೆ ಕುರಿತು ಸುದೀರ್ಘ ಚರ್ಚೆ ನಡೆಯಿತು. ಯುಜಿಡಿ ವ್ಯವಸ್ಥೆ ಇಲ್ಲದ ಪಟ್ಟಣ ಪಂಚಾಯಿತಿಗಳಿಗೂ ಸಣ್ಣ ಸಕ್ಕಿಂಗ್ ಹಾಗೂ ಜೆಟ್ಟಿಂಗ್ ಯಂತ್ರಗಳನ್ನು ಒದಗಿಸಿ ಮಾನವ ಚಾಲಿತ ಮಲಸಂಸ್ಕಾರ ಪದ್ಧತಿಯನ್ನು ಸಂಪೂರ್ಣವಾಗಿ ತಡೆಯುವ ಕುರಿತು ಚರ್ಚಿಸಲಾಯಿತು.
ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗ ಯೋಜನೆಗಳ ಪ್ರಗತಿ ಪರಿಶೀಲನೆ ವೇಳೆ 2022-23ನೇ ಸಾಲಿನ ಯೋಜನೆಗಳು ಹಲವು ವರ್ಷಗಳಿಂದ ಬಾಕಿ ಉಳಿದಿರುವುದಕ್ಕೆ ಜಿಲ್ಲಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಂಡಿರುವಾಗ ಕಲಬುರಗಿಯಲ್ಲಿ ಮಾತ್ರ ವಿಳಂಬವಾಗುತ್ತಿರುವುದೇಕೆ ಎಂದು ಪ್ರಶ್ನಿಸಿದ ಅವರು, ಕೆಲಸದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಸರ್ಕಾರದ ಆದೇಶದಂತೆ ಪೌರಕಾರ್ಮಿಕರು, ತೋಟಗಾರರು, ಲೋಡರ್ಸ್, ಕ್ಲೀನರ್ಸ್ ಹಾಗೂ ವಾಟರ್ ಸಪ್ಲೈ ಹೆಲ್ಪರ್ಸ್ ಸೇರಿದಂತೆ ವಿವಿಧ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಶೀಘ್ರವೇ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮಂಜೂರಾಗಿರುವ 215 ಮನೆಗಳ ಪೈಕಿ 121 ಮನೆಗಳ ಕಾಮಗಾರಿ ಪ್ರಗತಿಯಲ್ಲಿದ್ದು, ಉಳಿದ ಮನೆಗಳಿಗೆ ಜಾಗದ ಕೊರತೆ ಇರುವುದರಿಂದ ತಕ್ಷಣ ಸೂಕ್ತ ಸರ್ಕಾರಿ ಜಾಗ ಗುರುತಿಸಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಮುಂದಿನ ತ್ರೈಮಾಸಿಕ ಸಭೆಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಿ ಯೋಜನೆಗಳ ವೆಚ್ಚ ಹಾಗೂ ಪ್ರಗತಿ ವರದಿ ಸಲ್ಲಿಸುವಂತೆ ಸೂಚಿಸಿದರು.
ಸಭೆಯಲ್ಲಿ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಶಾಲೂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಎಸ್. ಸಂಕನೂರು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಡಿಯುಡಿಸಿ ಜಿಲ್ಲಾ ಯೋಜನಾ ನಿರ್ದೇಶಕ ಮುನ್ನವರ ದೌಲಾ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ಚಂದ್ರಶೇಖರ್, ಜಿಲ್ಲಾ ಕಾರ್ಮಿಕ ಅಧಿಕಾರಿಗಳು, ಮಹಾನಗರ ಪಾಲಿಕೆ ಅಧಿಕಾರಿಗಳು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ರಾಜ್ಯ ಸಮಿತಿ ಸದಸ್ಯೆ ನರ್ಮದಾ ಸೌದಾ ಹಾಗೂ ಮ್ಯಾನುಯಲ್ ಸ್ಕ್ಯಾವೆಂಜರ್ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.



