ನಿಖರ ಅಂಕಿ-ಅಂಶಗಳೇ ಅಭಿವೃದ್ಧಿ ಯೋಜನೆಗಳಿಗೆ ದಿಕ್ಸೂಚಿ: ರಾಹುಲ್ ಎಸ್. ಸಂಕನೂರ

ಸರ್ಕಾರದ ಯೋಜನೆಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸಲು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಮೂಲಸೌಕರ್ಯ ಮತ್ತು ಸೇವೆಗಳನ್ನು ಒದಗಿಸಲು ತಳಮಟ್ಟದ ನಿಖರ ಅಂಕಿ-ಅಂಶಗಳು ಅತ್ಯಂತ ಪ್ರಮುಖವಾಗಿವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಎಸ್. ಸಂಕನೂರ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಾನವ ಅಭಿವೃದ್ಧಿ ವರದಿ-2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ-2031 ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ವಿವಿಧ ಇಲಾಖೆಗಳು ಲಭ್ಯವಿರುವ ಅಂಕಿ-ಅಂಶಗಳನ್ನು ಸೂಕ್ಷ್ಮವಾಗಿ ವಿಶ್ಲೇಷಿಸಿ ಭವಿಷ್ಯದ ಅಭಿವೃದ್ಧಿ ಯೋಜನೆಗಳನ್ನು ರೂಪಿಸಬೇಕು ಎಂದು ಸೂಚಿಸಿದರು.
ಶಾಲೆಯಿಂದ ಹೊರಗುಳಿದ ಮಕ್ಕಳು, ಕುಡಿಯುವ ನೀರಿನ ಸಮಸ್ಯೆ, ಶಿಶು ಮತ್ತು ತಾಯಂದಿರ ಮರಣ ಪ್ರಮಾಣ ಸೇರಿದಂತೆ ಪ್ರಮುಖ ಸಾಮಾಜಿಕ ಸವಾಲುಗಳನ್ನು ಗುರುತಿಸಿ ಪರಿಹಾರ ರೂಪಿಸಲು ಈ ವರದಿ ಮಾರ್ಗದರ್ಶಿಯಾಗಲಿದೆ ಎಂದು ತಿಳಿಸಿದರು. ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಗ್ರಾಮ ಪಂಚಾಯಿತಿಗಳನ್ನು ಗುರುತಿಸಿ, ಅಲ್ಲಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ತಾಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಶೇಷ ಕಾರ್ಯಯೋಜನೆಗಳನ್ನು ರೂಪಿಸುವ ಅಗತ್ಯವಿದೆ ಎಂದರು.
ತಾಂತ್ರಿಕ ಬೆಂಬಲ ಸಂಸ್ಥೆಯ ಸಂಯೋಜಕಿ ಹಾಗೂ ರಾಜ್ಯ ಮಟ್ಟದ ತಾಂತ್ರಿಕ ಸಮಿತಿ ಸದಸ್ಯೆ ಡಾ. ಛಾಯಾ ದೇಗಾಂವಕರ್ ಮಾತನಾಡಿ, 2030ರ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ಉದ್ದೇಶದಿಂದ ರಾಜ್ಯದ ಐದನೇ ಮಾನವ ಅಭಿವೃದ್ಧಿ ವರದಿಯನ್ನು ಅಂತಿಮಗೊಳಿಸಲಾಗುತ್ತಿದ್ದು, ಅದರ ಆಧಾರದ ಮೇಲೆ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.
ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಜಾರಿಗೊಂಡಿರುವ ಪಂಚಾಯಿತಿ ಮಟ್ಟದ ಸುಸ್ಥಿರ ಅಭಿವೃದ್ಧಿ ಸೂಚ್ಯಂಕದ ಪ್ರಕಾರ, ಗುಣಮಟ್ಟದ ಶಿಕ್ಷಣ ವಿಭಾಗದಲ್ಲಿ ಕಲಬುರಗಿ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ ಎಂದು ಅವರು ತಿಳಿಸಿದರು.
ಈ ವರದಿ ಕೇವಲ ತಲಾ ಆದಾಯವನ್ನಷ್ಟೇ ಪರಿಗಣಿಸದೆ ಶಿಕ್ಷಣ, ಆರೋಗ್ಯ, ಜೀವನಮಟ್ಟ ಮತ್ತು ಸಾಮಾಜಿಕ ಅಭಿವೃದ್ಧಿಯ ವಿವಿಧ ಅಂಶಗಳನ್ನು ಒಳಗೊಂಡಿದೆ. ಹೆಣ್ಣುಮಕ್ಕಳ ಶಾಲಾ ಡ್ರಾಪ್‌ಔಟ್ ತಡೆಗಟ್ಟುವುದು, ತಾಯಂದಿರು ಮತ್ತು ಮಕ್ಕಳ ಮರಣ ಪ್ರಮಾಣ ಕಡಿಮೆ ಮಾಡುವುದು, ಸ್ವಯಂ ಉದ್ಯೋಗದ ಮೂಲಕ ತಲಾ ಆದಾಯ ಹೆಚ್ಚಿಸುವುದು ಹಾಗೂ ಪರಿಸರ ಸಮತೋಲನ ಕಾಪಾಡಲು 17 ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಅನುಷ್ಠಾನಗೊಳಿಸುವುದು ವರದಿಯ ಪ್ರಮುಖ ಉದ್ದೇಶವಾಗಿದೆ ಎಂದು ವಿವರಿಸಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ಇಕ್ರಮ್ ಶರೀಫ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಧುಮತಿ, ಯೋಜನಾ ನಿರ್ದೇಶಕ ಜಗದೇವಪ್ಪ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.



