ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಒತ್ತಾಯ • ವಿದ್ಯಾರ್ಥಿಗಳ ಭವಿಷ್ಯ ರಕ್ಷಿಸುವಂತೆ ಮನವಿ

ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತರಬೇಕು ಎಂದು ಒತ್ತಾಯಿಸಿ ಶನಿವಾರ ನಗರದಲ್ಲಿ ವಿವಿಧ ಕನ್ನಡಪರ ಹಾಗೂ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ನಗರದ ಜಗತ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ, ದೇಶದಾದ್ಯಂತ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ ಘಟನೆಗಳಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, ಲಕ್ಷಾಂತರ ವಿದ್ಯಾರ್ಥಿಗಳು ವರ್ಷಗಳ ಪರಿಶ್ರಮ, ಸಮಯ ಮತ್ತು ಹಣ ವ್ಯಯಿಸಿ ಪರೀಕ್ಷೆಗೆ ಸಿದ್ಧರಾಗುತ್ತಾರೆ. ಆದರೆ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳು ಅವರ ಶ್ರಮವನ್ನು ವ್ಯರ್ಥಗೊಳಿಸುತ್ತಿದ್ದು, ಪರೀಕ್ಷಾ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ಕುಗ್ಗಿಸುತ್ತಿವೆ ಎಂದು ಹೇಳಿದರು.
ದೆಹಲಿಯ ಜಂತರ್ ಮಂತರ್‌ನಲ್ಲಿ ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಕೂಡಲೇ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಭದ್ರತೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ನೀಟ್ ಸೇರಿದಂತೆ ಎಲ್ಲಾ ರಾಷ್ಟ್ರೀಯ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಕಠಿಣ ಕ್ರಮ ಜರುಗಿಸಬೇಕು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ಭವಿಷ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಭೀಮಾಶಂಕರ ಮಾಡಿಯಾಳ, ಎಂ.ಬಿ. ಸಜ್ಜನ್, ಅಲ್ತಾಫ್ ಇನಾಂದಾರ್, ಅರ್ಜುನ್ ಗೊಬ್ಬೂರ, ಚಂದು ಜಾಧವ್, ಮಲ್ಲಿಕಾರ್ಜುನ ಪಾಟೀಲ, ಮೌಲಾ ಮುಲ್ಲಾ, ದಿಲೀಪ್ ನಾಗೂರೆ, ಕರೆಪ್ಪ ಕರಗೊಂಡ, ಸಾಜಿದ್ ಅಹ್ಮದ್, ಶಾಂತಾ ಸರಡಗಿ, ದೇವಾನಂದ ಬಿರಾದಾರ್, ನಾಗಯ್ಯಸ್ವಾಮಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.



