ಅಪರಾಧ

ಕಲಬುರಗಿಯಲ್ಲಿ ‘ಆಪರೇಷನ್ ರೈಸ್’ ಹಾಗೂ ‘ಬೀ ದ ಬ್ರೋ’ ಅಭಿಯಾನಕ್ಕೆ ಚಾಲನೆ

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ನಗರ-ಜಿಲ್ಲಾ ಪೊಲೀಸ್ ಇಲಾಖೆಯ ವಿಶೇಷ ಅಭಿಯಾನ ಆರಂಭ

ಮಾದಕ ವಸ್ತುಗಳ ದುರುಪಯೋಗ ತಡೆ ಹಾಗೂ ಯುವಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಗರ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ‘ಆಪರೇಷನ್ ರೈಸ್’ ಹಾಗೂ ‘ಬೀ ದ ಬ್ರೋ’ ಅಭಿಯಾನಕ್ಕೆ ಸೋಮವಾರ ನಗರ ಪೊಲೀಸ್ ಆಯುಕ್ತಾಲಯದಲ್ಲಿ ಚಾಲನೆ ನೀಡಲಾಯಿತು.

ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ನಗರ ಉಪ ಪೊಲೀಸ್ ಆಯುಕ್ತರಾದ ಶ್ರೀಮತಿ ಶಾಲು ಹಾಗೂ ಪ್ರವೀಣ ನಾಯಕ್ ಅವರು ಅಭಿಯಾನದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜೂನ್ 30ರಂದು ರಾಜ್ಯಾದ್ಯಂತ ಆಚರಿಸಲಾದ ಅಂತರರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಅಂಗವಾಗಿ ರಾಜ್ಯ ಸರ್ಕಾರ ಆರಂಭಿಸಿರುವ ಈ ಅಭಿಯಾನವನ್ನು ಕಲಬುರಗಿ ನಗರ ಹಾಗೂ ಜಿಲ್ಲೆಯಾದ್ಯಂತ ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.

ಮಾದಕ ವಸ್ತುಗಳ ಸೇವನೆಯಿಂದ ಮಾನಸಿಕ ಆರೋಗ್ಯ, ಕುಟುಂಬ ಸಂಬಂಧಗಳು, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ವೃತ್ತಿ ಜೀವನ ಹಾಗೂ ಸಾಮಾಜಿಕ ಬದುಕಿನ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. ಇತ್ತೀಚೆಗೆ ಡ್ರಗ್ಸ್ ಸೇವನೆಯಿಂದ ಸಂಭವಿಸುತ್ತಿರುವ ದುರ್ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಶಾಲೆ, ಕಾಲೇಜುಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ರಾತ್ರಿ ಜಾಗರಣೆ, ಸ್ನೇಹಿತರ ಒತ್ತಡ, ಮಾನಸಿಕ ಸಮಸ್ಯೆಗಳು ಸೇರಿದಂತೆ ವಿವಿಧ ಕಾರಣಗಳಿಂದ ಯುವಕರು ಮಾದಕ ವಸ್ತುಗಳತ್ತ ಆಕರ್ಷಿತರಾಗದಂತೆ ‘ಬೀ ದ ಬ್ರೋ’ ಅಭಿಯಾನದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. KSP App ಮೂಲಕ ಗಾಂಜಾ, ಡ್ರಗ್ಸ್ ಮಾರಾಟ, ಮಾದಕ ವಸ್ತುಗಳ ಅಕ್ರಮ ಚಟುವಟಿಕೆ ಹಾಗೂ ಇತರ ಕಾನೂನುಬಾಹಿರ ಕೃತ್ಯಗಳ ಬಗ್ಗೆ ಸಾರ್ವಜನಿಕರು ಅನಾಮಧೇಯವಾಗಿ ಮಾಹಿತಿ ನೀಡಬಹುದಾಗಿದೆ. ಮಾಹಿತಿ ನೀಡುವವರ ಗೌಪ್ಯತೆಯನ್ನು ಸಂಪೂರ್ಣವಾಗಿ ಕಾಪಾಡಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.

ಅಭಿಯಾನದ ಅಂಗವಾಗಿ ಶಾಲೆ ಹಾಗೂ ಕಾಲೇಜುಗಳಲ್ಲಿ ಆಂಟಿ ಡ್ರಗ್ ಸಮಿತಿಗಳನ್ನು ರಚಿಸಲಾಗುವುದು. ಈ ಸಮಿತಿಗಳಲ್ಲಿ ಪ್ರಾಂಶುಪಾಲರು, ದೈಹಿಕ ಶಿಕ್ಷಣ ಶಿಕ್ಷಕರು, ವಿದ್ಯಾರ್ಥಿ ಪ್ರತಿನಿಧಿಗಳು ಹಾಗೂ ಸ್ಥಳೀಯ ಬೀಟ್ ಪೊಲೀಸ್ ಸಿಬ್ಬಂದಿ ಸದಸ್ಯರಾಗಿದ್ದು, ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಳಕೆ ತಡೆಗಟ್ಟಲು ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button