ಮಳೆ ವೈಫಲ್ಯ: ಪ್ರತಿ ಎಕರೆಗೆ ₹50 ಸಾವಿರ ಪರಿಹಾರಕ್ಕೆ ಆಗ್ರಹ
ರೈತರ ಸಂಕಷ್ಟ ನಿವಾರಣೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಸಂಯುಕ್ತ ಕಿಸಾನ್ ಮೋರ್ಚಾ ಮನವಿ

ಮುಂಗಾರು ಮಳೆ ವೈಫಲ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಹಾಗೂ ಕೃಷಿ ಕಾರ್ಮಿಕರ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಬೇಕು. ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಜಿಲ್ಲಾ ಘಟಕವು ಒತ್ತಾಯಿಸಿದೆ.
ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಸಂಘಟನೆಯ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಹವಾಮಾನ ವೈಪರೀತ್ಯ ಮತ್ತು ಕಡಿಮೆ ಮಳೆಯಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿತ್ತನೆ ಮಾಡಿದವರಿಗೂ, ಬಿತ್ತನೆ ಮಾಡಲು ಸಾಧ್ಯವಾಗದವರಿಗೂ ಸಮರ್ಪಕ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ರಸಗೊಬ್ಬರ ಖರೀದಿಯ ವೇಳೆ ರೈತರ ಮೇಲೆ ಅನಗತ್ಯ ವಸ್ತುಗಳನ್ನು ಖರೀದಿಸುವ ಒತ್ತಡವನ್ನು ತಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕು. 60 ವರ್ಷ ಮೇಲ್ಪಟ್ಟ ರೈತರು ಹಾಗೂ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ₹10 ಸಾವಿರ ಗೌರವಧನ ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಮಳೆ ಕೊರತೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳನ್ನು ಆರಂಭಿಸಿ, ರಸ್ತೆ ನಿರ್ಮಾಣ ಹಾಗೂ ಕೃಷಿ ಸಂಬಂಧಿತ ಕಾಮಗಾರಿಗಳಿಗೆ ಕಾರ್ಮಿಕರನ್ನು ನಿಯೋಜಿಸಬೇಕು ಎಂದು ಆಗ್ರಹಿಸಲಾಗಿದೆ.
ಸರ್ಕಾರಿ ಸಕ್ಕರೆ ಕಾರ್ಖಾನೆಯನ್ನು ಶೀಘ್ರ ಆರಂಭಿಸಿ ಕಬ್ಬಿಗೆ ಪ್ರತಿ ಕ್ವಿಂಟಲ್ಗೆ ₹5 ಸಾವಿರ ಬೆಲೆ ನಿಗದಿಪಡಿಸಬೇಕು. ರೈತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಬ್ಯಾಂಕುಗಳು ಸಾಲ ವಸೂಲಾತಿ ನೋಟಿಸ್ಗಳನ್ನು ನೀಡುವುದನ್ನು ಸ್ಥಗಿತಗೊಳಿಸಬೇಕು. ತೋಟದ ಮನೆಗಳಿಗೆ ಏಕಹಂತದ ವಿದ್ಯುತ್ ಸಂಪರ್ಕ ಒದಗಿಸಬೇಕು. ಜಿಲ್ಲೆಗೆ ಹಂಚಿಕೆಯಾಗಿರುವ ಉಳಿದ ನೀರನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಶಿವರಾಯ ಮುದಾಳೆ, ವೀರಾರೆಡ್ಡಿ ಪಾಟೀಲ, ವಿವಿಧ ರೈತ ಸಂಘಟನೆಗಳ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.



