
ನಗರಕ್ಕೆ ಆಗಮಿಸಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜತಿನ್ ಪಾಂಡೆ ಅವರನ್ನು ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಅಧ್ಯಕ್ಷ ಹಾಗೂ ವಿಭಾಗೀಯ ಉಸ್ತುವಾರಿ ಮಲ್ಲಿಕಾರ್ಜುನ ಎಸ್. ಸಾರವಾಡ ನೇತೃತ್ವದ ನಿಯೋಗ ಭೇಟಿ ಮಾಡಿ, ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ನಡೆಯುತ್ತಿರುವ ವಿವಿಧ ಅಕ್ರಮಗಳ ಕುರಿತು ಮನವಿ ಸಲ್ಲಿಸಿತು.
ಜಿಲ್ಲೆಯ ಆರೋಗ್ಯ ಕೇಂದ್ರಗಳು ಹಾಗೂ ಕಚೇರಿಗಳಲ್ಲಿ ಕಡ್ಡಾಯ ನಿಯಮಗಳನ್ನು ಉಲ್ಲಂಘಿಸಿ, ಕೆಟಿಪಿಪಿ ಕಾಯ್ದೆಯನ್ನು ಕಡೆಗಣಿಸಿ ಹೊರಗುತ್ತಿಗೆ ಏಜೆನ್ಸಿಗಳಿಗೆ ನಿಯಮಬಾಹಿರವಾಗಿ ಟೆಂಡರ್ ನೀಡಿರುವ ಆರೋಪದ ಕುರಿತು ಸಮಗ್ರ ತನಿಖೆ ನಡೆಸಿ, ಸಂಬಂಧಪಟ್ಟ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ನಿಯೋಗ ಆಗ್ರಹಿಸಿತು.
ಅದೇ ರೀತಿ, ಫರತಾಬಾದ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಾಲಾ–ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತವಾಗಿ ವಿತರಿಸಬೇಕಿದ್ದ ಸರ್ಕಾರದ ಶುದ್ಧ ಯೋಜನೆಯ ಸ್ಯಾನಿಟರಿ ಪ್ಯಾಡ್‌ಗಳನ್ನು ನಾಶಪಡಿಸಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಲಾಯಿತು. ಈ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿರುವ ಆಡಳಿತ ವೈದ್ಯಾಧಿಕಾರಿ ಸಂತೋಷ್ ಪಾಟೀಲ, ಫಾರ್ಮಸಿಸ್ಟ್ ಹಾಗೂ ಸಂಬಂಧಪಟ್ಟ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಇದಲ್ಲದೆ, ಸಾರ್ವಜನಿಕ ಹಣದಿಂದ ಖರೀದಿಸಿದ್ದ ಸಾಮಗ್ರಿಗಳನ್ನು ನಾಶಪಡಿಸಿರುವ ಹಿನ್ನೆಲೆಯಲ್ಲಿ ಉಂಟಾದ ನಷ್ಟದ ಮೊತ್ತವನ್ನು ಸಂಬಂಧಪಟ್ಟ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು ಎಂದು ಜಯ ಕರ್ನಾಟಕ ಸಂಘಟನೆ ಪ್ರಧಾನ ಕಾರ್ಯದರ್ಶಿಗೆ ಮನವಿ ಸಲ್ಲಿಸಿ ಆಗ್ರಹಿಸಿತು.



